Get Updates
Get notified of breaking news, exclusive insights, and must-see stories!

By Elections: ಮೂರು ಕ್ಷೇತ್ರದ ಉಪ ಚುನಾವಣೆ, ಅಬ್ಬರದ ಪ್ರಚಾರ ಇಂದು ಅಂತ್ಯ

ಬೆಂಗಳೂರು, ನವೆಂಬರ್ 11: ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಮತದಾನಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನವೆಂಬರ್ 13ರಂದು ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಉಪ ಚುನಾವಣೆಯ ಬಹಿರಂಗ ಪ್ರಚಾರ ನವೆಂಬರ್ 11ರ ಸಂಜೆ 6 ಗಂಟೆಗೆ ಅಂತ್ಯವಾಗಲಿದೆ.

ನವೆಂಬರ್ 13ರ ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಅಂತ್ಯದ 48 ಗಂಟೆಗೂ ಮುನ್ನ ಅಂದರೆ ನವೆಂಬರ್ 11ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಸಂದರ್ಭದಲ್ಲಿ ವಾಹನಗಳ ಮೂಲಕ ಬಹಿರಂಗ ಪ್ರಚಾರ, ಧ್ವನಿವರ್ಧಕ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Campaign For Three Constituencies By Elections Concludes On November 11

ಅಭ್ಯರ್ಥಿಗಳು ಮನೆ-ಮನೆ ಭೇಟಿ ಮೂಲಕ ಮತಯಾಚನೆ ಮಾಡಬಹುದು. ನವೆಂಬರ್ 11ರ ಸಂಜೆ 6 ರಿಂದ ನವೆಂಬರ್ 14 ಸಂಜೆ 6 ಗಂಟೆಯವರೆಗೆ ಶಿಗ್ಗಾವಿ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಅಡಿ ಪ್ರತಿಬಂಧಕಾಜ್ಞೆ ಜಾರಿಯಾಗಲಿದ್ದು, 5 ಕ್ಕಿಂತ ಹೆಚ್ಚು ಜನರು ಒಟ್ಟಾಗಿ ಓಡಾಡುವಂತಿಲ್ಲ. ಕಾನೂನು ಸುವ್ಯವಸ್ಥೆ ಪಾಲನೆಗಾಗಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರ ಬಿಡಲು ಸೂಚನೆ ನೀಡಲಾಗಿದೆ.

ಮೂರು ಕ್ಷೇತ್ರದ ಉಪ ಚುನಾವಣೆ: ಲೋಕಸಭೆ ಚುನಾವಣೆ 2024ರಲ್ಲಿ ಗೆಲುವು ಸಾಧಿಸಿದ ಬಳಿಕ ಮೂರು ಕ್ಷೇತ್ರದ ಶಾಸಕರು ರಾಜೀನಾಮೆ ನೀಡಿದ ಕಾರಣ ಈಗ ಉಪ ಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಉಪ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

2023ರಲ್ಲಿ ಗೆದ್ದ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದು ಪಕ್ಷಗಳ ಪಾಲಿಗೆ ಮತ್ತು ಕಳೆದ ಚುನಾವಣೆಯಲ್ಲಿ ಗೆದ್ದು, ಬಳಿಕ ಸಂಸದರಾದ ಮೂವರಿಗೂ ಸವಾಲಾಗಿದೆ. ಕಳೆದ ಬಾರಿ ಸಂಡೂರಿನಲ್ಲಿ ಕಾಂಗ್ರೆಸ್‌ನ ಇ. ತುಕಾರಾಂ ಗೆದ್ದಿದ್ದರು. ಶಿಗ್ಗಾವಿಯಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್‌ನ ಎಚ್. ಡಿ. ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು.

ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, 20 ಶಾಸಕರು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ ಪರವಾಗಿ ಪ್ರಚಾರವನ್ನು ನಡೆಸಲಿದ್ದಾರೆ. ಈ ಮೂಲಕ ಕೊನೆಯ ದಿನ ಮತದಾರರನ್ನು ಸೆಳೆಯಲು ಅಂತಿಮ ಪ್ರಯತ್ನ ನಡೆಸಲಿದ್ದಾರೆ.

ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ಉಪ ಚುನಾವಣೆ ಮತದಾನ ನವೆಂಬರ್ 13ರಂದು ನಡೆಯಲಿರುವ ಹಿನ್ನೆಲೆಯಲ್ಲಿ 48 ಗಂಟೆ ಅವಧಿಗೂ ಮೊದಲು ಅಂದರೆ, ಸೋಮವಾರ ಸಂಜೆ 6 ಗಂಟೆಯಿಂದ ನವೆಂಬರ್ 13ರ ಸಂಜೆ 6.30ರ ತನಕ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ ಮಾಧ್ಯಮಗಳು, ಟಿವಿ ವಾಹಿನಿಗಳಲ್ಲಿ ಚರ್ಚೆ, ಸಂವಾದ, ಸಂದರ್ಶನ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿವಿ, ರೇಡಿಯೊ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದು ಅಥವಾ ಬಿತ್ತರಿಸುವುದನ್ನು ನಿರ್ಬಂಧಿಸಲಾಗಿದೆ.

ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿವಿ ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಮನವಿ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+