ಶ್ರದ್ಧೆಯಿಂದ ದುಡಿದಿದ್ದೇನೆ ನಿರ್ಗಮಿತ ಬಿಜೆಪಿ ಅಧ್ಯಕ್ಷ ಕಟೀಲ್ ಪತ್ರ
ಬೆಂಗಳೂರು, ನವೆಂಬರ್ 15; ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ ಬಿ. ವೈ. ವಿಜಯೇಂದ್ರ ಬುಧವಾರ ಅಧಿಕಾರವಹಿಸಿಕೊಳ್ಳಲಿದ್ದಾರೆ. ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶ್ರದ್ಧೆಯಿಂದ ದುಡಿದಿದ್ದೇನೆ ಎಂದು ನಿರ್ಗಮಿತ ಪತ್ರದಲ್ಲಿ ಹೇಳಿದ್ದು, ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಬುಧವಾರ ನಳಿನ್ ಕುಮಾರ್ ಕಟೀಲ್ ಪತ್ರವೊಂದನ್ನು ಬರೆದಿದ್ದಾರೆ. ಅವರು ಆಗಸ್ಟ್ 20, 2019ರಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. 2023ರ ವಿಧಾನಸಭಾ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳನ್ನು ಕಟೀಲ್ ಸಮರ್ಥವಾಗಿ ನಿಭಾಯಿಸಿದ್ದರು.

ಕಟೀಲ್ ಪತ್ರದ ವಿವರಗಳು
ವಂದನೆಗಳು
ಮಾತೃ ಸಮಾನವಾಗಿರುವ ನಮ್ಮ ಪಕ್ಷ ಮತ್ತು ಹಿರಿಯರು ಸಾಮಾನ್ಯ ಕಾರ್ಯಕರ್ತನಾದ ನನಗೆ ಪಕ್ಷದ ರಾಜ್ಯದ ಅತ್ಯುನ್ನತ ಜವಾಬ್ದಾರಿ ವಹಿಸಿದ ಈ 4 ವರ್ಷ 3 ತಿಂಗಳ ಅವಧಿಯಲ್ಲಿ ಈ ಹೊಣೆಗಾರಿಕೆಯನ್ನು ನಿಮ್ಮೆಲ್ಲರ ಸಹಕಾರದಿಂದ ಪರಿಪೂರ್ಣತೆಯಿಂದ ನಿರ್ವಹಿಸಿದ್ದೇನೆ.
ಈ ಅವಧಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಮಾರ್ಗದರ್ಶನ ಮಾಡಿರುವ ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರಿಗೆ, ಜವಾಬ್ದಾರಿ ಸ್ವೀಕರಿಸುವ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತು ಈಗ ರಾಷ್ಟ್ರೀಯ ಗೃಹಸಚಿವರಾಗಿರುವ ಶ್ರೀ ಅಮಿತ್ ಶಾ ಅವರಿಗೆ, ಪಕ್ಷದ ಪ್ರಸ್ತುತ ರಾಷ್ಟ್ರಾಧ್ಯಕ್ಷರಾದ ಶ್ರೀ ಜೆ. ಪಿ. ನಡ್ಡಾ ಅವರಿಗೆ, ಹೆಜ್ಜೆಹೆಜ್ಜೆಗೂ ಮಾರ್ಗದರ್ಶನ ನೀಡುತ್ತಾ ಬಂದಿರುವ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ಎಲ್. ಸಂತೋಷ್ ಜಯವರಿಗೆ, ನಮ್ಮ ಪಕ್ಷದ ಶಕ್ತಿ ಯಡಿಯೂರಪ್ಪನವರಿಗೆ, ಪಕ್ಷದ ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ಮುಖಂಡರುಗಳಿಗೆ, ಪಕ್ಷದ ರಾಜ್ಯ ಪದಾಧಿಕಾರಿಗಳಿಗೆ, ಮೋರ್ಚಾಗಳ ಮುಖಂಡರುಗಳಿಗೆ ಹಾಗೂ ವಿಶೇಷವಾಗಿ ನಮ್ಮ ಪಕ್ಷದ ಎಲ್ಲಾ ದೇವದುರ್ಲಭ ಕಾರ್ಯಕರ್ತ ಬಂಧುಗಳಿಗೆ ಧನ್ಯವಾದಗಳು.
ಈ ಅವಧಿಯಲ್ಲಿ ಕಾಯಾ, ವಾಚಾ, ಮನಸಾ ಪಕ್ಷದ ಸೇವೆ ಮಾಡುವ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನನ್ನ ಕೈ ಹಿಡಿದು ಮುನ್ನಡೆಸಿದ ಎಲ್ಲಾ ಪ್ರೀತಿಪಾತ್ರರಿಗೆ ಧನ್ಯವಾದಗಳು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಕೃಪೆ, ದೈವದೇವರುಗಳ ಅನುಗ್ರಹದಿಂದ ಪಕ್ಷದ ಬೆಳವಣಿಗೆಗೆ ನನ್ನ ಸೇವೆ ನಿರಂತರವಾಗಿರಲಿದೆ. ಇನ್ನು ಮುಂದೆಯೂ ಸರ್ವರ ಸಹಕಾರ, ಪ್ರೀತಿ, ವಿಶ್ವಾಸ ಬಯಸುವ,
ನಿಮ್ಮ
ನಳಿನ್ ಕುಮಾರ್ ಕಟೀಲ್.
2019ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ಆಗ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಬಿಜೆಪಿ ರಾಜ್ಯಾಧ್ಯಕ್ಷ, ಮಖ್ಯಮಂತ್ರಿ ಎರಡೂ ಹುದ್ದೆಯನ್ನು ಅವರು ನಿಭಾಯಿಸುವುದು ಕಷ್ಟ ಎಂಬ ಕಾರಣಕ್ಕೆ ನಳಿನ್ ಕುಮಾರ್ ಕಟೀಲ್‌ರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ನಳಿನ್ ಕುಮಾರ್ ಕಟೀಲ್ ಪಕ್ಷ ಸಂಘಟನೆಗೆ ಸಾಕಷ್ಟು ಶ್ರಮಪಟ್ಟಿದ್ದಾರೆ. ರಾಜ್ಯಾದ್ಯಂತ ಸಂಚಾರ ನಡೆಸಿ, ಕಾರ್ಯಕರ್ತರ ಅಹವಾಲು ಆಲಿಸಿದ್ದಾರೆ. ಈಗ ಬಿ. ವೈ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಿಯಮಗಳ ಪ್ರಕಾರ ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಮೂರು ವರ್ಷಗಳು. ಆದರೆ ನಳಿನ್ ಕುಮಾರ್ ಕಟೀಲ್ ಅವಧಿ ಪೂರ್ಣಗೊಂಡ ಬಳಿಕ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಾದ ಕಾರಣ ಅವರನ್ನೇ ಪಕ್ಷ ಅಧ್ಯಕ್ಷರನ್ನಾಗಿ ಮುಂದುವರೆಸಲಾಗಿತ್ತು. ಈಗ 2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ರಾಜ್ಯಾಧ್ಯಕ್ಷರ ನೇಮಕವಾಗಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಬಿ. ವೈ. ವಿಜಯೇಂದ್ರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ. ಈ ಹಿಂದೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.












Click it and Unblock the Notifications