ಡಿಕೆಶಿ, ಬೇಗ್ ವಿರುದ್ಧ ಪ್ರತಿಭಟನೆಗೆ ಬಿಜೆಪಿ ತಯಾರಿ
ಬೆಂಗಳೂರು. ಜ.3 : ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. ಡಿಕೆ ಶಿವಕುಮಾರ್ ಮತ್ತು ರೋಷನ್ ಬೇಗ್ ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ವಿರೋಧಿಸಿ, ಜ.6ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಸಂತೋಷ್ ಲಾಡ್ ವಿರುದ್ಧ ಮಾಡಿದ ಹೋರಾಟದ ಮಾದರಿಯಲ್ಲೇ ಮತ್ತೊಮ್ಮೆ ಹೋರಾಟ ನಡಡೆಸಲು ಯೋಜನೆ ಸಿದ್ಧಗೊಳಿಸಿದೆ.
ಗುರುವಾರ ಮಲ್ಲೇಶ್ವರಂ ಪಕ್ಷದ ಕಚೇರಿಯಲ್ಲಿ ಪಕ್ಷದ ಕೋರ್ ಕಮಿಟಿ ಮತ್ತು ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಕಳಂಕಿತರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ರಾಜ್ಯದ ಜನರಿಗೆ ಹೇಳಿದ್ದರು. ಈಗ ಅವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. [ಡಿಕೆಶಿ, ಬೇಗ್ ಸೇರ್ಪಡೆಗೆ ವಿಪಕ್ಷಗಳ ವಿರೋಧ!]

ಸಿದ್ದರಾಮಯ್ಯ ಹಲವು ಆರೋಪಗಳನ್ನು ಎದುರಿಸುತ್ತಿರುವ ರೋಷನ್ ಬೇಗ್ ಮತ್ತು ಡಿಕೆ ಶಿವಕುಮಾರ್ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ರಾಜ್ಯದ ಜನರಿಗೆ ನೀಡಿದ ಮಾತನ್ನು ಮುಖ್ಯಮಂತ್ರಿಗಳು ಊಳಿಸಿಕೊಂಡಿಲ್ಲ. ಆದ್ದರಿಂದ ಇದನ್ನು ಖಂಡಿಸಿ ರಾಜ್ಯಾದ್ಯಂತ ಪಕ್ಷ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಒತ್ತಡದಿಂದಾಗಿ ಡಿಕೆ ಶಿವಕುಮಾರ್ ಮತ್ತು ರೋಷನ್ ಬೇಗ್ ಅವರನ್ನು ಸಿದ್ದರಾಮಯ್ಯ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಕಳಂಕಿತರನ್ನು ರಕ್ಷಿಸಲು ಯತ್ನಿಸುತ್ತಿದೆ ಎಂದು ಪ್ರಹ್ಲಾದ್ ಜೋಶಿ ಆರೋಪಿಸಿದರು. [ಬಿಜೆಪಿಗೆ ಸವಾಲು ಹಾಕಿದ ಡಿಕೆ ಶಿವಕುಮಾರ್]
ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ : ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ, ಜ.8ರಂದು ಮಹಿಳಾ ಮೋರ್ಚಾ ಕಾರ್ಯಕರ್ತರು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಜ.6ರಂದು ಜಿಲ್ಲಾ ಕೇಂದ್ರ ಗಳಲ್ಲಿ ಸಂಪುಟ ವಿಸ್ತರಣೆ ವಿರುದ್ಧ ಪ್ರತಿಭಟನೆ ನಡೆಯಲಿದೆ ಎಂದು ಜೋಶಿ ಮಾಹಿತಿ ನೀಡಿದರು.
ಜ.10ರಂದು ಸಂಭವನೀಯ ಪಟ್ಟಿ : ಲೋಕಸಭೆ ಚುನಾವಣೆಗೆ ಪಕ್ಷ ಸಿದ್ದತೆ ಆರಂಭಿಸಿದೆ. ಜ.9 ಮತ್ತು 10ರಂದು ಎಲ್ಲ ಲೋಕಸಭಾ ಕ್ಷೇತ್ರಗಳ ಕೋರ್ ಕಮಿಟಿ ಸದಸ್ಯರ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಕೇಂದ್ರ ಚುನಾವಣಾ ಸಮಿತಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಕಳುಹಿಸಲಾಗುವುದು ಎಂದರು.












Click it and Unblock the Notifications