ಕಾರ್ ಬಿಟ್ಟು ಸೈಕಲ್ ಏರಿದ ಬಿಜೆಪಿ ನಾಯಕರು: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ!
ಬೆಂಗಳೂರು, ಜೂನ್ 20: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿದ್ದಕ್ಕಾಗಿ ಬಿಜೆಪಿ ನಾಯಕರು ಬೀದಿಗಿಳಿದು ಹೋರಾಟ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಚೇರಿಯಿಂದ ವಿಧಾನಸೌಧದವರೆಗೂ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳೂ ಸೇರಿ ಈ ಜಾಥಾ ಏರ್ಪಡಿಸಿದ್ದವು. ಇಳಿಸಿ ಇಳಿಸಿ ತೈಲಬೆಲೆ ಇಳಿಸಿ, ತೊಲಗಿಸಿ ತೊಲಗಿಸಿ ರಾಜ್ಯ ಸರಕಾರ ತೊಲಗಿಸಿ, ಬೇಕೇ ಬೇಕು ನ್ಯಾಯ ಬೇಕು, ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರಕ್ಕೆ ಧಿಕ್ಕಾರ, ಅಯ್ಯಯ್ಯೋ ಅನ್ಯಾಯ ಮೊದಲಾದ ಘೋಷಣೆಗಳನ್ನು ಕೂಗುತ್ತ ಸೈಕಲ್ ಜಾಥಾ ನಡೆಯಿತು.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿನವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ. ಬಿಜೆಪಿ ಸರಕಾರದ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ವಿಮುಖರಾಗುವುದಿಲ್ಲ ಎಂದು ತಿಳಿಸಿದರು. ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಖಂಡಿಸಿ ಇವತ್ತು ರಾಜ್ಯದಾದ್ಯಂತ ಎಲ್ಲ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ರಸ್ತೆ ತಡೆ ಮಾಡಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಸೈಕಲ್ ಜಾಥಾ ಮೂಲಕ ಸರಕಾರವನ್ನು ಎಚ್ಚರಿಸುವ ಕೆಲಸ ನಡೆಯುತ್ತಿದೆ. ನಮ್ಮ ರಾಜ್ಯ ಸಂಕಷ್ಟದಲ್ಲಿದೆ. ರೈತರು ಸಹ ಸಂಕಷ್ಟದಲ್ಲಿದ್ದಾರೆ. ಕಳೆದ 6 ತಿಂಗಳಿನಿಂದ ರೈತರು ಬರಗಾಲದಿಂದ ಪರದಾಡುತ್ತಿದ್ದಾರೆ. ಮತ್ತೊಂದೆಡೆ ಸರಕಾರದ ನಿರ್ಧಾರಗಳಿಂದ ಸಾಮಾನ್ಯ ಜನರ ಮೇಲೆ ಹೊರೆ ಆಗುತ್ತಿದೆ ಎಂದು ಆಕ್ಷೇಪಿಸಿದರು. ಇದು ಅಕ್ಷಮ್ಯ ಅಪರಾಧ ಎಂದರು.
ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ಕೆಎಸ್‍ಆರ್‍ಟಿಸಿ ಬಸ್ ಪ್ರಯಾಣದರ ಏರಿಕೆ-ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಬಗ್ಗೆ ಸಚಿವರು ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ಪೆಟ್ರೋಲ್, ಡೀಸೆಲ್ ದರ ಏರಿಕೆಯ ನಿರ್ಧಾರ ರಾಜ್ಯದ ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸರಕಾರದ ನಿರ್ಧಾರದ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದರು. ರಸ್ತೆ ತಡೆ ಮಾಡಿದರೆ, ಲಾಠಿ ಚಾರ್ಜ್ ಮಾಡುವುದಾಗಿ ಗೃಹ ಸಚಿವರ ಹೇಳಿಕೆಯ ಕುರಿತು ಗಮನ ಸೆಳೆದಾಗ, ಅದು ಮೂರ್ಖತನದ ಪರಮಾವಧಿ ಎಂದು ತಿಳಿಸಿದರು. ಬಿಜೆಪಿ, ಬಿಜೆಪಿ ಕಾರ್ಯಕರ್ತರು ಲಾಠಿಗೆ, ಯಾವುದಕ್ಕೂ ಹೆದರುವುದಿಲ್ಲ.
ರಾಜ್ಯದ ಜನರು, ರೈತರು, ಬಡವರ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ಮಾಡುವವರ ವಿರುದ್ಧ ಲಾಠಿ ಪ್ರಹಾರ ಮಾಡುವುದಾದರೆ ಇದು ದರ್ಪದ ಕ್ರಮ. ಅಧಿಕಾರದ ಅಹಂನಿಂದ ಈ ಮಾತನಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇವುಗಳಿಗೆ ಹೆದರುವ ಪ್ರಶ್ನೆ ಇಲ್ಲ. ಸರಕಾರ ಪೆಟ್ರೋಲ್- ಡೀಸೆಲ್ ದರ ಕಡಿಮೆ ಮಾಡುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.












Click it and Unblock the Notifications