15 ಕೋಟಿ ಅರ್ಹ ಮತದಾರರ ಹೆಸರು ಕಟ್! SIR ವಿರುದ್ಧ ಬಿ ಕೆ ಹರಿಪ್ರಸಾದ್ ಸ್ಫೋಟಕ ಆರೋಪ
ಬೆಂಗಳೂರು: ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ದೇಶಾದ್ಯಂತ ಸುಮಾರು 15 ಕೋಟಿ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಬಿಹಾರದಲ್ಲಿ 64 ಲಕ್ಷ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಮಹಾರಾಷ್ಟ್ರ, ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆದಿವೆ. ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿಯೂ ಒಂದು ಲಕ್ಷ ಮತಗಳಿಗೆ ಸಂಬಂಧಿಸಿದ ಅಕ್ರಮ ನಡೆದಿದೆ. ಇವೆಲ್ಲವೂ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ ಎಂದು ಹೇಳಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಲಾದ ಅರ್ಹ ಮತದಾರರನ್ನು ಮತ್ತೆ ಪಟ್ಟಿಗೆ ಸೇರಿಸುವುದು ಇಂಡಿಯಾ ಮೈತ್ರಿಕೂಟದ ಹೋರಾಟದ ಪ್ರಮುಖ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು.
'ಸಂಸತ್ತಿನಲ್ಲಿ ಉತ್ತರಿಸಲು ಧೈರ್ಯವಿಲ್ಲ, ಬೀದಿಗಿಳಿದು ಪ್ರತಿಭಟನೆ'
ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ವಿರೋಧ ಪಕ್ಷಗಳು ಎತ್ತುತ್ತಿರುವ ಪ್ರಶ್ನೆಗಳಿಗೆ ಸಂಸತ್ತಿನಲ್ಲಿ ಉತ್ತರಿಸುವ ಧೈರ್ಯವಿಲ್ಲ. ಚುನಾವಣಾ ಅಕ್ರಮಗಳ ಕುರಿತು ಚರ್ಚಿಸಲು ಸಿದ್ಧರಿಲ್ಲ. ಆದರೆ ಮಾನಮರ್ಯಾದೆಯನ್ನು ಬದಿಗಿಟ್ಟು ಇಂಡಿಯಾ ಮೈತ್ರಿಕೂಟದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಧಿಕಾರದಲ್ಲಿರುವ ಪಕ್ಷವೇ ವಿರೋಧ ಪಕ್ಷಗಳ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ವಿಪರ್ಯಾಸ ಎಂದು ಹರಿಪ್ರಸಾದ್ ವ್ಯಂಗ್ಯವಾಡಿದರು.
ಜನರು ತಮ್ಮ ವಿರುದ್ಧ ನಿಲ್ಲುತ್ತಿದ್ದಾರೆ ಎಂಬ ಆತಂಕದಿಂದಲೇ ಬಿಜೆಪಿ ನಾಯಕರು ಇಂತಹ ಪ್ರತಿಭಟನೆಗಳಿಗೆ ಮುಂದಾಗಿದ್ದಾರೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟವನ್ನು ಯಾವುದೇ ರೀತಿಯಲ್ಲೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಬಿ ಕೆ ಹರಿಪ್ರಸಾದ್ ಅವರು ಎಚ್ಚರಿಸಿದರು.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಿದ ಹರಿಪ್ರಸಾದ್, ಚುನಾವಣಾ ಪ್ರಕ್ರಿಯೆಯಲ್ಲಿ ನಡೆದಿರುವುದಾಗಿ ಆರೋಪಿಸಲಾದ ಅಕ್ರಮಗಳಿಗೆ ಹೊಣೆಗಾರಿಕೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು. ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಜೈಲಿಗೆ ಕಳುಹಿಸುವವರೆಗೂ ನಮ್ಮ ಹೋರಾಟ ಮುಂದುವರಿಯಬೇಕು. ನಮ್ಮ ಹಿರಿಯರು ತ್ಯಾಗ, ಬಲಿದಾನದ ಮೂಲಕ ನಮಗೆ ನೀಡಿರುವ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.
'ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಹೋರಾಟ ಮುಂದುವರಿಕೆ'
ಇಂಡಿಯಾ ಮೈತ್ರಿಕೂಟದ ಪರವಾಗಿ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಮಾವೇಶದಲ್ಲಿ ಮಂಡಿಸಿದ ನಿರ್ಣಯಗಳಿಗೆ ಎಲ್ಲರೂ ಒಮ್ಮತದ ಬೆಂಬಲ ಸೂಚಿಸಿರುವುದಕ್ಕೆ ಹರಿಪ್ರಸಾದ್ ಧನ್ಯವಾದ ಸಲ್ಲಿಸಿದರು. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಎಲ್ಲ ಪಕ್ಷಗಳು ಸಂವಿಧಾನ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿವೆ. ಈ ಹೋರಾಟಕ್ಕೆ ಕರ್ನಾಟಕದ ಸಂಪೂರ್ಣ ಬೆಂಬಲವಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜಾಪ್ರಭುತ್ವದಲ್ಲಿ ಜನರು ತಮಗೆ ಬೇಕಾದ ಸರ್ಕಾರವನ್ನು ಆಯ್ಕೆ ಮಾಡುವ ಹಕ್ಕು ಹೊಂದಿದ್ದಾರೆ. ಆ ಹಕ್ಕನ್ನು ಕಸಿದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ. ಸಂವಿಧಾನದ ಆಶಯಗಳನ್ನು ಉಳಿಸಲು, ಮತದಾನದ ಹಕ್ಕನ್ನು ರಕ್ಷಿಸಲು ಮತ್ತು ಚುನಾವಣಾ ವ್ಯವಸ್ಥೆಯ ಸ್ವಾಯತ್ತತೆಯನ್ನು ಕಾಪಾಡಲು ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಬಿ.ಕೆ. ಹರಿಪ್ರಸಾದ್ ಘೋಷಿಸಿದರು.
ಕೆಲ ಶಕ್ತಿಗಳಿಂದ ಸಂವಿಧಾನಕ್ಕೆ ಅಪಾಯ
ದೇಶದ ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಜರು ಮಾಡಿದ ತ್ಯಾಗ, ಬಲಿದಾನ ಹಾಗೂ ಸಂವಿಧಾನದ ಆಶಯಗಳ ಆಧಾರದಲ್ಲಿ ನಿರ್ಮಾಣಗೊಂಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಆರ್‌ಎಸ್‌ಎಸ್ ಮತ್ತು ಬಿಜೆಪಿ ಮುಂದಾಗಿವೆ ಎಂದು ಹರಿಪ್ರಸಾದ್ ಆರೋಪಿಸಿದರು. ಆರ್‌ಎಸ್‌ಎಸ್, ಬಿಜೆಪಿ ಹಾಗೂ ಹಿಂದೂ ಮಹಾಸಭಾದವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ.
ಭಾರತೀಯರು ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದಾಗ ಈ ಶಕ್ತಿಗಳು ಬ್ರಿಟಿಷ್ ಆಡಳಿತಕ್ಕೆ ಬೆಂಬಲ ನೀಡಿದ್ದವು. ಸ್ವಾತಂತ್ರ್ಯ ಹೋರಾಟದ ವಿರುದ್ಧ ಕೆಲಸ ಮಾಡಿದ ಇಂತಹ ಶಕ್ತಿಗಳು ಇಂದು ದೇಶದ ಅಧಿಕಾರ ಹಿಡಿದು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದಿಂದ ನಿರ್ಮಾಣವಾದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ದುರ್ಬಲಗೊಳಿಸಲು ಹೊರಟಿವೆ" ಎಂದು ಟೀಕಿಸಿದರು.


Click it and Unblock the Notifications
