28 ಕೈದಿಗಳಿಗೆ ಬಿಡುಗಡೆ ಭಾಗ್ಯ, ಜೈಲುಗಳಿಗೆ ಹೈಟೆಕ್ ಭದ್ರತೆ; AI ಕ್ಯಾಮೆರಾ, ಜಾಮರ್‌ಗೆ ಸಂಪುಟ ಅಸ್ತು!
ಬೆಂಗಳೂರು: ರಾಜ್ಯದ ಕಾರಾಗೃಹ ಇಲಾಖೆಯನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ಬಲಪಡಿಸುವ ಮಹತ್ವದ ನಿರ್ಧಾರಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಕಾರಾಗೃಹಗಳ ಭದ್ರತೆ, ಮೇಲ್ವಿಚಾರಣೆ ಹಾಗೂ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ AI ಆಧಾರಿತ ಕ್ಯಾಮೆರಾಗಳು, ಪೋರ್ಟಬಲ್ ಸಿಗ್ನಲ್ ಜಾಮರ್‌ಗಳು ಸೇರಿದಂತೆ ಹಲವು ಆಧುನಿಕ ಉಪಕರಣಗಳನ್ನು ಅಳವಡಿಸಲು ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಿಸಿಟಿವಿ ಕ್ಯಾಮೆರಾಗಳು, ಪೋರ್ಟಬಲ್ ಸಿಗ್ನಲ್ ಜಾಮರ್‌ಗಳು ಹಾಗೂ ಕೈದಿಗಳ ದೂರವಾಣಿ ಕರೆ ವ್ಯವಸ್ಥೆ (Prisoner Calling System) ಸೇರಿದಂತೆ ಹಲವು ಅತ್ಯಾಧುನಿಕ ಭದ್ರತಾ ವ್ಯವಸ್ಥೆಗಳನ್ನು ಅಳವಡಿಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.
ಈ ಉಪಕರಣಗಳ ಅಳವಡಿಕೆಯಿಂದ ಕಾರಾಗೃಹಗಳಲ್ಲಿ ನಡೆಯಬಹುದಾದ ಅನಧಿಕೃತ ಚಟುವಟಿಕೆಗಳನ್ನು ತಡೆಯಲು, ಕೈದಿಗಳ ಚಲನವಲನದ ಮೇಲೆ ಪರಿಣಾಮಕಾರಿ ನಿಗಾ ವಹಿಸಲು ಹಾಗೂ ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ನೆರವಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
"ಬದಲಾಗುತ್ತಿರುವ ಭದ್ರತಾ ಸವಾಲುಗಳಿಗೆ ಅನುಗುಣವಾಗಿ ಕಾರಾಗೃಹ ಇಲಾಖೆಯಲ್ಲೂ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವುದು ಅಗತ್ಯವಾಗಿದೆ. ಸುರಕ್ಷತೆ, ಪಾರದರ್ಶಕತೆ ಮತ್ತು ಪರಿಣಾಮಕಾರಿ ಮೇಲ್ವಿಚಾರಣೆಯನ್ನು ಖಚಿತಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ," ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ಕಾರಾಗೃಹ ವ್ಯವಸ್ಥೆಯನ್ನು ತಂತ್ರಜ್ಞಾನ ಆಧಾರಿತವಾಗಿ ಮತ್ತಷ್ಟು ಆಧುನೀಕರಿಸುವ ಪ್ರಕ್ರಿಯೆಗೆ ವೇಗ ಸಿಗಲಿದೆ ಎಂದರು.
ಇನ್ನೂ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಾರಂಭದಲ್ಲಿ 45 ಪ್ರಕರಣಗಳ ಪರಿಶೀಲನೆ ನಡೆಸಲಾಗಿದ್ದು, ಅದರಲ್ಲಿ 28 ಬಂಧಿತರ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ನಂತರ, ಒಂದು ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆಯೂ ಲಭ್ಯವಾಗಿದ್ದು, ಒಟ್ಟು 29 ಜೀವಾವಧಿ ಶಿಕ್ಷಾ ಬಂಧಿಗಳು ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿದ್ದಾರೆ. ಕೈದಿಗಳ ಜೈಲು ವಾಸದ ಅವಧಿ, ಅವರ ನಡವಳಿಕೆ ಮತ್ತು ನಿಗದಿತ ಮಾನದಂಡಗಳನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.


Click it and Unblock the Notifications
