ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ
ಬೆಂಗಳೂರು, ಡಿಸೆಂಬರ್ 19: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್ ಎಜುಕೇಷನ್ ಫೌಂಡೇಶನ್ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡಿಕೆಶಿ ಅವರ ಪುತ್ರಿ ಐಶ್ವರ್ಯ ಅವರು ನ್ಯಾಷನಲ್ ಎಜುಕೇಷನ್ ಫೌಂಡೇಶನ್‌ಗೆ ಕಾರ್ಯದರ್ಶಿ ಆಗಿದ್ದಾರೆ.
ಸಿಬಿಐ ಅಧಿಕಾರಿಗಳು ಕೆಲ ಗಂಟೆಗಳಿಂದ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಿಬಿಐ ದಾಳಿ ನಡೆಸಿದೆ.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಕೆಶಿ, 'ನನ್ನ ಸಂಬಂಧಿಕರು ಹಾಗೂ ಬ್ಯುಸಿನೆಸ್ ಪಾರ್ಟನರ್‌ಗಳಿಗೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಈ ಕುರಿತು ಮಾಹಿತಿಯನ್ನೂ ಪಡೆದಿದ್ದಾರೆ. ಆದರೂ, ನನ್ನ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸುವುದು ಎಷ್ಟು ಸರಿ ಎಂದು ಕೇಳಿದ್ದಾರೆ.
ಸಿಬಿಐನವರು ನಮಗೆ ಕಿರುಕುಳ ನೀಡುತ್ತಿದ್ದಾರೆ. ನನ್ನ ಕುಟುಂಬದ ಸದಸ್ಯರಿಗೆ ನಿರಂತರ ಕಿರುಕುಳವಾಗುತ್ತಿದೆ. ಅವರ ಉದ್ದೇಶ ರಾಜಕೀಯ ಪ್ರೇರಿತವಾಗಿದೆ. ಅವರಿಗೆ ಡಿಕೆಶಿಯೇ ನೇರ ಟಾರ್ಗೆಟ್ ಆಗಿದ್ದಾರೆ. ಅವರು ಕಿರುಕುಳ ಕೊಡಲಿ. ನಾನೇನೂ ತಪ್ಪು ಮಾಡಿಲ್ಲ. ಎಲ್ಲವೂ ನ್ಯಾಯಯುತವಾಗಿದೆ. ಕಾಂಗ್ರೆಸ್‌ಗೆ ತೊಂದರೆ ಕೊಡಬೇಕೆಂದು ಈ ರೀತಿ ಮಾಡುತ್ತಿದ್ದಾರೆ ಎಂದು ಡಿಕೆಶಿ ಹೇಳಿಕೆ ನೀಡಿದ್ದಾರೆ.

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಡಿಕೆಶಿ ಜೈಲುವಾಸ ಅನುಭವಿಸಿದ್ದಾರೆ.
ಮೋದಿ ನೇತೃತ್ವದ ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಡಿಕೆಶಿ ಈ ಹಿಂದಿನಿಂದಲೂ ಆರೋಪಿಸುತ್ತಾ ಬಂದಿದ್ದಾರೆ.
ಕರ್ನಾಟಕ ವಿಧಾನಸಭೆ ಚುಣಾವಣೆಗೆ ಇನ್ನೇನು ನಾಲ್ಕೈದು ತಿಂಗಳು ಬಾಕಿ ಇರುವಾಗಲೇ ಡಿಕೆಶಿ ಒಡೆತನದ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದ್ದು, ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.











Click it and Unblock the Notifications