Vivek Hebbar: ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ಇಂದು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಏಪ್ರಿಲ್ 11: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಪಕ್ಷಾಂತರ, ಪಕ್ಷ ಸೇರ್ಪಡೆ ಕಾರ್ಯಕ್ರಮಗಳು ಜೋರಾಗಿದ್ದು, ಇಂದು ಬಿಜೆಪಿ ಶಾಸಕರೊಬ್ಬರ ಪತ್ರ ಕಾಂಗ್ರೆಸ್ ಸೇರ್ಪಡೆಯಾಗಲಿರುವ ವಿಚಾರ ಬೆಳಕಿಗೆ ಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಇಂದು (ಏಪ್ರಿಲ್ 11) ಗುರುವಾರ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿವೇಕ್ ಹೆಬ್ಬಾರ್ ಜೊತೆಗೆ ಅವರ ಬೆಂಬಲಿಗರು ಕೂಡ ಜಿಲ್ಲೆಯ ಬನವಾಸಿಯಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಬಿಜೆಪಿ ಪಕ್ಷದ ವಿರುದ್ಧ ಅಸಮಾಧಾನಗೊಂಡು ವರ್ಷಗಳೇ ಕಳೆಯುತ್ತಿದೆ. 2023ರ ವಿಧಾನಸಭಾ ಚುನಾವಣೆ ಬಳಿಕ ಶಾಸಕ ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಇವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿಗಳು ಕೂಡ ಹರಿದಾಡಿದ್ದವು. ಇದಕ್ಕೆ ಪುಷ್ಠಿಕೊಡುವಂತೆ ಶಾಸಕ ಶಿವರಾಂ ಹೆಬ್ಬಾರ್ ನಡೆದುಕೊಂಡಿದ್ದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಿಂದ ದೂರ ಉಳಿದಿದ್ದ ಶಿವರಾಂ ಹೆಬ್ಬಾರ್ ರಾಜ್ಯಸಭಾ ಚುನಾವಣೆ ವೇಳೆ ಮತದಾನ ಮಾಡದೇ ಗೈರಾಗಿದ್ದರು. ಪಕ್ಷದ ಯಾವ ಸಭೆಗೂ, ಕಾರ್ಯಕ್ರಮಕ್ಕೆ ಹಾಜರಾಗುತ್ತಿರಲಿಲ್ಲ. ಅಲ್ಲದೇ ಲೋಕಸಭಾ ಚುನಾವಣೆಯಲ್ಲಂತೂ ತಟಸ್ಥರಾಗಿರುವ ಅವರು ಈವರೆಗೂ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಿಳಿದೇ ಪಕ್ಷದ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ.












Click it and Unblock the Notifications