B.C. Nagesh Death: ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ; ರಾಜಕೀಯ ಗಣ್ಯರಿಂದ ಸಂತಾಪ
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ರಾಜ್ಯದ ಮಾಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ (ಆಗಸ್ಟ್ 19) ನಿನ್ನೆ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದಲ್ಲಿರುವ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಅವರ ಆರೋಗ್ಯ ಸ್ಥಿತಿ ಏಕಾಏಕಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ, ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ತಿಪಟೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಬಿ.ಸಿ. ನಾಗೇಶ್ ಅವರು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಹಲವು ಸುಧಾರಣಾ ಕ್ರಮಗಳಿಗೆ ಒತ್ತು ನೀಡಿದ್ದ ಅವರು ಪಕ್ಷದ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು.

ಬಿ.ಸಿ. ನಾಗೇಶ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ನಾಯಕರು, ಕಾರ್ಯಕರ್ತರು ಸೇರಿದಂತೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂತಾಪ ವ್ಯಕ್ತವಾಗಿದೆ. ಅವರ ನಿಧನ ಪಕ್ಷಕ್ಕೆ ಹಾಗೂ ತಿಪಟೂರು ಕ್ಷೇತ್ರದ ಜನತೆಗೆ ತುಂಬಲಾರದ ನಷ್ಟ ಎಂದು ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.
ಸಿಎಂ ಡಿ ಕೆ ಶಿವಕುಮಾರ್ ಸಂತಾಪ
ಮಾಜಿ ಶಾಸಕ, ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರ ನಿಧನಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಸರಳತೆಯಿಂದ ನಾಗೇಶ್ ಅವರು ಎಲ್ಲರ ಆಪ್ತರಾಗಿದ್ದರು. ನೇರ ನಡೆ- ನುಡಿಗೆ ಹೆಸರಾಗಿದ್ದರು. ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಜನರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು. ಶಾಸಕರಾಗಿ ಹಾಗೂ ಶಿಕ್ಷಣ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯ.
ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ವಿದ್ಯಾರ್ಥಿಗಳ ಹಿತದ ಬಗ್ಗೆ ಅವರು ವಿಶೇಷ ಕಾಳಜಿ ಹೊಂದಿದ್ದರು. ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಸೌಹಾರ್ದಯುತ ಸಂಬಂಧ ಕಾಪಾಡಿಕೊಂಡಿದ್ದರು. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ದುಃಖತಪ್ತ ಕುಟುಂಬದ ಸದಸ್ಯರಿಗೆ, ಬಂಧುಬಳಗಕ್ಕೆ ಹಾಗೂ ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ಮತ್ತು ಧೈರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸರಳ ಸಜ್ಜನಿಕೆಯ ವ್ಯಕ್ತಿ ಬಿ.ಸಿ.ನಾಗೇಶ್ : ಬಸವರಾಜ ಬೊಮ್ಮಾಯಿ
ನನ್ನ ಆತ್ಮೀಯ ಸ್ನೇಹಿತರಾಗಿದ್ದ, ಸರಳ ಸಜ್ಜನಿಕೆಯ ವ್ಯಕ್ತಿತ್ವದ, ಮಾಜಿ ಶಾಸಕರೂ ಹಾಗೂ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿ ಅತ್ಯಂತ ಸಮರ್ಥವಾಗಿ ಸೇವೆ ಸಲ್ಲಿಸಿದ್ದ ತಿಪಟೂರಿನ ಬಿ.ಸಿ. ನಾಗೇಶ್ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖಿತನಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ತಿಪಟೂರು ಮತ್ತು ತುಮಕೂರು ಭಾಗದ ಜನರ ಸೇವೆಗೆ ಅವರು ನೀಡಿದ ಕೊಡುಗೆ ಸದಾ ಸ್ಮರಣೀಯ. ಪಕ್ಷದ ಸಂಘಟನೆಯನ್ನು ಬಲಪಡಿಸುವಲ್ಲಿಯೂ ಅವರು ಅಪಾರ ಶ್ರಮ ವಹಿಸಿದ್ದರು. ಅವರ ಅಗಲಿಕೆಯಿಂದ ಬಿಜೆಪಿ ಪಕ್ಷಕ್ಕೆ ಮಾತ್ರವಲ್ಲದೆ, ತುಮಕೂರು ಭಾಗದ ಜನತೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದು, ಮಾಜಿ ಮಂತ್ರಿಗಳು, ತಿಪಟೂರು ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರು, ಸರಳರು ಮತ್ತು ಸಜ್ಜನಿಕೆಯ ವ್ಯಕ್ತಿತ್ವದ ಜನಾನುರಾಗಿ ಶ್ರೀ ಬಿ.ಸಿ.ನಾಗೇಶ್ ಅವರು ನಿಧನರಾದರೆಂಬ ಸುದ್ದಿ ತಿಳಿದು ಅತೀವ ನೋವುಂಟಾಯಿತು. ಪ್ರಾಥಮಿಕ ಶಿಕ್ಷಣ ಸಚಿವರಾಗಿ ಅನೇಕ ಉತ್ತಮ ಕೆಲಸಗಳನ್ನು ಮಾಡಿರುವ ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ದುಃಖವನ್ನು ಭರಿಸುವ ಶಕ್ತಿ ಚೈತನ್ಯವನ್ನು ದುಃಖತಪ್ತ ಕುಟುಂಬಕ್ಕೆ, ಅಭಿಮಾನಿಗಳಿಗೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.


Click it and Unblock the Notifications
