ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ-ಸಿಬಿಐಗೆ ದೂರು ಕೊಟ್ಟ ಶಾಸಕ
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಡಿಕೆಶಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಶಾಸಕರೊಬ್ಬರು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐಗೆ ದೂರು ಕೂಡ ಸಲ್ಲಿಸಿದ್ದಾರೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಸುಮಾರು 2,000 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಶೇ 15ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಡಿಕೆಶಿ ಬೆಂಗಳೂರಿನ ಕಾಮಗಾರಿಗಳ ಗುತ್ತಿಗೆ ನೀಡಲು ಟೆಂಡರ್ ಕರೆದಿಲ್ಲ, ಹಾಗೆಯೇ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಇಡಿ ಹಾಗೂ ಸಿಬಿಐಗೆ ದೂರು ನೀಡಿದ್ದಾರೆ. ಅಲ್ಲದೆ ಈ ಗುತ್ತಿಗೆಗಳನ್ನು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರ ಸಂಬಂಧಿಕರಿಗೆ ನೀಡಲಾಗುತ್ತಿದೆ ಎಂದೂ ಶಾಸಕ ಮುನಿರತ್ನ ಆರೋಪಿಸಿದ್ದಾರೆ.

ಇತ್ತೀಚೆಗೆ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಂಜುನಾಥ್ ಗೌಡ ಅವರೇ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಈ ಗುತ್ತಿಗೆದಾರರಿಂದ ಶೇ 15ರಷ್ಟು ಕಮಿಷನ್ ಹಣ ಕೂಡ ಪಡೆದಿದ್ದಾರೆ ಎಂದು ಮುನಿರತ್ನ ಆರೋಪ ಮಾಡಿದ್ದಾರೆ. ಈ ಅಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೂಡ ನೇರವಾಗಿ ಭಾಗಿಯಾಗಿದ್ದಾರೆ. ಕರ್ನಾಟಕದಲ್ಲಿರುವ ಗುತ್ತಿಗೆದಾರರನ್ನು ಮೂಲೆಗುಂಪು ಮಾಡುತ್ತಿದ್ದಾರೆ. ಕೆಲವು ಕಾಮಗಾರಿಗಳಿಗೆ ತಮ್ಮದೇ ಬೇನಾಮಿ ಕಂಪನಿಗಳ ಮೂಲಕ ಟೆಂಡರ್‌ನಲ್ಲಿ ಗುತ್ತಿಗೆ ಪಡೆಯಲಾಗಿದೆ ಎಂದೂ ಆರೋಪಿಸಿದ್ದಾರೆ.
ಯಶವಂತಪುರ ವಿಧಾನಸಭಾ ಕ್ಷೇತ್ರದ ಸುಮಾರು 232 ಕೋಟಿ ಮೊತ್ತದ ಕಾಮಗಾರಿಗಳ ಗುತ್ತಿಗೆಯನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸ್ಟಾರ್ ಚಂದ್ರು ಅವರ ಸ್ಟಾರ್ ಬಿಲ್ಡರ್ಸ್‌ಗೆ ನೀಡಲಾಗಿದೆ. ಈ ಎಲ್ಲ ಅಕ್ರಮಗಳ ವಿರುದ್ಧ ಕೇಸ್ ದಾಖಲಿಸಿಕೊಂಡು, ತನಿಖೆ ನಡೆಸಬೇಕು ಎಂದು ಶಾಸಕ ಮುನಿರತ್ನ ದೂರಿನಲ್ಲಿ ತಿಳಿಸಿದ್ದಾರೆ.

ಆಂಧ್ರ ಪ್ರದೇಶದ ಕಂಪನಿಯೊಂದಕ್ಕೆ ಬರೋಬ್ಬರಿ 1,768 ಕೋಟಿ ರೂಪಾಯಿ ಪ್ಯಾಕೇಜ್‌ನ ಕಾರ್ಯಾದೇಶ ನೀಡಲು ಮುಂದಾಗಿದ್ದಾರೆ. ಇದಕ್ಕಾಗಿ 15 ಪರ್ಸೆಂಟ್ ಕಮಿಷನ್ ಹಣವನ್ನು ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಮೂಲಕ ಗುತ್ತಿಗೆದಾರರು ಅಡ್ವಾನ್ಸ್ ನೀಡಿದ್ದಾರೆ. ಒಟ್ಟಾರೆ ಇದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ನೇರ ಪಾತ್ರವಿದೆ ಎಂದು ಮುನಿರತ್ನ ದೂರಿದ್ದಾರೆ.
ಕೇವಲ ಐದೇ ವಾರ್ಡ್ ಹೊಂದಿರುವ ಯಶವಂತಪುರಕ್ಕೆ ನೂರಾರು ಕೋಟಿ ಹಣ ಹಂಚಿಕೆ ಮಾಡಲಾಗಿದೆ. ಮಾಹಿತಿ ಪ್ರಕಾರ 232 ಕೋಟಿ ರೂಪಾಯಿ ಹಂಚಿಕೆಯಾಗಿದೆ. ಕಾಂಗ್ರೆಸ್ ಮುಖಂಡ ಸ್ಟಾರ್ ಚಂದ್ರು ಮಾಲೀಕತ್ವದ ಸ್ಟಾರ್ ಬಿಲ್ಡರ್ಸ್ ಕಂಪನಿಗೆ ಭಾರಿ ಮೊತ್ತದ ಟೆಂಡರ್ ನೀಡಲು ತಯಾರಿ ನಡೆದಿದೆ. ಕೂಡಲೇ ಈ ಅಕ್ರಮಗಳನ್ನು ತಡೆಯಿರಿ ಎಂದು ಕೋರಿದ್ದಾರೆ ಎಂದೂ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಕಾಮಗಾರಿಗಳಿಗೆ ಬೇರೆ ರಾಜ್ಯದ ಗುತ್ತಿಗೆದಾರರಿಗೆ ಗುತ್ತಿಗೆ ನೀಡಲಾಗುತ್ತಿದೆ. ಸ್ಥಳೀಯ ಗುತ್ತಿಗೆದಾರರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದ್ದು, ಇದರಿಂದ ನಮ್ಮ ರಾಜ್ಯದ ಗುತ್ತಿಗೆದಾರರು ಅವಕಾಶ ವಂಚಿತರಾಗುತ್ತಿದ್ದಾರೆ ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.












Click it and Unblock the Notifications