ಆಷಾಢ ಕಳೆಯುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ!
ಬೆಂಗಳೂರು, ಆಗಸ್ಟ್ 07 : ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷದಲ್ಲಿ ಚಟುವಟಿಕೆ ಗರಿಗೆದರಿದೆ. ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕ, ಸಮನ್ವಯ ಸಮಿತಿಗೆ ಸೇರ್ಪಡೆ ಎಂದು ಹಲವಾರು ಚಟುವಟಿಕೆಗಳು ನಡೆಯುತ್ತಿವೆ.
ಆಷಾಢದ ಬಳಿ ಸಂಪುಟ ವಿಸ್ತರಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾದ ಶಾಸಕರು ನವದೆಹಲಿ ವಿಮಾನ ಹತ್ತಿದ್ದಾರೆ. ಹೈಕಮಾಂಡ್ ನಾಯಕರ ಬಳಿ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ.
ಸಮನ್ವಯ ಸಮಿತಿ : ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆಡಿಸ್ ಅಧ್ಯಕ್ಷ ಎಚ್. ವಿಶ್ವನಾಥ್ ಅವರನ್ನು ಸಮಿತಿಗೆ ಸೇರಿಸಲು ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೆಲವು ದಿನಗಳ ಹಿಂದೆ ಭೇಟಿಯಾಗಿದ್ದರು. 'ಆಷಾಢದ ಬಳಿಕ ಸಂಪುಟ ವಿಸ್ತರಣೆಗೆ ಅವರು ಒಪ್ಪಿಗೆ ನೀಡಿದ್ದಾರೆ. ನಿಗಮ ಮಂಡಳಿಗೂ ನೇಮಕ ಮಾಡಲಾಗುತ್ತದೆ' ಎಂದು ಸಿದ್ದರಾಮಯ್ಯ ಹೇಳಿದ್ದರು.
ಆಷಾಢ ಕಳೆಯುತ್ತಿದ್ದಂತೆಯೇ ಸಂಪುಟ ವಿಸ್ತರಣೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಿದ್ದರಿಂದ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈಗ ಸಂಪುಟ ವಿಸ್ತರಣೆ ನಡೆಯುವುದು ಖಚಿತವಾಗಿದೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಒಟ್ಟು 27 ಸಚಿವರು ಎಚ್.ಡಿ.ಕುಮಾರಸ್ವಾಮಿ ಸಂಪುಟವನ್ನು ಸೇರಿದ್ದಾರೆ. ಕಾಂಗ್ರೆಸ್‌ನಿಂದ 7, ಜೆಡಿಎಸ್‌ನಿಂದ ಒಬ್ಬರು ಸಂಪುಟ ಸೇರಬಹುದಾಗಿದೆ. ಉಳಿದಂತೆ ನಿಗಮ-ಮಂಡಳಿ ಸ್ಥಾನಕ್ಕಾಗಿ ಲಾಬಿ ನಡೆಯುತ್ತಿದೆ.












Click it and Unblock the Notifications