Cauvery Dispute: ಜಲಾಶಯಗಳು ಕೇಂದ್ರದ ಸುಪರ್ದಿಗೆ, ಸರ್ಕಾರಕ್ಕೆ 'ಡಿಸ್ಮಿಸ್' ಭಯ?
ಎರಡೆರಡು ಬಂದ್ ಗೆ ರಾಜ್ಯ ಸಾಕ್ಷಿಯಾಗಿದೆ, ಆದರೆ, ಕಾವೇರಿ ಪ್ರಾಧಿಕಾರ ಯಥಾರೀತಿ ತಮಿಳುನಾಡಿಗೆ ನೀರು ಹರಿಸಬೇಕು ಎನ್ನುವ ಆದೇಶದಿಂದ ಹಿಂದಕ್ಕೆ ಸರಿಯಲಿಲ್ಲ. ಜೊತೆಗೆ, ಸರ್ವೋಚ್ಚ ನ್ಯಾಯಾಲಯದ ಆದೇಶ ಕೂಡಾ ಇರುವುದರಿಂದ ರಾಜ್ಯಕ್ಕೆ ಬೇರೆ ದಾರಿಯಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ, Contempt of court ಬಗ್ಗೆ ಒತ್ತಿ ಹೇಳಿದ್ದಾರೆ.
ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರನ್ನು, ಸಂಘ ಸಂಸ್ಥೆಗಳಿಗೆ, ಅಭಿನಂದಿಸಿದ ಮುಖ್ಯಮಂತ್ರಿಗಳು ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಅಧಿಕಾರಿಗಳನ್ನು ಕೂಡ ಅಭಿನಂದಿಸಿದ್ದಾರೆ. ರೈತ ಸಂಘದ ಪದಾಧಿಕಾರಿಗಳ ಜೊತೆ ಮಾತುಕತೆಯ ವೇಳೆ, ನ್ಯಾಯಾಂಗ ನಿಂದನೆ ಮಾಡಿದರೆ, ಸರ್ಕಾರ ಡಿಸ್ಮಿಸ್ ಆಗಬಹುದು ಎಂದು ಹೇಳಿದ್ದಾರೆ.

"ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ. ಹಳೇ ಬಾಕಿ ಸರಿದೂಗಿಸಬೇಕು ಎಂದು 3,000 ಕ್ಯೂಸೆಕ್ ನೀಡಲು ಸೂಚಿಸಿದ್ದಾರೆ. ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ಮರುಪರಿಶೀಲನಾ ಅರ್ಜಿ ಹಾಕುವಂತೆಯೂ ಸೂಚಿಸಿದ್ದಾರೆ" ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
"ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್ ಗಳೊಂದಿಗೆ ಸಭೆ ಕರೆಯಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು"ಎಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಅವರು ಹೇಳಿದ್ದಾರೆ.
ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು
" ನೀರು ಕೊಡಬಾರದೆಂದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, contempt of court ಆಗುತ್ತದೆ, ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ" ಎಂದು ಸಿದ್ದರಾಮಯ್ಯ ಪರಿಸ್ಥಿತಿಯನ್ನು ವಿವರಿಸಿದ್ದರು.

ಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಸ್ತಾಪ
ಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಪ್ರಸ್ತಾಪ ಮಾಡಬೇಕು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆ ಇಲ್ಲ. ಹಾಗಾಗಿ ತೀವ್ರವಾಗಿ ಇದನ್ನು ಮಂಡಿಸಬೇಕು. ಮೇಕೆದಾಟು ಬ್ಯಾಲೆನ್ಸಿಂಗ್ ಜಲಾಶಯವಾಗಿ 67 ಟಿಎಂಸಿ ನೀರು ಸಂಗ್ರಹ ಮಾಡುವ ಸಾಮರ್ಥ್ಯ ಹೊಂದಲಿದೆ. ವಿದ್ಯುತ್ ಹಾಗೂ ಕುಡಿಯುವ ನೀರಿಗೆ ಅದನ್ನು ಬಳಸಲಾಗುವುದು. ಸಂಕಷ್ಟ ಬಂದಾಗ ತಮಿಳುನಾಡಿಗೆ ನೀರು ಬಿಡಬಹುದು ಎಂದು ಅಭಿಪ್ರಾಯ ಪಟ್ಟರು.
ತಮಿಳುನಾಡಿಗೆ ಹಿಂಗಾರು ಮಳೆಯಿದೆ
ಈ ವರ್ಷ ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಗಿದೆ. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ, ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.












Click it and Unblock the Notifications