ವಿವಾದಾತ್ಮಕ ಹೇಳಿಕೆ: ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಕರಣ ದಾಖಲು
ಮಂಗಳೂರು, ಜನವರಿ 24: ಶ್ರೀ ರಾಮ ಹಾಗೂ ಅಲ್ಲಾಹ್ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣೆಯಲ್ಲಿ ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪೊಲೀಸರು ಐಪಿಸಿ ಕಲಂ 153(ಎ), 505(2) ಅಡಿಯಲ್ಲಿ ಕಾರ್ಕಳ ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಧಾರ್ಮಿಕ ದ್ವೇಷ ಉಂಟಾಗುವಂತೆ ಭಾಷಣ ಮಾಡಿದ ಮತ್ತು ಧರ್ಮ-ಧರ್ಮಗಳ ನಡುವೆ ಸೌಹಾರ್ದತೆಗೆ ಭಂಗ ತಂದ ಆರೋಪದಡಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ದಲ್ಲಿ ಸೋಮವಾರ ರಾತ್ರಿ ನಡೆದ ಬಹಿರಂಗ ಸಭೆಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್, "ಮುಂಬರುವ ವಿಧಾನಸಭೆ ಚುನಾವಣೆ ಅಲ್ಲಾಹ್ ಮತ್ತು ಶ್ರೀ ರಾಮನ ನಡುವೆ ನಡೆಯುವ ಚುನಾವಣೆಯಾಗಿದೆ" ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು.

ಈ ಹೇಳಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಸುನೀಲ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.












Click it and Unblock the Notifications