ಸಿದ್ದರಾಮಯ್ಯರಿಗೆ ಸವಾಲು ಹಾಕಿದ ವಿಜಯೇಂದ್ರ: ಏನದು?
ಬೆಂಗಳೂರು, ಅಕ್ಟೋಬರ್ 14: ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ತಿಳಿಸಿದರು. ಸಿದ್ದರಾಮಯ್ಯನವರು ತಪ್ಪಿಸಿಕೊಂಡು ಹೋಗಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರು 5 ವರ್ಷ ಮುಖ್ಯಮಂತ್ರಿ ಎಂದು ನಿಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಂದ ಹೇಳಿಸಿ ನೋಡೋಣ ಎಂದು ವಿಜಯೇಂದ್ರರು ಸವಾಲೆಸೆದರು.
ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಇಂದು ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ಮಲ್ಲಿಕಾರ್ಜುನ್ ಖರ್ಗೆಯವರು ಇಂಥ ಹೇಳಿಕೆ ಕೊಡುತ್ತಿಲ್ಲ. ರಾಜ್ಯ ರಾಜಕಾರಣದ ಕುರಿತು ಮಾತನಾಡದೇ ಅವರು ತಪ್ಪಿಸಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷದ ಹೋರಾಟದ ಬಳಿಕ ಮುಡಾ ಹಗರಣದಲ್ಲಿ ಕದ್ದ ಮಾಲನ್ನು ವಾಪಸ್ ಕೊಡಲು ಸಿದ್ದರಾಮಯ್ಯನವರು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಗಳ ಪಾಪದ ಕೊಡ ತುಂಬಿದೆ. ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಸೂರ್ಯ ಚಂದ್ರರು ಇರುವಷ್ಟೇ ಸತ್ಯ ಎಂದು ಭವಿಷ್ಯ ನುಡಿದರು.

ಈ ಸರಕಾರ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದೆ. ಇದರ ಬಗ್ಗೆ ಜನರು ಚರ್ಚಿಸುತ್ತಿದ್ದಾರೆ. ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮೈಸೂರಿನಲ್ಲಿ ಮುಖ್ಯಮಂತ್ರಿಗಳ ಕುಟುಂಬವೇ ಲೂಟಿ ಮಾಡಿದೆ. ಎಸ್‍ಇಪಿ, ಟಿಎಸ್‍ಪಿ ಹಣ ದುರುಪಯೋಗದ ಕುರಿತು ಜನರು ಚರ್ಚೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿಯೇ ಇಲ್ಲವಾಗಿದೆ. ಇಂಥ ಸರಕಾರದಲ್ಲಿ ಶಾಸಕರಾಗಿರುವ ಬದಲು ಆತ್ಮಹತ್ಯೆ ಮಾಡಿಕೊಳ್ಳುವುದೇ ಒಳಿತೆಂದು ಕಾಂಗ್ರೆಸ್ ಶಾಸಕ ರಾಜು ಕಾಗೆಯವರು ಹೇಳಿದ್ದಾಗಿ ಗಮನ ಸೆಳೆದರು.
ಗ್ಯಾರಂಟಿಯಿಂದ ಅಭಿವೃದ್ಧಿ ಕೆಲಸ ನಿಂತು ಹೋಗಿದೆ ಎಂದು ಬಸವರಾಜರಾಯರೆಡ್ಡಿ ಹೇಳಿದ್ದಾರೆ. ಅಭಿವೃದ್ಧಿ ಕೆಲಸ ಸ್ಥಗಿತವಾಗಿದೆ ಎಂದು ಆರ್.ವಿ.ದೇಶಪಾಂಡೆ ಸೇರಿ ಕಾಂಗ್ರೆಸ್ ಮುಖಂಡರೇ ಹೇಳುತ್ತಿದ್ದಾರೆ. ಸಿಎಂ ರಾಜೀನಾಮೆ ಕಾಲ ಸನ್ನಿಹಿತವಾಗಿದೆ. ಇನ್ನೊಂದೆಡೆ ದೇಶದ್ರೋಹಿಗಳ ಕೇಸು ಹಿಂಪಡೆಯುವ ದುಸ್ಸಾಹಸಕ್ಕೆ ಕಾಂಗ್ರೆಸ್ ಸರಕಾರ ಕೈಹಾಕಿದೆ. ಕಾಂಗ್ರೆಸ್ ಯೋಗ್ಯತೆ ಹರಿಯಾಣ, ಜಮ್ಮು- ಕಾಶ್ಮೀರದ ಚುನಾವಣೆಯಲ್ಲಿ ಗೊತ್ತಾಗಿದೆ. ಅಲ್ಪಸಂಖ್ಯಾತರ ಪಕ್ಷ ಇದ್ದಾಗ ಅಲ್ಪಸಂಖ್ಯಾತರಿಗೆ ಅದುವೇ ಮೊದಲ ಆಯ್ಕೆ. ಅವರಿಲ್ಲದೆ ಇದ್ದಲ್ಲಿ ಕಾಂಗ್ರೆಸ್ ಕಡೆ ನೋಡುತ್ತಾರೆ. ಇಷ್ಟಾದರೂ ಕಾಂಗ್ರೆಸ್ ಪಕ್ಷದವರಿಗೆ ಬುದ್ಧಿ ಬಂದಿಲ್ಲ ಎಂದು ಟೀಕಿಸಿದರು. ಮುಂದಿನ ದಿನಗಳಲ್ಲಿ ಜನಾಂದೋಲನ, ಬೃಹತ್ ಪ್ರತಿಭಟನೆ ನಡೆಸುವುದಾಗಿ ಅವರು ಪ್ರಕಟಿಸಿದರು.
ರಾಜ್ಯದ್ದು ಹಿಂದೂಗಳ ವಿರೋಧಿ ಸರಕಾರ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ದುಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಒಂದು ಸಾಂಕೇತಿಕ ಪ್ರತಿಭಟನೆ ಇದು ಎಂದು ವಿಜಯೇಂದ್ರ ಅವರು ತಿಳಿಸಿದರು. ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ, ದಾಳಿ ಮಾಡಿದ್ದ, ಗಲಭೆ ಸೃಷ್ಟಿಸಿದ್ದ ದೇಶದ್ರೋಹಿಗಳ ಮೇಲಿನ ಕೇಸುಗಳನ್ನು ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಹಿಂದಕ್ಕೆ ಪಡೆದಿದೆ ಎಂದು ಟೀಕಿಸಿದರು.
ಹುಬ್ಬಳ್ಳಿ ಘಟನೆ ವಿಷಯದಲ್ಲಿ ಎನ್‍ಐಎ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಎಂದು ಯಾವ ಮಟ್ಟಕ್ಕೆ ಹೋಗಲು ಕೂಡ ಕಾಂಗ್ರೆಸ್ ಸರಕಾರ ಹೇಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಾಸಕ ವಿಶ್ವನಾಥ್, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಸಿ.ಟಿ.ರವಿ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.












Click it and Unblock the Notifications