ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಹೈ - ಅಲರ್ಟ್
ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಬರುತ್ತಿರುವ ಬೆನ್ನಲ್ಲೇ ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸರು ಅಲರ್ಟ್ ಆಗಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ಟೋಬರ್ 19ರಂದು ಅಂದರೆ ಶನಿವಾರ ಒಂದೇ ದಿನ ದೇಶದ ವಿವಿಧ 30ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು.
ಇದೀಗ ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಏರ್‌ಪೋರ್ಟ್‌ನಲ್ಲಿ ಸ್ಫೋಟ ಮಾಡುವುದಾಗಿ ಅಪರಿಚಿತರಿಂದ ಬೆದರಿಕೆಯ ಇ -ಮೇಲ್ ಬಂದಿದೆ. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದ ನಿರ್ದೇಶಕರಾದ ತ್ಯಾಗರಾಜ್ ಅವರ ಇಮೇಲ್‌ಗೆ ಬೆದರಿಕೆ ಪತ್ರ ಬರೆದಿದ್ದಾರೆ.

ಚೆನ್ನೈನಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂದು ಹೇಳಲಾಗುತ್ತಿದೆ. ಬಾಂಬ್ ಬೆದರಿಕೆಯ ಮೇಲ್ ಬಂದ ಕೂಡಲೇ ವಿಮಾನ ನಿಲ್ದಾಣದ ಸಿಬ್ಬಂದಿ ಹೈ ಅಲರ್ಟ್ ಆಗಿದ್ದಾರೆ. ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತೆ ಹೆಚ್ಚಳ ಮಾಡಲಾಗಿದೆ. ಬಾಂಬ್ ಬೆದರಿಕೆ ಪತ್ರದ ಬೆನ್ನಲ್ಲೇ ವಿಮಾನ ನಿಲ್ದಾಣಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಶ್ವಾನದಳ, ಬಾಂಬ್ ಸ್ಕಾಡ್‌ನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಬಾಂಬ್ ಸ್ಫೋಟ ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ನಿರ್ದೇಶಕ ಡಿಡಿ ತ್ಯಾಗರಾಜ್ ಅವರು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ವಿಮಾನ ನಿಲ್ದಾಣಗಳಲ್ಲಿ ಆತಂಕ: ಕಳೆದ ಒಂದು ವಾರದ ಅವಧಿಯಲ್ಲಿ ದೇಶದ ಹಲವು ಪ್ರಮುಖ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆಯ ಇ- ಮೇಲ್‌ಗಳು ಬಂದಿದೆ. ಇದು ವಿಮಾನ ನಿಲ್ದಾಣಗಳಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದೆ. ಅಲ್ಲದೇ ದೇಶದ ವಿವಿಧ ವಿಮಾನ ನಿಲ್ದಾಣಗಳ ವಿಮಾನ ಸೇವೆಯ ಮೇಲೂ ಇದು ಪರಿಣಾಮ ಬೀರಿದೆ.
ಶನಿವಾರವೊಂದೇ ದೇಶದ 30ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಬಂದಿದೆ. ದೇಶದ ವಿಮಾನ ನಿಲ್ದಾಣಗಳಿಗೆ ನಿರಂತರವಾಗಿ ಬಾಂಬ್ ಬೆದರಿಕೆಯ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರೀ ಭದ್ರತೆ ತೆಗೆದುಕೊಳ್ಳಲಾಗಿದ್ದು. ಹೈ ಅಲರ್ಟ್ ಘೋಷಿಸಲಾಗಿದೆ. ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ, ಮೆಟ್ರೋ ಸ್ಟೇಷನ್‌ಗಳು ಹಾಗೂ ಜನ ನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.
ಬೆಂಗಳೂರಿನಲ್ಲಿ ಕಳೆದ ಎರಡು ಮೂರು ವರ್ಷಗಳಿಂದ ಪ್ರತಿಷ್ಠಿತ ಶಾಲಾ - ಕಾಲೇಜುಗಳಿಗೆ ನಿರಂತರವಾಗಿ ಹುಸಿ ಬಾಂಬ್ ಬೆದರಿಕೆ ಕರೆಗಳು ಬರುತ್ತಿವೆ. ಒಂದೇ ಬಾರಿ ನಾಲ್ಕೈದು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಾಗ ಬೆಂಗಳೂರು ಪೊಲೀಸರು ಸಹ ಏಕಕಾಲಕ್ಕೆ ಹಲವು ಭಾಗದಲ್ಲಿ ಭದ್ರತೆ, ಪರಿಶೀಲನೆ ಮಾಡುವುದು ಹಾಗೂ ಅಲರ್ಟ್ ಆಗುವ ಅನಿವಾರ್ಯತೆ ಎದುರಾಗಿದ್ದು ಇದೆ. ಆದರೆ, ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿರುವುದು ಆತಂಕ ಮೂಡಿಸಿದೆ.












Click it and Unblock the Notifications