ಬಿಡದಿಯಿಂದ ಮಂಡ್ಯದವರೆಗೆ ಬೈಪಾಸ್ : ಕೇಂದ್ರ ಒಪ್ಪಿಗೆ
ಬೆಂಗಳೂರು, ಮಾ. 12 : ಬಿಡದಿಯಿಂದ ಮಂಡ್ಯದ ತನಕ ಬೈಪಾಸ್ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಬೆಂಗಳೂರು-ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಈ ಯೋಜನೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಬಿಡದಿಯಿಂದ ಮಂಡ್ಯದ ತನಕ ಬೈಪಾಸ್ ನಿರ್ಮಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದರು. ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದರು. [ಬೆಂ-ಮೈ ಆರು ಪಥದ ರಸ್ತೆ : ಅಧ್ಯಯನ ವರದಿಯಲ್ಲೇನಿದೆ?]

1,300 ಕೋಟಿ ವೆಚ್ಚ : ಬಿಡದಿ, ರಾಮನಗರ, ಚನ್ನಪಟ್ಟಣ, ಮಂಡ್ಯದವರೆಗೆ ಬೈಪಾಸ್ ನಿರ್ಮಿಸುವ ಯೋಜನೆಗೆ ಸುಮಾರು 1200-1300 ಕೋಟಿ ರೂ. ವೆಚ್ಚವಾಗುವ ಸಾಧ್ಯತೆ ಇದೆ. ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿತ್ತು. ಆದರೆ, ಕೇಂದ್ರ ಸರ್ಕಾರ ಬೈಪಾಸ್ ನಿರ್ಮಾಣ ಮಾಡಲು ಒಪ್ಪಿಗೆ ನೀಡಿದೆ ಎಂದು ಮಾಹಿತಿ ನೀಡಿದರು.
ಈ ಬೈಪಾಸ್ ಯೋಜನೆ ನಿರ್ಮಾಣದ ಯೋಜನಾ ವರದಿಯನ್ನು ಸಿದ್ಧಪಡಿಸಿ ಕಾಮಗಾರಿಯನ್ನು ಆರಂಭಿಸಲಾಗುತ್ತದೆ. ಸುಮಾರು ಆರು ತಿಂಗಳಿನಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು. [ಬೆಂಗಳೂರು-ಮೈಸೂರು ಆರು ಪಥದ ರಸ್ತೆ ವಿಳಂಬ?]
ಗಡ್ಕರಿ ಭೇಟಿ : ಮಾರ್ಚ್ 31 ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಮಧುಗಿರಿ-ಗೌರಿಬಿದನೂರು, ಶ್ರೀನಿವಾಸಪುರ ನಡುವಿನ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.












Click it and Unblock the Notifications