ಬುಧವಾರ ಬಿಜೆಪಿ ಕೊನೆ ಪಟ್ಟಿ ಬಿಡುಗಡೆ?
ಬೆಂಗಳೂರು, ಮಾ. 19 : ಕರ್ನಾಟಕ ಬಿಜೆಪಿ ಬಾಕಿ ಉಳಿದಿರುವ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಅಭ್ಯರ್ಥಿಗಳ ಹೆಸರನ್ನು ಕೇಂದ್ರ ಸಮಿತಿಗೆ ಶಿಫಾರಸು ಮಾಡಿದೆ. ಹಾಸನ, ಬೀದರ್ ಮತ್ತು ಬಳ್ಳಾರಿ ಕ್ಷೇತ್ರಗಳಿಗೆ ಬಿಜೆಪಿ ಬುಧವಾರ ಸಂಜೆ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ.
ಮಂಗಳವಾರ ಪಕ್ಷದ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ಚರ್ಚೆ ನಡೆಸಲಾಯಿತು. ಬೀದರ್ ಕ್ಷೇತ್ರದಿಂದ ಸೂರ್ಯಕಾಂತ್ ನಾಗಮಾರಪಲ್ಲಿ, ಹಾಸನದಿಂದ ರೇಖಾ ಹುಲಿಯಪ್ಪಗೌಡ ಹಾಗೂ ಬಳ್ಳಾರಿಯಿಂದ ಬಿ.ಶ್ರೀರಾಮುಲು ಅವರನ್ನು ಆಯ್ಕೆ ಮಾಡಿ ಕೇಂದ್ರ ಸಮಿತಿಗೆ ಶಿಫಾರಸು ಕಳುಹಿಸಲಾಗಿದೆ. [ಬಿಜೆಪಿ 2 ನೇ ಪಟ್ಟಿ ನೋಡಿ]

ಬುಧವಾರ ಸಂಜೆ ಈ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ನಾಯಕರು ಅಂತಿಮವಾಗಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಆದರೆ, ಶ್ರೀರಾಮುಲು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲು ಪಕ್ಷದ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ, ಅವರ ಜೊತೆ ಮಾತುಕತೆ ನಡೆಸಿ ನಂತರ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.[ಬಿಜೆಪಿ ಮೊದಲ ಪಟ್ಟಿ]
ಸಭೆಯಲ್ಲಿ ಏನಾಯ್ತು : ಬೀದರ್ ಕ್ಷೇತ್ರದಲ್ಲಿ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಮತ್ತು ಅವರ ಪುತ್ರ ಸೂರ್ಯಕಾಂತ್ ಇಬ್ಬರಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲವಿತ್ತು. ಮಂಗಳವಾರದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದ್ದು, ಅಂತಿಮವಾಗಿ ಸೂರ್ಯಕಾಂತ್ ಅವರಿಗೇ ಟಿಕೆಟ್ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. [ಬಿರುಸಿನ ಮತಯಾಚನೆ ಚಿತ್ರಗಳು]
ಹಾಸನ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಕಣಕ್ಕಿಳಿಯವ ಅಭ್ಯರ್ಥಿ ಕುರಿತು ಚರ್ಚೆ ನಡೆದಿದ್ದು, ಪಕ್ಷದ ರಾಜ್ಯ ಉಪಾಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಅವರಿಗೆ ಟಿಕೆಟ್ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಮೈಸೂರಿನಲ್ಲಿ ಟಿಕೆಟ್ ವಂಚಿತರಾಗಿದ್ದ ಸಿ.ಎಚ್.ವಿಜಯಶಂಕರ್ ಹೆಸರು ಕ್ಷೇತ್ರಕ್ಕೆ ಕೇಳಿಬಂದಿತ್ತು. ಆದರೆ, ಅವರು ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ.
ಒಟ್ಟು ಮೂರು ಹೆಸರುಗಳನ್ನು ಕೇಂದ್ರ ನಾಯಕರಿಗೆ ಕಳುಹಿಸಲಾಗಿದ್ದು, ಮೂವರ ಹೆಸರನ್ನು ಒಟ್ಟಿಗೆ ಬಿಡುಗಡೆ ಮಾಡಬೇಕೆಂದು ರಾಜ್ಯ ನಾಯಕರು ಮನವಿ ಸಲ್ಲಿಸಿದ್ದಾರೆ. ಬುಧವಾರ ಸಂಜೆ ರಾಷ್ಟ್ರೀಯ ನಾಯಕರು ಸಭೆ ಸೇರಿ ಕರ್ನಾಟಕದ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.


Click it and Unblock the Notifications
