Cauvery river water: ಕಬಿನಿ ಜಲಾಶಯದ ಕ್ರಸ್ಟ್ ಗೇಟ್ ಮುಚ್ಚಿದ ಅಧಿಕಾರಿಗಳು: ತಮಿಳುನಾಡಿಗೆ ಕಮ್ಮಿಯಾದ ಕಾವೇರಿ ನೀರಿನ ಹರಿವು
ಮೈಸೂರು, ಆಗಸ್ಟ್ 24: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿದ್ದ ಕಬಿನಿ ಜಲಾಶಯದ ಕ್ರಸ್ಟ್ ಗೇಟ್‌ಗಳನ್ನು ಬಂದ್ ಮಾಡಲಾಗಿದೆ. ಈ ಮೂಲಕ ತಮಿಳುನಾಡಿಗೆ ಬಿಡಲಾಗುತ್ತಿದ್ದ ನೀರಿನ ಪ್ರಮಾಣವನ್ನು ಕಡಿತಗೊಳಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ ಮಳೆಯ ಅಭಾವ ಕಾಣಿಸಿಕೊಂಡಿದೆ. ಇಷ್ಟಿದ್ದರೂ, ತಮಿಳುನಾಡಿಗೆ ಕರ್ನಾಟಕ ಸರ್ಕಾರ ನೀರು ಹರಿಸುತ್ತಿದೆ ಎಂದು ಆಕ್ರೋಶಗೊಂಡಿದ್ದ ರೈತರು ಹಾಗೂ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದವು.
ಬುಧವಾರ ನಡೆದ ಸರ್ವಪಕ್ಷಗಳ ಸಭೆ ಬಳಿಕ ನೀರು ಹರಿಯುವಿಕೆಯನ್ನು ಕಡಿಮೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈಗಾಗಲೇ 6,000 ಕ್ಯೂಸೆಕ್‌ಗೂ ಹೆಚ್ಚು ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಕಬಿನಿ ಜಲಾಶಯದ ನೀರಿನ ಮಟ್ಟ 2,281 ಅಡಿಯಿಂದ 2,276 ಅಡಿಗೆ ಇಳಿದಿದೆ.
ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ನೀರಾವರಿ ಕಾಲುವೆಗೆ ಬಿಡುಗಡೆ ಮಾಡಬೇಕಿದ್ದ ನೀರಿನ ಪ್ರಮಾಣವನ್ನು ಕಡಿಮೆ ಮಾಡಿದ್ದಾರೆಂದು ತಿಳಿದುಬಂದಿದೆ.
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ವಿವಾದಕ್ಕೆ ಸಂಬಂಧಿಸಿದಂತೆ ರೈತರ ಹಿತಾಸಕ್ತಿ ಕಾಪಾಡಲು ಕರ್ನಾಟಕ ಸರ್ಕಾರದ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸೂತ್ರವನ್ನು ರೂಪಿಸಲು ನಾವು ಕ್ರಮಕೈಗೊಳ್ಳಲಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.
ಕಾವೇರಿ, ಮಹದಾಯಿ ಸೇರಿದಂತೆ ಅಂತಾರಾಜ್ಯ ನದಿ ವಿವಾದಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಗುರುವಾರ ಸರ್ವಪಕ್ಷ ಸಭೆ ಕರೆದಿದ್ದರು.
ತಮಿಳುನಾಡಿಗೆ ಕಾವೇರಿ ನೀರು ಬಿಡುವ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟವನ್ನು ಪರಿಣಾಮಕಾರಿಯಾಗಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಧಾನಿ ಮೋದಿ ಬಳಿ ಸರ್ವಪಕ್ಷ ನಿಯೋಗವನ್ನು ಕೊಂಡೊಯ್ಯುವ ಕುರಿತು ವಿರೋಧ ಪಕ್ಷಗಳು ಸಹಕಾರ ನೀಡಬೇಕೆಂದು ಸಿದ್ದರಾಮಯ್ಯ ಕೋರಿದರು.

'ರಾಜ್ಯದ ನೀರು, ಭಾಷೆ ಅಥವಾ ಗಡಿಯ ವಿಷಯದಲ್ಲಿ ಯಾವುದೇ ರಾಜಕೀಯ ಮಾಡಬಾರದು ಎಂಬುದು ಎಲ್ಲಾ ಪಕ್ಷಗಳ ಒಮ್ಮತದ ಅಭಿಪ್ರಾಯವಾಗಿದೆ. ರಾಜ್ಯದ ಒಳಿತಿಗಾಗಿ ಸರ್ಕಾರದ ಯಾವುದೇ ನಿಲುವಿಗೆ ವಿರೋಧ ಪಕ್ಷಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿವೆ. ರಾಜ್ಯದ ಹಿತಾಸಕ್ತಿ ಎಲ್ಲರಿಗೂ ಮುಖ್ಯವಾಗಿದೆ' ಎಂದು ಸಿದ್ದರಾಮಯ್ಯ ಹೇಳಿದರು.
'ನಮ್ಮ ರೈತರ ಹಿತಾಸಕ್ತಿ ಮತ್ತು ಕುಡಿಯುವ ನೀರಿನ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯವು ಸಾಧ್ಯವಾದಷ್ಟು ನೀರು ಬಿಡುಗಡೆ ಮಾಡಿದೆ. ಆದರೆ ನ್ಯಾಯಮಂಡಳಿ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ಇಂದಿಗೂ ಸಂಕಷ್ಟ ಸೂತ್ರ ಸಿದ್ಧವಾಗಿಲ್ಲ' ಎಂದು ಸಿಎಂ ತಿಳಿಸಿದರು.
ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಗೆಜೆಟ್ ಅಧಿಸೂಚನೆ ಹೊರಡಿಸುವ ಉದ್ದೇಶದಿಂದ ಪ್ರಧಾನಿ ಮತ್ತು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಲು ಚರ್ಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.












Click it and Unblock the Notifications