Siddaramaiah: ರಾಜ್ಯದ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ
ಮಂಗಳೂರು, ಜನವರಿ 17: ರಾಜ್ಯದ ಬಿಪಿಎಲ್ ಕಾರ್ಡ್‌ದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಡ್ ನ್ಯೂಸ್ ನೀಡಿದ್ದಾರೆ. ವೈದ್ಯಕೀಯ ಕಾಲೇಜುಗಳಲ್ಲಿನ ಆಸ್ಪತ್ರೆಯಲ್ಲೂ ಬಿಪಿಎಲ್ ಕಾರ್ಡ್‌ದಾರರು ವಿವಿಧ ಚಿಕಿತ್ಸೆಯನ್ನು ಉಚಿತವಾಗಿ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ.
ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು (ಶುಕ್ರವಾರ) ಶಂಕು ಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, BPL ಕಾರ್ಡ್ ಇದ್ದವರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಿ ಎನ್ನುವ ಸೂಚನೆಯನ್ನು ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಬಡವರಿಗೂ ಕೂಡ ದೊಡ್ಡ ದೊಡ್ಡ ಕಾಯಿಲೆಗಳು ಬರುತ್ತಿವೆ. ಕಿಡ್ನಿ ಕಸಿಗೆ 5000 ಮಂದಿ ಸಾಲಿನಲ್ಲಿದ್ದಾರೆ. ಕಿಡ್ನಿ ದಾನಿಗಳು ಸಿಕ್ಕರೆ ನಿತ್ಯ ಕಿಡ್ನಿ ಕಸಿ ಮಾಡುವ ನುರಿತ ವೈದ್ಯರ ತಂಡ ನಮ್ಮಲ್ಲಿದೆ ಎಂದರು.

ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥಾ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ಈ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ. ಈ ದಿಕ್ಕಿನಲ್ಲೂ ಸರ್ಕಾರ ಯೋಚಿಸಿ ಕ್ರಮ ಕೈಗೊಳ್ಳಲಿದೆ. ರಾಜೀವ್ ಗಾಂಧಿ ಆರೋಗ್ಯ ವಿವಿ ಆರೋಗ್ಯ ಸೇವೆ ಸರಳವಾಗಿ ಜನರಿಗೆ ಸಿಗುವ ದಿಕ್ಕಿನಲ್ಲಿ ಸಂಶೋಧನೆಗಳನ್ನು ಹೆಚ್ಚೆಚ್ಚು ನಡೆಸಬೇಕು. ದೇಶದ ಅತ್ಯುತ್ತಮ ಆರೋಗ್ಯ ಸೇವೆ ಬಡವರಿಗೂ ಸುಲಭವಾಗಿ ಸಿಗುವಂತೆ ಮಾಡಬೇಕು ಎಂದು ಕರೆ ನೀಡಿದರು.
ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.
ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.












Click it and Unblock the Notifications