ಚುನಾವಣಾ ಹೊತ್ತಲಿ ಕೈ ಗೆ ಶಾಕ್ ಕೊಟ್ಟ ಕಮಲ ಹಿಡಿದ ಮಾಜಿ ಶಾಸಕ: 140 ಸ್ಥಾನದಲ್ಲಿ ಜಯ, ನಮ್ಮದೇ ಸರ್ಕಾರ ಎಂದ ಯಡಿಯೂರಪ್ಪ
ಬೆಂಗಳೂರು, ಏಪ್ರಿಲ್21: ರಾಜ್ಯ ವಿಧಾನಸಭಾ ಚುನಾವಣೆ ದಿನಗಣನೆ ಶುರುವಾಗಿದ್ದು, ಚುನಾವಣೆ ಹೊತ್ತಲಿ ಕಾಂಗ್ರೆಸ್ ಗೆ ಕೈ ಕೊಟ್ಟು ಮಾಜಿ ಶಾಸಕ ಎಸ್.ಬಾಲರಾಜು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು. ಶೋಭಾ ಕರಂದ್ಲಾಜೆ ಅವರು ಬಾಲರಾಜು ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ. ಬಿಜೆಪಿ 135ರಿಂದ 140 ಸ್ಥಾನಗಳನ್ನು ಗೆದ್ದು, ಅಧಿಕಾರಕ್ಕೆ ಬರುವುದು ನಿಶ್ಚಿತ. ಭಾನುವಾರದಿಂದು ಚುನಾವಣಾ ಪ್ರವಾಸ ಆರಂಭವಾಗಲಿದ್ದು, ಆಗ ಯಾವ ರೀತಿ ಗಾಳಿ ಬೀಸುತ್ತಿದೆ ಎಂದು ಅರ್ಥವಾಗುತ್ತೆ ಎಂದರು.
ನರೇಂದ್ರ ಮೋದಿಅವರು ಪ್ರಚಾರಕ್ಕೆ ಇಳಿದ ನಂತರ 140 ಸ್ಥಾನ ಗೆದ್ದು, ಸರ್ಕಾರ ರಚನೆ ಮಾಡುವುದರಲ್ಲಿ ಸಂಶಯವಿಲ್ಲ. ಪಕ್ಷಕ್ಕೆ ಸೇರಲು ಅನೇಕರು ತಮ್ಮನ್ನು ಭೇಟಿಯಾಗುತ್ತಿದ್ದಾರೆ. ಬಿಜೆಪಿ ತತ್ವ-ಸಿದ್ಧಾಂತ ಒಪ್ಪಿ ಬರುವುದಾದರೆ ಅಂತವರನ್ನು ಸ್ವಾಗತಿಸಲು ಸಿದ್ಧರಾಗಿದ್ದೇವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು
ಬಾಲರಾಜು ಅವರ ಸೇರ್ಪಡೆಯಿಂದ ಚಾಮರಾಜನಗರದಲ್ಲಿ ಬಿಜೆಪಿಗೆ ಬಲ ಬಂದಿದೆ. 1999ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಾಲರಾಜು ಅವರು ಕೇವಲ ನಾಲ್ಕು ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. 2004ರಲ್ಲಿ ಪಕ್ಷೇತರರಾಗಿ ಗೆಲುವು ಕಂಡಿದ್ದರು ಎಂದು ಹೇಳಿದರು.

ಎಸ್.ಬಾಲರಾಜು ಮಾತನಾಡಿ, ಅತ್ಯಂತ ಜನಪ್ರಿಯ ಪ್ರಧಾನ ನರೇಂದ್ರಮೋದಿ ಅವರು ಭಾರತವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತಿದ್ದಾರೆ. ಬಿಜೆಪಿಯಿಂದ ಈ ಹಿಂದೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಕಡಿಮೆ ಅಂತರದಿಂದ ಪರಾಭಗೊಂಡಿದ್ದ ನನಗೆ ಇದೀಗ ಮತ್ತೆ ಪಕ್ಷಕ್ಕೆ ಕೆಲಸ ಮಾಡಲು ಹೆಮ್ಮೆ ಎನಿಸುತ್ತಿದೆ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಯಾವ ಮೀಸಲಾತಿ ತೆಗೆಯುತ್ತೀರಿ?: ಕಾಂಗ್ರೆಸ್ ನಾಯಕರಿಗೆ ಎ.ನಾರಾಯಣಸ್ವಾಮಿ ಪ್ರಶ್ನೆ
ವಿವಿಧ ವರ್ಗಗಳಿಗೆ ನೀಡಿರುವ ಮೀಸಲಾತಿಯನ್ನು ವಾಪಸ್ ಪಡೆಯುತ್ತೇವೆ ಎನ್ನುತ್ತಿರುವ ಕಾಂಗ್ರೆಸ್, ಯಾವ ಮೀಸಲಾತಿಯನ್ನು ತೆಗೆಯಲಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಆಗ್ರಹಿಸಿದರು.
ಚುನಾವಣೆ ವೇಳೆ ಮೀಸಲಾತಿ ರದ್ದು ಪಡಿಸುವುದಾಗಿ, ಅಲ್ಪಸಂಖ್ಯಾತರಿಗೆ ಮೀಸಲಾತಿ ಒದಗಿಸುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಬಿಜೆಪಿ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಶೇಕಡ 3ರಿಂದ 7ಕ್ಕೆ, ಪರಿಶಿಷ್ಟ ಜಾತಿಗೆ ಶೇಕಡ 15ರಿಂದ 17ಕ್ಕೆ ಹೆಚ್ಚಿಸಿ ಆದೇಶ ಜಾರಿ ಮಾಡಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಈ ಆದೇಶ ಪಾಲನೆಯಾಗುತ್ತಿದೆ.
ಇದೀಗ ಮೀಸಲಾತಿ ತೆಗೆಯುವುದಾಗಿ ಹೇಳುತ್ತಿರುವ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕರು ವೀರಶೈವರಿಗೆ, ಒಕ್ಕಲಿಗರಿಗೆ ಇಲ್ಲವೇ ಇತರ ಯಾವ ವರ್ಗಕ್ಕೆ ನೀಡಿರುವ ಮೀಸಲಾತಿ ರದ್ದು ಮಾಡಲಾಗುವುದು ಎಂಬುದನ್ನು ಸ್ಪಷ್ಟವಾಗಿ ಹೇಳಬೇಕು ಎಂದು ಒತ್ತಾಯಿಸಿದರು.
ವಿಧಾನಸಭಾ ಚುನಾವಣೆ ಗೆಲ್ಲಬೇಕು ಮತ್ತು ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬ ಅಭಿಲಾಷೆಯೊಂದಿಗೆ ನರೇಂದ್ರ ಮೋದಿಯವರ ಮತ್ತು ಬೊಮ್ಮಾಯಿಯವರ ಸಾಧನೆಗಳನ್ನು ಮುಂದಿಟ್ಟು ಎಲ್ಲ 224 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪರಿಶಿಷ್ಟ ಜಾತಿಗೆ 37, ಪರಿಶಿಷ್ಟ ಪಂಗಡಕ್ಕೆ 17 ಸ್ಥಾನಗಳನ್ನು ನೀಡಲಾಗಿದ್ದು, ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲಾಗಿದೆ ಎಂದರು.y












Click it and Unblock the Notifications