Puneeth Kerehalli Arrest: ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ; ಒಂದು ವರ್ಷ ಸಿಗಲ್ಲ ಜಾಮೀನು!
ಬೆಂಗಳೂರು, ಆಗಸ್ಟ್ 12: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಹೌದು, ಬೆಂಗಳೂರಿನ ಜೆಪಿ ನಗರದಲ್ಲಿ ವಾಸಿಸುತ್ತಿದ್ದ ಪುನೀತ್ ಕೆರೆಹಳ್ಳಿ ಮೂಲತಃ ಹಾಸನ ಮೂಲದವನಾಗಿದ್ದಾನೆ. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಸಂಘಟನೆಯನ್ನು ನಡೆಸುತ್ತಿದ್ದು, ಆ ಸಂಘಟನೆಯ ಮೂಲಕ ಗೋರಕ್ಷಣೆ, ಧರ್ಮರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯದಲ್ಲಿ ತೊಡಗಿದ್ದಾನೆ ಎಂದು ತಿಳಿದು ಬಂದಿದೆ.

ರಾಷ್ಟ್ರ ರಕ್ಷಣೆ ಹೆಸರಿನಲ್ಲಿ ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ ಕೃತ್ಯದಲ್ಲೂ ಪದೇ ಪದೇ ಭಾಗಿಯಾಗುತ್ತಿದ್ದರು ಎಂದು ತಿಳಿದು ಬಂದಿದೆ. ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದೆ.
ಹಲವು ತಿಂಗಳಿನಿಂದ ಮಾಹಿತಿ ಕಲೆ ಹಾಕಿರುವ ಪೊಲೀಸರು, ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿರುವ ಬಗ್ಗೆ ಶುಕ್ರವಾರ ತಡರಾತ್ರಿ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಸೇರಿದಂತೆ ವಿವಿಧ ಠಾಣೆಗಳಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಮಾಜ ವಿರೋಧಿ ಕೃತ್ಯಗಳನ್ನು ಆಧರಿಸಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಪುನೀತ್ ಕೆರೆಹಳ್ಳಿ 2013 ರಿಂದ 2023 ರವರಗೆ ಹತ್ತು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸಮಾಜದಲ್ಲಿ ಶಾಂತಿ ಕದಡುವ ಯತ್ನ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಹಿನ್ನೆಲೆಯಲ್ಲಿ ಮೇಲೆ ಮೇಲಿಂದ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪುನೀತ್ ಕೆರೆಹಳ್ಳಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇನ್ನೂ ಕೆಲ ತಿಂಗಳ ಹಿಂದೆ ಗೋಸಾಗಾಟ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿಯನ್ನು ತಡೆದು ಆ ವಾಹನದಲ್ಲೇ ಕಟ್ಟಿ ಹಾಕಿ ವಿದ್ಯುತ್ ಶಾಕ್ ನೀಡುವ ಮೆಷಿನ್ ಮೂಲಕ ಶಾಕ್ ನೀಡಿ ಕೊಲೆ ಮಾಡಿದ ಆರೋಪ ಪುನೀತ್ ಕೆರೆಹಳ್ಳಿ ಮೇಲೆ ಬಂದಿತ್ತು. ಮುಸ್ಲಿಂ ವ್ಯಾಪಾರಿ ಇದ್ರಿಷ್ ಪಾಷಾಗೆ ಪುನೀತ್ ಕೆರೆಹಳ್ಳಿ ಶಾಕ್ ನೀಡುವ ವಿಡಿಯೋವನ್ನು ಆತನೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ನಂತರ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಗೂಂಡಾ ಕಾಯ್ದೆಯಡಿಯಲ್ಲಿ ಬಂಧನಕ್ಕೊಳಗಾದ ವ್ಯಕ್ತಿಯನ್ನು ಇತರ ಪ್ರಕರಣಗಳಂತೆ 24 ಗಂಟೆಯೊಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯತೆ ಇರೋದಿಲ್ಲ. ಇಂತಹ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಒಂದು ವರ್ಷ ಜಾಮೀನು ಸಿಗುವುದಿಲ್ಲ.












Click it and Unblock the Notifications