Lok Sabha Election 2024: ಗೋ-ಬ್ಯಾಕ್ ಶೋಭಾ: ಸಮೀಕ್ಷೆಯಲ್ಲಿ ಬಿಜೆಪಿಗೆ ಅಚ್ಚರಿ
ಬೆಂಗಳೂರು, ಮಾರ್ಚ್ 05: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಪೂರ್ವ ಸಮೀಕ್ಷೆಯ ವರದಿಗಳು ಹೊರ ಬೀಳುತ್ತಿದ್ದು, ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಕಾಂಗ್ರೆಸ್‌ಗೆ ಆಘಾತ ಎದುರಾಗಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಈ ಬಾರಿಯೂ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳುತ್ತಿವೆ.
ಈ ಹಿಂದೆ ಹೊರಬಿದ್ದ ಜೀ ನ್ಯೂಸ್- ಮೆಟ್ರಿಕ್ಸ್ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 23 ಮತ್ತು ಕಾಂಗ್ರೆಸ್ 5 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿತ್ತು. ಇದೀಗ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ಬಿಡುಗಡೆಯಾಗಿದ್ದು, ಈ ಸಮೀಕ್ಷೆಯ ಪ್ರಕಾರವೂ ಬಿಜೆಪಿಗೆ ಭರ್ಜರಿ ಜಯ ಸಿಗಲಿದ್ದು, ಕಾಂಗ್ರೆಸ್ ಕೆಲವೇ ಕೆಲವು ಕ್ಷೇತ್ರಗಳಲ್ಲಿ ಗೆಲ್ಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದ್ದು, ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಈ ಪೈಕಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಳೆದ ಅವಧಿಯಂತೆ ಈ ಬಾರಿಯೂ ಸಹ ಬಿಜೆಪಿ ಮುನ್ನೆಡೆ ಸಾಧಿಸುತ್ತದೆ ಎಂದು ಅಂದಾಜಿಸಲಾಗಿದೆ.
ಬಿಜೆಪಿ ಭದ್ರಕೋಟೆಯಾಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಕಳೆದ ಎರಡು ಅವಧಿಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಹಾಲಿ ಸಂಸದೆ ಈ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಬಾರಿ ಕ್ಷೇತ್ರದಿಂದ ಬಲಿಷ್ಠ ಅಭ್ಯರ್ಥಿಯನ್ನು ಕಣಕ್ಕಿಲಿಸಲು ಬಿಜೆಪಿ ಸಜ್ಜಾಗುತ್ತಿದೆ.

ಬಿಜೆಪಿ ಭದ್ರಕೋಟೆಯಾಗಿರುವ ಉಡುಪಿ-ಚಿಕ್ಕಮಗಳೂರಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಸಲು ಹೈಕಮಾಂಡ್ ಚಿಂತನೆ ನಡೆಸುತ್ತಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ಸಿ.ಟಿ.ರವಿ, ಡಿ.ಎನ್.ಜೀವರಾಜ್ ಹೆಸರು ಕೇಳಿ ಬರುತ್ತಿದೆ. ಈ ಪೈಕಿ ಬಿಜೆಪಿ ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎನ್ನುವುದು ಕುತೂಹಲಕಾರಿಯಾಗಿದೆ. ಅಥವಾ ಗೆಲುವಿನ ಕ್ಷೇತ್ರವಾದ ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ಕೂಡ ಆಶ್ಚರ್ಯ ಇಲ್ಲ.
ಸದ್ಯ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳಾಗಿರುವ ಸಿ.ಟಿ ರವಿ ಹಾಗೂ ಪ್ರಮೋದ್ ಮಧ್ವರಾಜ್ ಅವರನ್ನು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಪ್ರಮುಖವಾಗಿ ಪರಿಗಣಿಸಬೇಕು ಎನ್ನುವ ಆಗ್ರಹಗಳು ಹೆಚ್ಚಾಗಿ ಕೇಳಿಬರುತ್ತಿದೆ. ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಬಗ್ಗೆ ಮತದಾರರಲ್ಲಿರುವ ಅಸಮಾಧಾನವೇ ಇದಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.
ಶೋಭಾ ಕರಂದ್ಲಾಜೆ ವಿರುದ್ಧ ಕಾರ್ಯಕರ್ತರ ಅಸಮಾಧಾನ
ಎರಡು ಬಾರಿ ಕ್ಷೇತ್ರದಲ್ಲಿ ಗೆಲವು ಸಾಧಿಸಿರುವ ಶೋಭಾ ಕರಂದ್ಲಾಜೆ ಚುನಾವಣೆ ಸಂದರ್ಭ ಹೊರತು ಪಡಿಸಿ ಬೇರೆ ಸಮಯದಲ್ಲಿ ಕ್ಷೇತ್ರಗಳಿಗೆ ಭೇಟಿ ನೀಡುವುದಿಲ್ಲ, ಕೇಂದ್ರದ ಕಾರ್ಯಕ್ರಮಗಳನ್ನು ಹೊರತು ಪಡಿಸಿ ಸಾಮಾನ್ಯ ಜನರ ಸಂಪರ್ಕಕ್ಕೆ ಸಿಗುವುದಿಲ್ಲ ಎನ್ನುವ ಆರೋಪ ಬಲವಾಗಿದೆ. ಈ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಪತ್ರ ಚಳುವಳಿಯನ್ನು ಸಹ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದಾರೆ. ಹೀಗಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಾಬಲ್ಯತೆ ಹೊಂದಿರುವ ಸಿ.ಟಿ ರವಿ ಅಥವಾ ಉಡುಪಿ ಜಿಲ್ಲೆಯಲ್ಲಿ ಹಿಡಿತ ಸಾಧಿಸಿರುವ ಪ್ರಮೋದ್ ಮಧ್ವರಾಜ್‌ಗೆ ಬಿಜೆಪಿ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರ ಆಗ್ರಹ ಜೋರಾಗಿದೆ.












Click it and Unblock the Notifications