ಲಿಂಗಾಯತ ಪ್ರಾಬಲ್ಯದ ಕಿತ್ತೂರು ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಎಂದ ಸಮೀಕ್ಷೆ- ಬಿಜೆಪಿಗೆ ಅಪಾಯದ ಮುನ್ಸೂಚನೆ?
ಬೆಂಗಳೂರು, ಏಪ್ರಿಲ್ 26: ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಹಲವಾರು ಕಾರಣಗಳಿಂದ ಲಿಂಗಾಯತ ಸಮಯದಾಯಕ್ಕೆ ಸಂಬಂಧಿಸಿದ ವಿಚಾರಗಳು ತೀವ್ರ ಚರ್ಚೆಗೆ ಒಳಗಾಗುತ್ತಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆ ಬಳಿಕ ಲಿಂಗಾಯತ ವೋಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, 'ಲಿಂಗಾಯತ ವಿರೋಧಿ ಬಿಜೆಪಿ' ಎಂಬ ನಿರೂಪಣೆಯನ್ನು ಹುಟ್ಟುಹಾಕಲು ಯತ್ನಿಸಿದೆ.
ಲಿಂಗಾಯತ ಸಮುದಾಯಕ್ಕೆ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮತ ಪಡೆಯುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ.

ಚುನಾವಣೆಗೂ ಮುನ್ನ ಟಿವಿ 9- ಸಿ ವೋಟರ್ಸ್ ನಡೆಸಿರುವ ಸಮೀಕ್ಷೆಯಲ್ಲಿ, ಕಿತ್ತೂರು ಕರ್ನಾಟಕ ಭಾಗದಲ್ಲಿ ಈ ಬಾರಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಲಿಂಗಾಯತ ಪ್ರಾಬಲ್ಯದ ಜಿಲ್ಲೆಗಳಲ್ಲಿ ಬಿಜೆಪಿ ಹಿನ್ನೆಡೆಯ ಮುನ್ಸೂಚನೆ ತೋರಿಸಿದೆ.
ಕಿತ್ತೂರು-ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಮತದಾರರ ಪ್ರಮಾಣವನ್ನು ಹೆಚ್ಚಿಸಿಕೊಳ್ಳುವ ನಿರೀಕ್ಷೆಯಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.39ರಷ್ಟು ಮತಗಳನ್ನು ಪಡೆದಿತ್ತು. ಈ ಬಾರಿ ಶೇ.42ರಷ್ಟು ಮತಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ.

ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಶೇಕಡಾ 44 ರಷ್ಟು ಹೊಂದಿತ್ತು. ಈಗ ಅದು ಶೇಕಡಾ 3.1 ರಷ್ಟು ಕಡಿಮೆ ಮತಗಳನ್ನು ಪಡೆಯಲಿದೆ. ಆ ಮೂಲಕ ಬಿಜೆಪಿ ಶೇಕಡಾ 40.9 ರಷ್ಟು ಪಡೆಯುವ ನಿರೀಕ್ಷೆಯಿದೆ. ಜೆಡಿಎಸ್ ಶೇ.1.6ರಷ್ಟು ಮತಗಳಿಕೆಯನ್ನು ಹೆಚ್ಚಳ ಮಾಡಿಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ. ಶೇ.8.6ರಷ್ಟು ಮತಗಳನ್ನು ಜೆಡಿಎಸ್ ಪಡೆಯಲಿದೆ ಎಂದು ಸಮೀಕ್ಷೆ ಹೇಳಿದೆ.
ಕಿತ್ತೂರು ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಲಾಭ
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಪ್ರದೇಶದ 50 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಪಡೆದಿತ್ತು. ಕಾಂಗ್ರೆಸ್ 17, ಜೆಡಿಎಸ್ 2 ಮತ್ತು ಇತರರು 1 ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಟಿವಿ 9 - ಸಿ ವೋಟರ್ಸ್ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್ 25-29 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಬಿಜೆಪಿ 21-25 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಹೇಳಿದೆ.

ಸಮೀಕ್ಷೆ ಬಳಿಕ ಹುಟ್ಟಿಕೊಂಡ ಹಲವು ಚರ್ಚೆ
ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳು ಕಿತ್ತೂರು ಕರ್ನಾಟಕ ಭಾಗದಲ್ಲಿ ಬರುತ್ತವೆ. ಈ ಭಾಗದ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತರದ್ದೇ ಪ್ರಾಬಲ್ಯವಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಲಿಂಗಾಯತ ಮತಗಳನ್ನು ಕ್ರೋಡಿಕರಿಸುವಲ್ಲಿ ಸಫಲರಾಗಿದ್ದರು. ಆದರೆ, ಅವರು ಚುನಾವಣಾ ರಾಜಕಾರಣದಿಂದ ನಿವೃತ್ತರಾಗಿದ್ದಾರೆ.
ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರವನ್ನು ಪ್ರತಿನಿಧಿಸುವ ಮಾಜಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಯೊಂದಿಗೆ ಮುನಿಸಿಕೊಂಡು ಕಾಂಗ್ರೆಸ್‌ಗೆ ಸೇರಿದ್ದಾರೆ. ಬಣಜಿಗ ಸಮುದಾಯಕ್ಕೆ ಸೇರಿದ ಅವರು ಕೆಲ ಭಾಗಗಳಲ್ಲಿ ಜನಪ್ರಿಯತೆ ಹೊಂದಿದ್ದಾರೆ. ಇದು ಬಿಜೆಪಿಗೆ ಸಂಕಷ್ಟ ತಂದೊಡ್ಡಿದೆ.
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಿಎಂ ಲಕ್ಷ್ಮಣ ಸವದಿ ಕಣಕ್ಕಿಳಿದಿದ್ದಾರೆ. ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಲಿಂಗಾಯತ ಗಾಣಿಗ ಸಮುದಾಯಕ್ಕೆ ಸೇರಿರುವ ಅವರು ಬೆಳಗಾವಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ತಮ್ಮ ಪ್ರಭಾವವನ್ನು ಹೊಂದಿದ್ದಾರೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಲಕ್ಷ್ಮಣ ಸವದಿ ಅವರ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಮತ ಬಂದರೆ, ಅದು ಬಿಜೆಪಿಗೆ ದೊಡ್ಡ ಡ್ಯಾಮೇಜ್ ಮಾಡಲಿದೆ ಎಂಬುದಂತೂ ಶತಸಿದ್ದ.












Click it and Unblock the Notifications