ತುರ್ತಾಗಿ ಶಾಸಕಾಂಗ ಪಕ್ಷದ ಸಭೆ ಕರೆದ ಯಡಿಯೂರಪ್ಪ!
ಬೆಂಗಳೂರು, ಫೆಬ್ರವರಿ 04 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತುರ್ತಾಗಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಕೆಲವು ರಾಷ್ಟ್ರೀಯ ನಾಯಕರು ಸಹ ರಾಜ್ಯಕ್ಕೆ ಆಗಮಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಮಂಗಳವಾರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಎಲ್ಲಾ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಸಭೆ ಬಳಿಕ ಕೋರ್ ಕಮಿಟಿ ಸಭೆ ನಡೆಯಲಿದೆ.
ಫೆ.6ರಿಂದ ಬಜೆಟ್ ಅಧಿವೇಶನ ಆರಂಭವಾಗುವ ಹಿನ್ನಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಆವರು ಸಹ ಬೆಂಗಳೂರಿಗೆ ಆಗಮಿಸಲಿದ್ದು, ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯದಲ್ಲಿ ಆಪರೇಷನ್ ಕಮಲದ ಬೆಳವಣಿಗೆಗಳು ನಡೆಯುತ್ತಿವೆ ಎಂಬ ಸುದ್ದಿಯ ನಡುವೆಯೇ ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಶಾಸಕರು ಪುನಃ ರೆಸಾರ್ಟ್‌ಗೆ ತೆರಳಿದ್ದಾರೆಯೇ? ಎಂಬುದು ಪ್ರಶ್ನೆಯಾಗಿದೆ.
ಬಿ.ಎಸ್.ಯಡಿಯೂರಪ್ಪ ಅವರು ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳಲು ತೆರಳಬೇಕಿತ್ತು. ಆದರೆ, ಮೈಸೂರು ಪ್ರವಾಸವನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿಯೇ ಉಳಿದಿದ್ದಾರೆ.
ರಾಮ್ ಲಾಲ್ ಸಭೆ : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಪ್ತರಾಗಿರುವ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಅವರು ಮಂಗಳವಾರ ಸಂಜೆ 6 ಗಂಟೆಗೆ ಪಕ್ಷದ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.












Click it and Unblock the Notifications