ಕೈ 20 ಟಾರ್ಗೆಟ್ ಗೆ ಠಕ್ಕರ್ ಕೊಡಲು ಕಮಲ-ದಳ ಪ್ಲಾನ್; ಲೋಕಸಭೆಗೆ ಎಚ್ ಡಿ ಕುಮಾರಸ್ವಾಮಿ ಸ್ಪರ್ಧೆ!? ಮೈತ್ರಿ ಲೆಕ್ಕಾಚಾರವೇನು?
ಬೆಂಗಳೂರು, ಸೆಪ್ಟೆಂಬರ್ 15: 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೀನಾಯವಾಗಿ ಸೋಲು ಅನುಭವಿದ್ದು, ಲೋಕಸಭಾ ಚುನಾವಣೆಗೆ ಮೈತ್ರಿ ಮೂಲಕ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಕಮಲ-ದಳ ಪ್ಲಾನ್ ನಡೆಸಿದೆ ಎನ್ನಲಾಗಿದೆ.
ಈಗಾಗಲೇ ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಮೈತ್ರಿ ಕುರಿತು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಈಗಾಗಲೇ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಮೈತ್ರಿ ವಿಚಾರದಲ್ಲಿ 28 ಕ್ಷೇತ್ರಗಳ ಪೈಕಿ, 4 ಕ್ಷೇತ್ರವನ್ನ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.

ಇತ್ತ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲಿಯೂ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುವ ತಂತ್ರಗಾರಿಕೆಯನ್ನ ನಡೆಸಿದೆ. ಅಲ್ಲದೇ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ಈ ಬಾರೀ ಪ್ರಭಾವಿ ಸಚಿವರನ್ನ ಕಣಕ್ಕಿಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಮೂಲಕ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಂದಾಗಿದ್ದು, 28 ಕ್ಷೇತ್ರದಲ್ಲೂ ಘಟಾನುಘಟಿ ನಾಯಕರನ್ನ ಕಣಕ್ಕಿಳಿಸಲು ಸಿದ್ದತೆ ನಡೆಸಿದೆ ಎನ್ನಲಾಗಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವು ಸಾಧಿಸಿದ್ದು, ಅದರಂತೆ 2024 ರ ಲೋಕಸಭಾ ಚುನಾವಣೆಯಲ್ಲಿ 25 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ಮೈತ್ರಿ ಮೂಲಕ 28 ಕ್ಷೇತ್ರದಲ್ಲೂ ಪ್ರಭಾವಿ ನಾಯಕರ ಸ್ಪರ್ಧೆಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.

ಈ ಬಾರಿಯ 13 ಜನ ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಮಿಸ್ ಆಗಲಿದೆ ಎನ್ನಲಾಗಿದ್ದು, ಗೆಲ್ಲುವಂತಹ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ. ಇನ್ನೂ ಜೆಡಿಎಸ್ ಪಕ್ಷಕ್ಕೆ ನೀಡುವ ನಾಲ್ಕು ಕ್ಷೇತ್ರಗಳಲ್ಲಿ ಪ್ರಭಾವಿ ನಾಯಕರನ್ನ ಕಣಕ್ಕಿಳಿಸುವಂತೆ ಬಿಜೆಪಿ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ. ಈಗಾಗಲೇ ತುಮಕೂರು,ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಹಾಸನ ಕ್ಷೇತ್ರವನ್ನ ಜೆಡಿಎಸ್ ಕೇಳಿದ್ದು, ಈ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರವನ್ನ ಜೆಡಿಎಸ್ ಗೆ ಬಿಜೆಪಿ ನೀಡಲಿದೆ.
ಒಟ್ಟು ನಾಲ್ಕು ಕ್ಷೇತ್ರಗಳನ್ನ ಬಿಜೆಪಿ ಹೈಕಮಾಂಡ್ ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲಿದ್ದು, ಈ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಕುಮಾರಸ್ವಾಮಿ ಅವರು ಜೆಡಿಎಸ್ ನ ಶಾಸಕರ ಜೊತೆಗೆ ಸಭೆ ನಡೆಸಿದ್ದು, ಮೈತ್ರಿ ವಿಚಾರವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಹಾಸನ ಕ್ಷೇತ್ರ ಜೆಡಿಎಸ್ ನ ಭದ್ರಕೋಟೆಯಾಗಿದ್ದು, ಸದ್ಯತೆ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನ ಅನರ್ಹಗೊಳಿಸಿದ್ದು, ಈ ಬಾರೀ ಹಾಸನ ಕ್ಷೇತ್ರ ಜೆಡಿಎಸ್ ಕೈ ತಪ್ಪುವ ಆತಂಕ ಎದುರಾಗಿದೆ. ಹೀಗಾಗಿ ಈ ಬಾರೀ ಹಾಸನ ಕ್ಷೇತ್ರದಿಂದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ್ರು ಸ್ಪರ್ಧಿಸಲಿ ಎಂದು ಹಾಸನ ಜೆಡಿಎಸ್ ನಾಯಕರು ಒತ್ತಾಡ ಹಾಕಿದ್ದು, ತೀವ್ರ ಅಗತ್ಯಬಿದ್ದರೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಸಹ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.












Click it and Unblock the Notifications