By-election 2024: ಚನ್ನಪಟ್ಟಣ ಟಿಕೆಟ್ ಫೈನಲ್ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಭಾವುಕ ನುಡಿ
Karnataka By-election 2024: ಈಗಾಗಲೇ ಬಿಜೆಪಿಯಿಂದ ಸಂಡೂರು, ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಇದೀಗ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಚನ್ನಪಟ್ಟಣ್ಣಕ್ಕೆ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಫೈನಲ್ ಮಾಡಲಾಗಿದೆ. ಇನ್ನೂ ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಭಾವುಕ ನುಡಿಗಳನ್ನಾಡಿದ್ದಾರೆ.
"ನಿಖಿಲ್ ಕುಮಾರಸ್ವಾಮಿ ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದಾರೆ, ಗೆಲ್ಲಿಸುವ ಜವಾಬ್ದಾರಿ ನಿಮ್ಮದು," ಎಂದು ಚನ್ನಪಟ್ಟಣ ಜನತೆಗೆ ಎಚ್.ಡಿ.ಕುಮಾರಸ್ವಾಮಿಯವರು ಮನವಿ ಮಾಡಿದ್ದಾರೆ. ಅಲ್ಲದೆ, "ಮಾಜಿ ಸಿಎಂ ಯಡಿಯೂರಪ್ಪ ಅವರ ನಿವಾಸದಲ್ಲಿ ಚರ್ಚಿಸಿ ಹೆಸರು ಘೋಷಣೆ ಮಾಡುತ್ತೇವೆ. ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್‌ಗೆ ಟಿಕೆಟ್ ಫೈನಲ್ ಮಾಡಲಾಗಿದೆ," ಎಂದು ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಅದರಲ್ಲೂ ಹೈವೋಲ್ಟೇಜ್ ಕ್ಷೇತ್ರ ಆಗಿರುವ ಚನ್ನಪಟ್ಟಣ ಕ್ಷೇತ್ರವಾಕ್ಕೆ ಅಭ್ಯರ್ಥಿ ಆಯ್ಕೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ರಾಜ್ಯ ನಾಯಕರ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಎನ್‌ಡಿಎ ಮೈತ್ರಿ ಗಟ್ಟಿಯಾಗಿ ಉಳಿಯಬೇಕು. ಆದ್ದರಿಮದ ನಾವು ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕೆಂದು ತೀರ್ಮಾನ ಮಾಡಿದ್ದೆವು. ಆದರೆ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಇದಕ್ಕೆ ಚನ್ನಪಟ್ಟಣದ ಜನತೆ ಉತ್ತರ ನೀಡಬೇಕೆಂದು ಮನವಿ ಮಾಡಿದರು.
ದೇವಗೌಡ್ರು ಹೇಳಿದ್ದೇನು?: "ಕಾರ್ಯಕರ್ತರ ಒತ್ತಾಯದ ಮೇರೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ'' ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಘೋಷಣೆ ಮಾಡಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಚನ್ನಪಟ್ಟಣದಲ್ಲಿ ವಾಸ್ತವ್ಯ ಹೂಡಿ ಎನ್‌ಡಿಎ ಅಭ್ಯರ್ಥಿ ಪರ ಪ್ರಚಾರ ಮಾಡುತ್ತೇನೆ" ಎಂದರು.
"ನಿಖಿಲ್ ಕುಮಾರಸ್ವಾಮಿ ಅವರು ಸಾಮಾನ್ಯ ಕಾರ್ಯಕರ್ತರು ಸ್ಪರ್ದಿಸಬೇಕೆಂಬ ಆಶಯ ವ್ಯಕ್ತಪಡಿಸಿದ್ದರು. ಆದರೆ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಅವರೇ ಕಣಕ್ಕಿಳಿಯಲು ಒಪ್ಪಿದ್ದಾರೆ" ಎಂದು ಹೇಳಿದರು.
"ಕಾರ್ಯಕರ್ತರಿಗೆ ಟಿಕೆಟ್ ನೀಡಲು ಬಯಸಿದ್ದೆವು. ಈಗ ಬದಲಾದ ರಾಜಕೀಯ ಸನ್ನಿವೇಶದಿಂದಾಗಿ ಮತ್ತು ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎನ್‌ಡಿಎ ಬಲಿಷ್ಠವಾಗಬೇಕು" ಎಂದು ಅಭಿಪ್ರಾಯಪಟ್ಟರು.
ಜೆಡಿಎಸ್ ಸಭೆ ಬಳಿಕ, ಎಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಡಾಲರ್ಸ್ ಕಾಲೋನಿಯ ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ತೆರಳಿದರು. ಅಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಯಿತು. ಬಳಿಕ, ನಿಖಿಲ್ ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿ ಎಂದು ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.












Click it and Unblock the Notifications