ಬಿಜೆಪಿ ಕಾರ್ಯಕಾರಿಣಿ ಸಭೆ ನಂತರ ಸಚಿವ ಸಂಪುಟ ಪುನರ್‌ರಚನೆ; ಸಿಎಂ ಬೊಮ್ಮಾಯಿ
ಬೆಂಗಳೂರು, ಏಪ್ರಿಲ್ 7: 2 ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಹೈಕಮಾಂಡ್ ಒಪ್ಪಿಗೆ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.
ಈ ಕುರಿತು ಗುರುವಾರ ಬೆಳಗ್ಗೆ ದೆಹಲಿಯಲ್ಲಿ ಮಾತನಾಡಿದ ಬಿಜೆಪಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಳಿ ಚರ್ಚೆ ನಡೆಸಿರುವೆ. ಬಿಜೆಪಿ ವರಿಷ್ಠರು ಕೂಡ ಎಲ್ಲ ಮಾಹಿತಿಯನ್ನು ಪಡೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ. ಅಮಿತ್ ಶಾ, ಬಿ.ಎಲ್. ಸಂತೋಷ್ ಜೊತೆ ಚರ್ಚೆ ಮಾಡಬೇಕಿದೆ. ನಂತರ ಸಂಪುಟ ಪುನರ್‌ರಚನೆ ಬಗ್ಗೆ ನಿರ್ಧಾರ ಮಾಡಲಾಗುವುದು, ದೆಹಲಿ ಭೇಟಿ ಫಲಪ್ರದವಾಗಿದೆ ಎಂದು ಹೇಳಿದರು.

ಏಪ್ರಿಲ್ 15 ಮತ್ತು 16ರಂದು ಕರ್ನಾಟಕದ ಹೊಸಪೇಟೆಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸಭೆಯ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಆದರೆ ಹೊಸ ಸಚಿವರ ಸೇರ್ಪಡೆಗೆ ದಿನಾಂಕ ನಿಗದಿಯಾಗಿಲ್ಲ.
2 ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದ ಸಿಎಂ ಬೊಮ್ಮಾಯಿ ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ವಾಪಸ್ ಆಗಿದ್ದಾರೆ. ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಸಿಗದ ಹಿನ್ನೆಲೆ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ.

ಶಕ್ತಿಧಾಮದ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿಎಂ ಬೊಮ್ಮಾಯಿ
ಇಂದು ಮೈಸೂರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿಲಿದ್ದಾರೆ. ಮಧ್ಯಾಹ್ನ 3ಕ್ಕೆ ಬೆಂಗಳೂರಿನಿಂದ ಮೈಸೂರಿನತ್ತ ಪ್ರಯಾಣ ಬೆಳೆಸುತ್ತಾರೆ. ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳಲಿರುವ ಸಿಎಂ ಬೊಮ್ಮಾಯಿ, ಸಂಜೆ 4 ಗಂಟೆಗೆ ಶಕ್ತಿಧಾಮದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.
ಗುರುವಾರ ಸಂಜೆ 5.30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬೊಮ್ಮಾಯಿ ಭೇಟಿ ನೀಡಲಿದ್ದು, ನಂತರ ಮಠದಲ್ಲಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದು ಸಂಜೆ 6.15ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.












Click it and Unblock the Notifications