ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ಶಾಸಕ ಆನಂದ್ ಸಿಂಗ್
ಬೆಂಗಳೂರು, ಏ. 20 : ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ಜೊತೆ ಪಕ್ಷದ ನಾಯಕರು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು ರಾಜೀನಾಮೆಯನ್ನು ವಾಪಸ್ ಪಡೆಯಲು ಅವರು ಒಪ್ಪಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆನಂದ್ ಸಿಂಗ್ ಕಳೆದ ಸೋಮವಾರ ರಾಜೀನಾಮೆ ನೀಡಿದ್ದರು.
ಸೋಮವಾರ ವಿಧಾನಸೌಧದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಆನಂದ್ ಸಿಂಗ್ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಅವರೊಂದಿಗೆ ಮಾತುಕತೆ ನಡೆಸಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಸಿದ್ದಾರೆ. [ಶಾಸಕ ಆನಂದ್ ಸಿಂಗ್ ರಾಜೀನಾಮೆ]

ಪಕ್ಷದ ನಾಯಕರ ಮಾತಿಗೆ ಆನಂದ್ ಸಿಂಗ್ ಒಪ್ಪಿಗೆ ಸೂಚಿಸಿದ್ದು, ಇಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿ ಮಾಡಿ ರಾಜೀನಾಮೆಯನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡಿದ್ದಾರೆ. [ಸಿಂಗ್ ರಾಜೀನಾಮೆ : ಯಾರು, ಏನು ಹೇಳಿದರು?]
ಸೋಮವಾರ ರಾಜೀನಾಮೆ ನೀಡಿದ್ದರು : ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್ ಸಿಂಗ್ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ತಂಡ ಏ.9ರಂದು ಬಂಧಿಸಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆನಂದ್ ಸಿಂಗ್ ಏ.13ರಂದು ಜೈಲಿನಿಂದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಜೈಲಿನ ಎಡಿಜಿಪಿ ಅವರ ಮೂಲಕ ರಾಜೀನಾಮೆ ಪತ್ರವನ್ನು ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಸಲ್ಲಿಸಿದ್ದರು. ಆದರೆ, ಶಾಸಕರು ಖುದ್ದಾಗಿ ಬಂದು ಪತ್ರ ಸಲ್ಲಿಸುವ ತನಕ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ಸ್ಪೀಕರ್ ಸ್ಪಷ್ಟಪಡಿಸಿದ್ದರು.
ಏ.17ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ಆನಂದ್ ಸಿಂಗ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಜೈಲಿನಿಂದ ಹೊರಬಂದ ಅವರು ಇಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications