Cabinet Meeting: ನೌಕರರಿಗೆ ಗುಡ್ ನ್ಯೂಸ್: ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 12: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮತ್ತು ನಿಗಮ/ಮಂಡಳಿಗಳಲ್ಲಿ ಲಕ್ಷಾಂತರ ಕೆಲಸಗಾರರು (ನೌಕರರು ಎಂದು ಕರೆಸಲ್ಪಡುವವರು) ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸೇವಾ ಭದ್ರತೆ ಮತ್ತು ಇತರ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಕುರಿತು ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿ ಸಚಿವ ಸಂಪುಟಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟದ ಉಪಸಮಿತಿಯೊಂದನ್ನು ರಚಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ತಿಳಿಸಿದರು.
ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವರಾದ ಎಚ್ ಕೆ ಪಾಟೀಲ್ ಅವರು ಮಾತನಾಡಿ, ರಾಜ್ಯದ ಎಲ್ಲಾ ಕಾರ್ಮಿಕರ ಹಿತದೃಷ್ಟಿಯಿಂದ ವಿವಿಧ ಇಲಾಖೆಗಳು ಮತ್ತು ಇಲಾಖೆಗಳ ಅಧಿನದಲ್ಲಿರುವ ನಿಗಮ/ಮಂಡಳಿಗಳಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿಗಳ ಬಗ್ಗೆ ಸೂಕ್ತ ನಿರ್ಣಯ ಸಚಿವ ಸಂಪುಟದ ಉಪಸಮಿತಿ ಕೈಗೊಳ್ಳಲಿದೆ ಎಂದು ತಿಳಿಸಿದರು. ಹೊರಗುತ್ತಿಗೆ ನೌಕರರು ಶೋಷಣೆಗೆ ಒಳಗಾಗುವುದನ್ನು ತಪ್ಪಿಸಲು ಹಾಗೂ ಅಪಾಯಕಾರಿ ಸೇವೆ ಸಲ್ಲಿಸುವ ನೌಕರರ ಹಿತರಕ್ಷಣೆ ಮಾಡುವ ದೃಷ್ಟಿಯಿಂದ ಸಚಿವ ಸಂಪುಟ ಉಪಸಮಿತಿ ಶಿಫಾರಸ್ಸಿನ ಆಧಾರದ ಮೇಲೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ವಿವರಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಕಾಮಗಾರಿಗಳಿಗಾಗಿ ಅವಶ್ಯವಿರುವ ಜಮೀನಿಗೆ ಪರಿಹಾರ ನೀಡಲು ಮತ್ತು ಭೂಸ್ವಾಧೀನ ಕೈಗೊಳ್ಳಲು ರಾಜ್ಯ ಸರ್ಕಾರದ ಮಟ್ಟದಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲು ಇದೇ ದಿನಾಂಕ:16.09.2025 ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳುವ ಕುರಿತಂತೆ ಒಪ್ಪಂದದ ಐತೀರ್ಪು ರಚಿಸಲು ಏಕರೂಪದ ದರ ನಿಗದಿಪಡಿಸಲು ಹಾಗೂ ಇನ್ನಿತರ ಆಡಳಿತಾತ್ಮಕ ವಿಷಯಗಳಿಗೆ ಅನುಮೋದನೆ ನೀಡುವ ಕುರಿತು ವಿಸ್ತೃತವಾದ ಹಾಗೂ ಸಕಾರಾತ್ಮಕ ಚರ್ಚೆ ನಡೆದಿದೆ ಎಂದು ತಿಳಿಸಿದರು.
ಯೋಜನೆಯಡಿ ಮುಳುಗಡೆಯಾಗುವ ಒಟ್ಟು ಭೂಮಿ 75 ಸಾವಿರ ಎಕರೆಯಾಗಿದ್ದು, ಯೋಜನೆಯನ್ನು ಪೂರ್ಣಗೊಳಿಸಲು ರೈತರನ್ನು ವಿಶ್ವಾಸಕ್ಕೆ ಪಡೆದು, ಭೂ ಸ್ವಾಧೀನ ಪ್ರಕ್ರಿಯೆಯನ್ನು ವಿಶೇಷವಾಗಿ ಕೈಗೊಳ್ಳಬೇಕು. ತಾಂತ್ರಿಕ, ಕಾನೂನಾತ್ಮಕ ವಿಷಯಗಳಲ್ಲಿ ಅಂತಿಮ ನಿರ್ಣಯ ಹಾಗೂ ನಿಲುವು ಅಗತ್ಯ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಚರ್ಚಿಸಿದ್ದು, ಮುಖ್ಯಮಂತ್ರಿಗಳಿಗೆ ರೈತ ಮುಖ್ಯಂದರು ಹಾಗೂ ನಾಯಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಿರುವ ಬಗ್ಗೆಯೂ ಚರ್ಚೆ ನಡೆದಿದೆ. ರಾಜ್ಯ ಹಾಗೂ ಯೋಜನೆಯ ಹಿತದೃಷ್ಟಿಯಿಂದ ಮತ್ತು ರೈತರಿಗೆ ನ್ಯಾಯ ಒದಗಿಸುವ ನೀತಿಯ ಹಿನ್ನೆಲೆಯಿಂದ ಚರ್ಚೆ ಇಂದು ಪೂರ್ಣಗೊಂಡಿಲ್ಲದ ಕಾರಣ, ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಸೆಪ್ಟೆಂಬರ್ 16 ರಂದು ಬೆಳಿಗ್ಗೆ ವಿಶೇಷ ಸಚಿವ ಸಂಪುಟದ ಸಭೆಯನ್ನು ಕರೆಯಲಾಗಿದೆ ಎಂದರು.
ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮತ್ತು ಡಾ. ವಿಷ್ಣುವರ್ಧನ ಹಾಗೂ ಸರೋಜಾದೇವಿಗೆ ಕರ್ನಾಟಕ ರತ್ನ ನೀಡಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ರವರು ತಿಳಿಸಿದರು.












Click it and Unblock the Notifications