Bpl Ration card cancellation: ಕೇಂದ್ರ ಸರ್ಕಾರದ ನಿರ್ಧಾರದಂತೆ ಕ್ರಮ ಎಂದ ಸಿ.ಎಂ ಸಿದ್ದರಾಮಯ್ಯ!
ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್‌ಗಳ ಚೀಟಿ ಪರಿಷ್ಕರಣೆ (ಅನರ್ಹರ ಕಾರ್ಡ್ ಕ್ಯಾನ್ಸಲ್) ಪದ್ಧತಿಯನ್ನೇ ರಾಜ್ಯ ಸರ್ಕಾರ ಕೈ ಬಿಟ್ಟಿದೆ.
ರಾಜ್ಯದಲ್ಲಿ ಸರ್ಕಾರಿ ನೌಕರರು ಹಾಗೂ ತೆರಿಗೆ ಪಾವತಿ ಮಾಡುವವರನ್ನು ಹೊರತುಪಡಿಸಿ ಇನ್ಯಾವುದೇ ರೇಷನ್ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ ಎಂದು ಈ ವಾರದಲ್ಲಿ ರಾಜ್ಯ ಸರ್ಕಾರ ಹೇಳಿತ್ತು. ಇದೀಗ ಒಟ್ಟಾರೆ ಪ್ರಕ್ರಿಯೆಯಿಂದಲೇ ಯೂಟರ್ನ್ ತೆಗೆದುಕೊಳ್ಳಲಾಗಿದೆ. ಆದರೆ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದ್ದಾರೆ. ಕೇಂದ್ರ ಸರ್ಕಾರದ ನಿಯಮಾನುಸಾರವೇ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್ ರದ್ದು ಮಾಡಿರುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಜನರಿಂದಲೂ ಈ ಕ್ರಮಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಇಡೀ ಬಿಪಿಎಲ್ ಪರಿಷ್ಕರಣೆ ಪ್ರಕ್ರಿಯೆಯನ್ನೇ ಕೈ ಬಿಟ್ಟಿದೆ. ಆದರೆ, ನಾವು ಕಾರ್ಡ್‌ಗಳನ್ನು ರದ್ದು ಮಾಡಲು ಮುಂದಾಗಿದ್ದೇ ಕೇಂದ್ರ ಬಿಜೆಪಿ ಸರ್ಕಾರ ರೂಪಿಸಿದ ನಿಯಮಾವಳಿಯ ಅನುಸಾರ ಎಂದು ಹೇಳುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಾತನಾಡಿದ್ದು, ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ಸರ್ಕಾರಿ ನೌಕರರು ಹಾಗೂ ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡುವುದು ಬೇಡ ಎಂದು ನಿಯಮಾವಳಿ, ಗೈಡ್ ಲೈನ್ (ಮಾರ್ಗಸೂಚಿ) ರಚಿಸಿದ್ದೇ ಬಿಜೆಪಿ. ಈಗ ಇವರೇ ಪ್ರತಿಭಟನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ಲೇವಡಿ ಮಾಡಿದ್ದಾರೆ.
ಕೇಂದ್ರ ಸರ್ಕಾರವೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ಈಗ ಅವರೇ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರಲ್ಲಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಕೆಂಡಾಮಂಡಲರಾದರು. ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದ ಸರ್ಕಾರವು ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿತ್ತು. ಆದರೆ, ಅದನ್ನು ಬಿಜೆಪಿ ವಿರೋಧಿಸಿತ್ತು. ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಬಂದು ಅನ್ಯಾಯ... ಅನ್ಯಾಯ ಅಂತ ಸುಳ್ ಸುಳ್ಳೇ ಕರ್ನಾಟಕದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ ಎಂದರು.
ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ: ಸಿದ್ದರಾಮಯ್ಯ
ಇನ್ನು ಸರ್ಕಾರಿ ನೌಕರರಿಗೆ ಯಾಕೆ ಬಿಪಿಎಲ್ ಕಾರ್ಡ್ ಕೊಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಆದಾಯ ತೆರಿಗೆ ಪಾವತಿಸುವವರಿಗೂ ಬಿಪಿಎಲ್ ಕಾರ್ಡ್ ಕೊಡಬೇಕೇ, ಏನ್ ಆರ್.ಅಶೋಕಾ ಫೋಟೋ ತೆಗೆಸಿಕೊಂಡಿದ್ದೇ ಕೊಂಡಿದ್ದು ಎಂದು ಲೇವಡಿ ಮಾಡಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು, ಕೇಂದ್ರ ಸರ್ಕಾರದ ನಿಯಮವನ್ನು (ಮಾನದಂಡ) ಈಗ ಯಾಕೆ ಹೇಳ್ತಿದ್ದಾರೆ. ಕಳೆದ ಒಂದು ವಾರದಿಂದಲೂ ಯಾಕೆ ಸುಮ್ಮನಿದ್ದರು. ಈಗ ಯಾಕಂತೆ ಗೊಂದಲ ಸೃಷ್ಟಿ ಮಾಡುತ್ತಿರುವುದು ಎಂದು ಅವರು ಪ್ರಶ್ನೆ ಮಾಡಿದ್ದಾರೆ.












Click it and Unblock the Notifications