ಕಾಲವೇ ನಿಮಗೆ ಉತ್ತರ ಹೇಳಲಿದೆ: ಸಿಎಂಗೆ ವಿಜಯೇಂದ್ರ ಖಡಕ್ ಉತ್ತರ!

ಬೆಂಗಳೂರು, ಮೇ 15: 'ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಬುಧವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಿದ್ದರಾಮಯ್ಯಗೆ ಖಡಕ್ ಉತ್ತರ ನೀಡಿದ್ದಾರೆ. 'ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಹೇಳಲಿದೆ' ಎಂದು ಹೇಳಿದ್ದಾರೆ.

BY Vijayendra Reply Chief Minister Siddaramaiah Tweet

ವಿಜಯೇಂದ್ರ ಟ್ವೀಟ್; ಬಿ. ವೈ. ವಿಜಯೇಂದ್ರ ತಮ್ಮ ಟ್ವೀಟ್‌ನಲ್ಲಿ, 'ಮಾನ್ಯ ಸಿದ್ದರಾಮಯ್ಯ ಅವರೇ, ಭಾರತೀಯ ಜನತಾ ಪಾರ್ಟಿ ತತ್ವ, ಸಿದ್ದಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ, ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ್ಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ್ಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ' ಎಂದು ಹೇಳಿದ್ದಾರೆ.

'ಭಾರತದ ರಾಜಕೀಯ ಭೂಪಟದಲ್ಲಿ ಮಾಸಿ ಹೋಗುತ್ತಿರುವ ನಿಮ್ಮ ಕಾಂಗ್ರೆಸ್ ಪಕ್ಷ ಅಧಿಕಾರ ಕಬಳಿಸುವುದನ್ನಷ್ಟೇ ಕೇಂದ್ರೀಕರಿಸಿ ಸುಳ್ಳು ಭರವಸೆಗಳು ಹಾಗೂ ಆಮಿಷಗಳ ಬಲೆ ಹೆಣೆದು ಕರ್ನಾಟಕದಲ್ಲಿ ಅಧಿಕಾರ ದಕ್ಕಿಸಿಕೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ, ನಿಮ್ಮ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ' ಎಂದು ತಿಳಿಸಿದ್ದಾರೆ.

'ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಹೇಳಲಿದೆ. ಯಾರು ಯಾರ ವಿರುದ್ಧ ಮುಗಿ ಬೀಳುತ್ತಾರೆ? ಯಾರು ಎಲ್ಲಿರುತ್ತಾರೆ? ಎಂಬುದನ್ನು ಕೆಲವೇ ದಿನಗಳು ಕಾದುನೋಡಿ ನಿಮ್ಮ ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ' ಎಂದು ಟ್ವೀಟ್ ಮಾಡಿದ್ದಾರೆ.

'ನೀವು ಮುಖ್ಯಮಂತ್ರಿಯಾಗುವ ವೇಳೆ ಡಿ. ಕೆ. ಶಿವಕುಮಾರ್ ಅವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ ಬದಿಗೊತ್ತಿ ಹೈಕಮಾಂಡ್ ಸೂತ್ರ ಧಿಕ್ಕರಿಸುವ ನಿಮ್ಮ ತಂತ್ರದ ಜಾಡು ಹಿಡಿದಿರುವ ನಿಮ್ಮ ವಿರೋಧಿ ಬಣ ಸುಮ್ಮನೆ ಕುಳಿತಿಲ್ಲ, ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್‌ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ' ಎಂದು ಎಚ್ಚರಿಸಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?; #ಬಂಡಲ್‌ಬಿಜೆಪಿ ಎಂಬ ಹ್ಯಾಷ್‌ಟ್ಯಾಗ್ ಬಳಕೆ ಮಾಡಿ ಮಂಗಳವಾರ ಪೋಸ್ಟ್ ಹಾಕಿದ್ದ ಸಿದ್ದರಾಮಯ್ಯ, 'ರಾಜ್ಯ BJP Karnataka ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ' ಎಂದು ಹೇಳಿದ್ದರು.

'ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ Vijayendra Yediyurappa ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ' ಎಂದು ತಿಳಿಸಿದ್ದರು.

'ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ BS Yediyurappa ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸಿದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ' ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದರು.

'ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಈ ಪಕ್ಷದ್ರೋಹಿ ಶಿಂಧೆ ಅವರ ಪಕ್ಷ ಈ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ' ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+