ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್
ಬೆಂಗಳೂರು, ಡಿಸೆಂಬರ್ 21: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್‌ಡಿಎಲ್)ಗೆ ರಾಸಾಯನಿಕ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಿಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಸಂಬಂಧ ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಹಾಗಾಗಿ ಸದ್ಯ ಮಾಡಾಳ್ ವಿರೂಪಾಕ್ಷಪ್ಪ ಆರೋಪದಿಂದ ಮುಕ್ತರಾಗಿದ್ದಾರೆ. ಪ್ರಕರಣ ರದ್ದುಕೋರಿ ಕೆ. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಹೈಕೋರ್ಟ್ ಆದೇಶವೇನು?; ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ರಲ್ಲಿನ ಪ್ರಕ್ರಿಯೆ ಪಾಲಿಸಲಾಗಿಲ್ಲ. ಸೆಕ್ಷನ್ 17ಎ ಅಡಿಯಲ್ಲಿ ಪೂರ್ವಾನುಮತಿ ಪಡೆದುಕೊಂಡಿಲ್ಲ ಎಂದು ನ್ಯಾಯಾಲಯ ಹೇಳಿದೆ.
"ಮಗನನ್ನು ಹೋಗಿ ಭೇಟಿಯಾಗುವಂತೆ ಸೂಚಿಸಿದ್ದು ಬಿಟ್ಟರೆ ದೂರಿನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪವಿಲ್ಲ. ಲಂಚ ಸ್ವೀಕರಿಸಿದ ಬಗ್ಗೆಯಾಗಲೀ ಉಲ್ಲೇಖವಿಲ್ಲ. ದೂರಿನಲ್ಲಿ 2ನೇ ಆರೋಪಿ ಮಾಡಾಳ್ ಪ್ರಶಾಂತ್ ವಿರುದ್ಧ ಲಂಚದ ಆರೋಪವಿದೆ. ಪ್ರಶಾಂತ್ ಮನೆಯಲ್ಲಿ 6.10 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಆದರೆ ಈ ಹಣಕ್ಕೂ ಮಾಡಾಳ್ ವಿರೂಪಾಕ್ಷಪ್ಪಕ್ಕೂ ಸಂಬಂಧ ಕಲ್ಪಿಸುವ ದಾಖಲೆ ಸಿಕ್ಕಿಲ್ಲ. ಮಗನ ಬಳಿ ಸಿಕ್ಕ ಹಣಕ್ಕೆ ಅಪ್ಪನನ್ನು ವಿಚಾರಣೆಗೆ ಒಳಪಡಿಸುವುದು ಸರಿಯಲ್ಲ" ಎಂದು ನ್ಯಾಯಾಲಯ ಹೇಳಿದೆ.
"ಕ್ರಿಮಿನಲ್ ಪ್ರಕರಣವನ್ನು ಮುಂದುವರಿಸಲು ಸಾಕ್ಷ್ಯಾಧಾರ ಬೇಕು. ಕನಿಷ್ಟ ಪಕ್ಷ ಮೇಲ್ನೋಟದ ಸಾಕ್ಷ್ಯಾಧಾರಗಳ ಅವಶ್ಯಕತೆ ಇದೆ. ಆದರೆ ದೂರಿನಲ್ಲಿ ಗೊಂದಲಕಾರಿ ಹೇಳಿಕೆಗಳಿವೆಯೇ ಹೊರತು ನಿಖರ ಆರೋಪವಿಲ್ಲ. ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಭಾಗಿಯಾಗಿಲ್ಲ. ಹಾಗಾಗಿ ಪ್ರಕರಣ ಮುಂದುವರಿಸುವುದು ಕಾನೂನಿನ ದುರ್ಬಳಕೆಯಾಗಲಿದೆ" ಎಂದು ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ, ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್, ದೂರುದಾರ ಶ್ರೇಯಾಸ್ ಕಶ್ಯಪ್ ನಿರ್ದೇಶಕರಾಗಿರುವ ಮೆರ್ಸೆಸ್ ಡಿಲಿಸಿಯಾ ಕೆಮಿಕಲ್‌ಸ್ ಕಂಪನಿಯಿಂದ ಕೆಮಿಕಲ್ ಆಯಿಲ್ ಖರೀದಿಯ ಟೆಂಡರ್ ಹಂಚಿಕೆ ಮಾಡಿರುವುದಕ್ಕೆ ಪ್ರತಿಯಾಗಿ 40 ಲಕ್ಷ ಲಂಚ ಪಡೆದ ಆರೋಪ ಸಂಬಂಧ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮಾ.2ರಂದು ಎಫ್‌ಐಆರ್ ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಆಗ ಬಿಜೆಪಿ ಶಾಸಕರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿಯಾದರೆ, ಪ್ರಶಾಂತ್ ಮಾಡಾಳ್ ಎರಡನೇ ಆರೋಪಿಯಾಗಿದ್ದರು. ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನು ಪಡೆದಿದ್ದರು.












Click it and Unblock the Notifications