ಕಾಂಗ್ರೆಸ್‌ನ 'ಹಿಂಸಾ ಗ್ಯಾರಂಟಿ ಸ್ಕೀಮ್' ಸಹಿಸಲ್ಲ: ಎಚ್ಚರಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ
ಶನಿವಾರ, ಮೇ 13ರಂದು ಪ್ರಕಟವಾದ 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬರೋಬ್ಬರಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪೂರ್ಣ ಬಹುಮತ ಪಡೆದಿದೆ. ರಾಜ್ಯದಲ್ಲಿ ನೂತನ ಸರ್ಕಾರ ರಚಿಸಲು ಸಜ್ಜಾಗಿದೆ.
ಇನ್ನು ಬಿಜೆಪಿ ಪಕ್ಷವನ್ನು ರಾಜ್ಯದ ಮತದಾರರು ಸಂಪೂರ್ಣವಾಗಿ ತಿರಸ್ಕರಿಸಿದ್ದು, ಈ ಬಾರಿ ಬಿಜೆಪಿ 66 ಸ್ಥಾನಗಳಲ್ಲಿ ಗೆಲ್ಲಿಸಿ ವಿಪಕ್ಷ ಸ್ಥಾನದಲ್ಲಿ ಕೂರುವಂತೆ ಮಾಡಿದ್ದಾರೆ. ಪ್ರಮುಖ 12 ಸಚಿವರು ಸೇರಿದಂತೆ 59 ಬಿಜೆಪಿ ಶಾಸಕರು ಸೋತಿರುವುದು ಬಿಜೆಪಿಯ ಹೀನಾಯ ಸ್ಥಿತಿಗೆ ಸಾಕ್ಷಿಯಾಗಿದೆ.

ಈ ಮಧ್ಯೆ ಕಾಂಗ್ರೆಸ್ ಬಹುಮತ ಗಳಿಸುತ್ತಿದ್ದಂತೆಯೇ ರಾಜ್ಯದಲ್ಲಿ ಗಲಾಟೆ, ಹಿಂಸಾಚಾರಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಕಾಂಗ್ರೆಸ್‌ನಿಂದ ಹಿಂಸಾ ಗ್ಯಾರಂಟಿ ಸ್ಕೀಮ್ ಜಾರಿಯಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಚುನಾವಣೆ ಫಲಿತಾಂಶದ ನಂತರ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿದ ತಕ್ಷಣ ರಾಜ್ಯದ ಹಲವು ಕಡೆ 'ಹಿಂಸಾ ಗ್ಯಾರಂಟಿ ಸ್ಕೀಮ್' ಜಾರಿಗೆ ತಂದಿದೆ. ಹೊಸಕೋಟೆ ಸೇರಿದಂತೆ ಹಲವೆಡೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಹೊಸಕೋಟೆಯಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತನನ್ನು ಹತ್ಯೆ ಮಾಡಿದ್ದು, ಇನ್ನಿಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಇದು ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.
"ಕಾಂಗ್ರೆಸ್ ನಾಯಕರು ಇಂತಹ ಹಿಂಸಾತ್ಮಕ ಪ್ರವೃತ್ತಿಗೆ ಅವಕಾಶ ನೀಡಬಾರದು. ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಈಗಲೇ ಇದನ್ನು ತಡೆಯಬೇಕು. ಪಾಕಿಸ್ತಾನದ ಧ್ವಜ ಹಾರಿಸುವುದು, ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವುದು ದೇಶದ್ರೋಹದ ಚಟುವಟಿಕೆಯಾಗಿದೆ," ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಇಂತಹ ಹಿಂಸಾಚಾರ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತ ಬದಿಗಿಟ್ಟು ಉತ್ತಮ ಆಡಳಿತ ನೀಡಬೇಕು ಎಂದು ತಿಳಿಸಿದ್ದಾರೆ.
"ಕಾಂಗ್ರೆಸ್ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ತಕ್ಷಣವೇ ಮುಂದಾಗಬೇಕು. ಹಿಂಸೆಯನ್ನು ಪ್ರಚೋದಿಸುವವರು ಮತ್ತು ದೇಶದ್ರೋಹಿ ಚಟುವಟಿಕೆಗಳಿಗೆ ಬೆಂಬಲ ನೀಡುವವರನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಸೂಚಿಸಬೇಕು," ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ.
ಮೇ 13ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಡಿ ಶೆಟ್ಟಿಹಳ್ಳಿಯಲ್ಲಿ ಕೃಷ್ಣಪ್ಪ ಹಾಗೂ ಗಣೇಶಪ್ಪ ಅನ್ನುವ ಸಹೋದರರ ನಡುವೆ ಗಲಾಟೆಯಾಗಿತ್ತು. ನೀನು ಪಕ್ಷದಲ್ಲಿದ್ದುಕೊಂಡೇ ಬಿಜೆಪಿಗೆ ಮೋಸ ಮಾಡಿದ್ದೀಯಾ ಅಂತಾ ಎಂಟಿಬಿ ಬೆಂಬಲಿಗ ಕೃಷ್ಣಪ್ಪ ತನ್ನ ಸಹೋದರನನ್ನು ಪ್ರಶ್ನೆ ಮಾಡಿದ್ದ.
ಬಳಿಕ ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿ, ಈ ವೇಳೆ ಗಣೇಶಪ್ಪನ ಮಗ ಆದಿತ್ಯಾ ಮತ್ತು ಕೆಲವರು ಕೃಷ್ಣಪ್ಪನ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡ ಕೃಷ್ಣಪ್ಪನನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.
ಇನ್ನು ಕಾಂಗ್ರೆಸ್ ಪರ ಫಲಿತಾಂಶ ಬಂದ ನಂತರ ಉತ್ತರ ಕನ್ನಡದ ಭಟ್ಕಳದಲ್ಲಿ ಕೇಸರಿ ಧ್ವಜದ ಪಕ್ಕ ಇಸ್ಲಾಂ ಬಾವುಟ ಹಾರಿಸಲಾಗಿತ್ತು. ಭಟ್ಕಳದ ತಾಲ್ಲೂಕಿನಲ್ಲಿ ಬಿಜೆಪಿ ಮುಖಂಡರೊಬ್ಬರ ಮನೆಗೆ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿದ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ್ದರು.
ಚುನಾವಣೆ ಫಲಿತಾಂಶ ದಿನದಂದು ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. ಕಾಂಗ್ರೆಸ್ ಪಕ್ಷದ ಮುಸ್ಲಿಂ ಬೆಂಬಲಿಗರು ಘೋಷಣೆ ಕೂಗಿದ್ದಾರೆಂದು ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications