Gruha Lakshmi scheme: ಗೃಹಲಕ್ಷ್ಮಿ ಸಮಾರಂಭದಲ್ಲಿ ಪಾಲ್ಗೊಂಡ ಎಸ್‌ಟಿ ಸೋಮಶೇಖರ್- ಬಿಜೆಪಿಗೆ ಕನ್ಫೂಸ್ ಮಾಡುತ್ತಿರುವ ಶಾಸಕ
ಬೆಂಗಳೂರು, ಆಗಸ್ಟ್ 30: ಮಾಜಿ ಸಚಿವ, ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳು ಹಲವು ದಿನಗಳಿಂದ ಹರಿದಾಡುತ್ತಿವೆ. ಇದರ ನಡುವೆಯೇ ತಮ್ಮ ಕ್ಷೇತ್ರದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಸಮಾರಂಭದಲ್ಲಿ ಅವರು ಪಾಲ್ಗೊಂಡರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರಲ್ಲಿ ಜಾಗೃತಿ ಮೂಡಿಸುವುದಾಗಿ ಸೋಮಶೇಖರ್ ತಿಳಿಸಿದರು.
ಬೆಂಗಳೂರು ನಗರದ ರಾಮೋಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಶಾಸಕನಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಹೇಳಿದರು.

ನನ್ನ ಕ್ಷೇತ್ರದಲ್ಲಿ 94,000 ಬಿಪಿಎಲ್ ಕಾರ್ಡ್‌ದಾರರಿದ್ದು, 24,000 ಮಾತ್ರ ನೋಂದಣಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಜನರಲ್ಲಿ ಜಾಗೃತಿ ಮೂಡಿಸಲು ನಾವು ಇಲ್ಲಿದ್ದೇವೆ. ಸರ್ಕಾರಿ ಕಾರ್ಯಕ್ರಮಗಳಿಗೆ ಬಂದರೆ ನಾವು ಯಾವುದೇ ಪಕ್ಷಕ್ಕೆ ಸಂಬಂಧಿಸಿದವರಾಗಿ ಇರುವುದಿಲ್ಲ. ನಮ್ಮ ಕ್ಷೇತ್ರದ ಜನರಿಗೆ ಸಹಾಯ ಮಾಡುವುದು ನಮ್ಮ ಗುರಿಯಾಗಿದೆ ಎಂದು ಸೋಮಶೇಖರ್ ಹೇಳಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ಆತ್ಮೀಯತೆ ಹೊಂದಿದ್ದೇನೆ. ಇದನ್ನೇ ಬಳಸಿಕೊಂಡು ತಮ್ಮ ಕ್ಷೇತ್ರದ ಜನತೆಗೆ ಎಲ್ಲ ರೀತಿಯ ಸಹಾಯ ಮಾಡುತ್ತೇನೆ ಎಂದು ತಿಳಿಸಿದರು.
'ಅಭಿವೃದ್ಧಿಯ ವಿಷಯ ಬಂದಾಗ ನಾವು ಜನರನ್ನು ಭೇಟಿ ಮಾಡಬೇಕು. ಇಲ್ಲಿ ನನ್ನ ಉಪಸ್ಥಿತಿಯು ಸರ್ಕಾರದ ಯೋಜನೆಗೆ ಸೀಮಿತವಾಗಿದೆ. ಅದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ' ಎಂದು ಸೋಮಶೇಖರ್ ತಿಳಿಸಿದರು.
ಸೋಮಶೇಖರ್ ಅವರು ಇತ್ತೀಚೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆ ನಂತರ ಅವರ ಕ್ಷೇತ್ರಕ್ಕೆ ಏಳು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ.
2019 ರ ವರೆಗೆ ಕಾಂಗ್ರೆಸ್‌ನಲ್ಲಿದ್ದ ಸೋಮಶೇಖರ್ ಅವರು ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಟಿಕೆಟ್‌ನಲ್ಲಿ ಯಶವಂತಪುರ ಕ್ಷೇತ್ರದಿಂದ ಮರು ಆಯ್ಕೆಯಾದರು. ಆ ಬಳಿಕ ಸಚಿವ ಸ್ಥಾನವನ್ನೂ ಗಿಟ್ಟಿಸಿಕೊಂಡರು.
ಬಿಬಿಎಂಪಿ ಚುನಾವಣೆ ಹಾಗೂ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡ ( 2019 ) ಕೆಲ ಮುಖಂಡರನ್ನು ವಾಪಸ್ ಕರೆತರಲು ಶಿವಕುಮಾರ್ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಶಿವಕುಮಾರ್ ಕಾಂಗ್ರೆಸ್ ಸೇರಲು ಇಚ್ಛಿಸುವ ನಾಯಕರನ್ನು ಬಹಿರಂಗವಾಗಿ ಸ್ವಾಗತಿಸಿದ್ದಾರೆ.
ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ, ಕೆಆರ್ ಪುರಂ ಕ್ಷೇತ್ರದ ಶಾಸಕ ಬೈರತಿ ಬಸವರಾಜ, ನವಲಗುಂದ ಕ್ಷೇತ್ರದ ಮಾಜಿ ಶಾಸಕ ಶಂಕರ ಪಾಟೀಲ ಮನೇನಕೊಪ್ಪ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರನ್ನು ಸೆಳೆಯಲು ಕಾಂಗ್ರೆಸ್ ನಾಯಕರು ಮುಂದಾಗಿದೆ. ಲೋಕಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಕನಿಷ್ಠ ಪಕ್ಷ 15 ಸ್ಥಾನಗಳನ್ನಾದರೂ ಗೆಲ್ಲಬೇಕೆನ್ನುವ ಬಯಕೆ ಹೊಂದಿದೆ.












Click it and Unblock the Notifications