ಬಿಜೆಪಿ ಶಾಸಕಾಂಗ ಸಭೆ: ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆಗೆ ಹಣ- ಚರ್ಚೆಯಾಗಿದ್ದೇನು?
ಬೆಳಗಾವಿ,ಡಿಸೆಂಬರ್ 13: ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದು, ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ ಎಂದು ವಿಪಕ್ಷಗಳು ಸದನದ ಹೊರಗೆ ಹಾಗೂ ಸದನದ ಒಳಗೆ ಸರ್ಕಾರದ ಕಿಡಿಕಾರಿವೆ.
ಮಂಗಳವಾರ ಬೆಳಗಾವಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲೂ ಈ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದು, ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಖಂಡಿಸಿದೆ.

ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ 13 ರಂದು ಮಧ್ಯಾನ್ಹ ರೈತರ ಹೋರಾಟ ನಡೆಯಲಿದೆ. 25 ಸಾವಿರ ರೈತರು ಭಾಗವಹಿಸುತ್ತಾರೆ ಎಂದು ಹೇಳಿದ್ದಾರೆ.
ಈ ಪ್ರತಿಭಟನಾ ಸಭೆಯಲ್ಲಿ ರಾಜ್ಯದ ರೈತ ನಾಯಕ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸದಾನಂದಗೌಡ, ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಈಶ್ವರಪ್ಪ, ಮಾಜಿ ಸಚಿವ ಶ್ರೀರಾಮುಲು, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರ ಮುಖಂಡರು ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.
ನಮ್ಮ ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೆಡೆ ಹೇಳುತ್ತಾರೆ. ಆದರೆ, ರೈತರಿಗೆ ಬರಕ್ಕೆ ಸಂಬಂಧಿಸಿ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಆದರೆ, ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ಕೊಡುವುದಾಗಿ ಪ್ರಕಟಿಸಿದ್ದಾರೆ. ಇದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ತೀವ್ರವಾಗಿ ಖಂಡಿಸಿದೆ ಎಂದು ಹೇಳಿದರು.

ಅರಮನೆ ಮೈದಾನದಲ್ಲಿ ಈಡಿಗ ಸಮಾಜದ ಸಮಾವೇಶ ನಡೆದಿದ್ದು, 500 ಕೋಟಿ ಅನುದಾನ ಕೊಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಲಿಲ್ಲ. ಆದಿ ಜಾಂಬವ ಅಭಿವೃದ್ಧಿ ನಿಗಮ, ಅಂಬೇಡ್ಕರ್ ನಿಗಮ, ಜಗಜೀವನರಾಂ ನಿಗಮ- ಈ ರೀತಿ ಎಸ್‍ಸಿ, ಎಸ್‍ಟಿ ನಿಗಮಗಳಿಗೆ ಹಣಕಾಸು ನೆರವು ನೀಡಿಲ್ಲ. ಅಲ್ಪಸಂಖ್ಯಾತರಿಗೆ ಮಾತ್ರ 10 ಸಾವಿರ ಕೋಟಿ ಪ್ರಕಟಿಸಿದ್ದು, ಇಂಥ ಕ್ರಮ ಸರಿಯಲ್ಲ ಎಂದರು.
ಅಭಿವೃದ್ಧಿಗಾಗಿ ಶಾಸಕರಿಗೆ ಹಣ ಕೊಟ್ಟಿಲ್ಲ. ಒಂದು ಕಿಮೀ ರಸ್ತೆಯನ್ನೂ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಈ ಎಲ್ಲ ವಿಷಯಗಳ ಕುರಿತು ಚರ್ಚೆ ನಡೆದಿದೆ ಎಂದು ತಿಳಿಸಿದರು.
ಎಲ್ಲ ಶಾಸಕರು ಅಧಿವೇಶನ ಮುಗಿದ ಬಳಿಕ ವಿಕಸಿತ ಭಾರತ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ತಿಳಿಸಿದ್ದಾರೆ. ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಜೆಡಿಎಸ್ ಜೊತೆಗೂಡಿ ಶ್ರಮಿಸಬೇಕು. ಅಭಿವೃದ್ಧಿ ವಿರೋಧಿ, ಅಲ್ಪಸಂಖ್ಯಾತರ ಪರ ಮಾತ್ರ ಇರುವ ಸರಕಾರಕ್ಕೆ ಪಾಠ ಕಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಇನ್ನೂ ಜಮ್ಮು- ಕಾಶ್ಮೀರದಲ್ಲಿ 370ನೇ ವಿಧಿ ರದ್ದು ಮಾಡಿದ ನರೇಂದ್ರ ಮೋದಿಯವರ ಕ್ರಮಕ್ಕೆ ಸುಪ್ರೀಂ ಕೋರ್ಟ್ ಸಮರ್ಥನೆ ನೀಡಿದೆ. ಈ ಸಂಬಂಧ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಲಾಗಿದೆ ಹಾಗೂ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ಹೇಳಿದರು.












Click it and Unblock the Notifications