Ganesha Chaturthi: ಪರಿಸರ ಸ್ನೇಹಿಯಾಗಿ ಗಣೇಶ ಚತುರ್ಥಿ ಆಚರಿಸುವುದು ಹೇಗೆ?
ಬೆಂಗಳೂರು, ಆಗಸ್ಟ್ 28: ಗೌರಿ-ಗಣೇಶ ಹಬ್ಬ 2024 ಆಚರಣೆಗೆ ತಯಾರಿ ನಡೆದಿದೆ. ಸೆಪ್ಟೆಂಬರ್ 7ರಂದು ಗಣೇಶ ಚತುರ್ಥಿ ಆಚರಣೆ ಮಾಡಲಾಗುತ್ತದೆ. ರಾಜ್ಯದಲ್ಲಿ ಪರಿಸರ ಸ್ನೇಹಿಯಾಗಿ ಗೌರಿ ಹಾಗೂ ಗಣೇಶ ಹಬ್ಬವನ್ನು ಆಚರಣೆ ಮಾಡಬೇಕು ಎಂದು ಕರೆ ನೀಡಲಾಗಿದೆ. ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಸ್ಥಾಪನೆ ಮಾಡಬೇಕು ಎಂದು ಕರೆ ನೀಡಲಾಗಿದೆ.
ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದೆ. ಇದರಿಂದ ಜಲಮೂಲಗಳು ಕಲುಷಿತಗೊಂಡು ಪರಿಸರಕ್ಕೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾಗುತ್ತದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ 2016ರ ಜುಲೈ 20ರಂದು ಅಧಿಸೂಚನೆಯೊಂದನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿದೆ.
ಈ ವರ್ಷದ ಗೌರಿ-ಗಣೇಶ ಚತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹ ನಿಯಮಗಳನ್ನು ಅನುಸರಿಸುವ ಮೂಲಕ ಸ್ಥಳೀಯ ಆಡಳಿತದ ಜೊತೆ ಸಹಕಾರ ನೀಡಬೇಕು ಎಂದು ಕರೆ ನೀಡಲಾಗಿದೆ.
ನಿಯಮ ಮೀರದಂತೆ ಎಚ್ಚರಿಕೆ: ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐಪಿಸಿ ಸೆಕ್ಷನ್ 1860 ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ/ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ನಂತರ ಗೌರಿ ಗಣೇಶ ಮೂರ್ತಿಗಳನ್ನು ಅವರವರ ಮನೆಗಳಲ್ಲಿಯೇ ಅಥವಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವತಿಯಿಂದ ನಿಗದಿಪಡಿಸಲಾಗುವ ಸ್ಥಳಗಳಲ್ಲಿ ಮಾತ್ರವೇ ವಿಸರ್ಜಿಸಬೇಕು.
ಗೌರಿ-ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಮತ್ತಿತರ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯಿಂದ ವ್ಯವಸ್ಥೆ ಮಾಡಿರುವ ಕಸ ಸಂಗ್ರಹಣ ವಾಹನಕ್ಕೆ ನೀಡಬೇಕು.
ಶಬ್ದ ಮಾಲಿನ್ಯ (ನಿರ್ಬಂಧ ಮತ್ತು ನಿಯಂತ್ರಣ) ನಿಯಮಗಳು 2000ರ ನಿಬಂಧನೆಗಳನ್ನು ಗಣೇಶ ಪೆಂಡಾಲ್‍ಗಳಲ್ಲಿ ಅನುಸರಿಸತಕ್ಕದ್ದು. ಹಬ್ಬದ ಸಂದರ್ಭದಲ್ಲಿ ಪರಿಸರ ಸ್ನೇಹಿ ಹಸಿರು-ಪಟಾಕಿಗಳನ್ನು ಮಾತ್ರ ಉಪಯೋಗಿಸತಕ್ಕದ್ದು ಹಾಗೂ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್‍ಗಳನ್ನು ನಿರ್ಮಿಸುವಲ್ಲಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು. ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ.












Click it and Unblock the Notifications