Industry: ಉತ್ತರ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ: ಪ್ರಹ್ಲಾದ್ ಜೋಶಿ
ಬೆಂಗಳೂರು, ಆಗಸ್ಟ್ 14: ಉತ್ತರ ಕರ್ನಾಟಕಕ್ಕೆ 79ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಖುಷಿ ಸುದ್ದಿಯೊಂದು ಸಿಕ್ಕಿದೆ. ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ(SEZ) ಘೋಷಣೆ ಆಗಿದೆ. ಧಾರವಾಡದ ಇಟ್ಟಿಗಟ್ಟಿಯಲ್ಲಿ 'ಏಕಸ್ ಇನ್ಫ್ರಾ'ದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಕಂಪನಿಯು ಪ್ರಸ್ತಾಪಿಸಿತ ಎಲೆಕ್ಟ್ರಾನಿಕ್ ಘಟಕಗಳ ಸ್ಥಾಪನೆಗಾಗಿ ವಿಶೇಷ ಆರ್ಥಿಕ ವಲಯ (SEZ) ಬಗ್ಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಎಲೆಕ್ಟ್ರಾನಿಕ್ಸ ಘಟಕಗಳ ಅವಶ್ಯಕತೆ ಇದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ ಘೋಷಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಂಬಂಧಿಸಿದ ಸಚಿವರ ಗಮನಕ್ಕೆ ತಂದಿದ್ದರು.

ಇದೀಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಚಿವ ಜೋಶಿ ಅವರ ಮನವಿಗೆ ಸ್ಪಂದಿಸಿದ್ದಾರೆ. ಧಾರವಾಡದ ಇಟ್ಟಿಗಟ್ಟಿಯಲ್ಲಿ SEZ ಘೋಷಣೆ ಮಾಡಲಾಗಿದೆ. ಈ ಕುರಿತು ಕೇಂದ್ರ ಸಚಿವರು ಅಧಿಕೃತ ಮಾಹಿತಿ ನೀಡಿದ್ದಾರೆ.
ಒಟ್ಟು 391 ಎಕರೆ ಭೂಮಿ ಹೊಂದಿರುವ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್‌ನಲ್ಲಿ ಈಗ 28 ಎಕರೆ ಭೂಮಿಯಲ್ಲಿ ವಿಶೇಷ ಆರ್ಥಿಕ ವಲಯ ಘೋಷಣೆ ಆಗಿದೆ. ಉತ್ತರ ಕರ್ನಾಟಕದ ಅದರಲ್ಲಿಯೂ ವಿಶೇಷವಾಗಿ ಹುಬ್ಬಳ್ಳಿ-ಧಾರವಾಡ ಕೈಗಾರಿಕೋದ್ಯಮಿಗಳಿಗೆ ಕೇಂದ್ರದ ಈ ನಿರ್ಧಾರವು ಹರ್ಷ ತಂದಿದೆ ಎಂದು ಪ್ರಹ್ಲಾದ್ ಜೋಶಿಯವರು ಪ್ರತಿಕ್ರಿಯಿಸಿದ್ದಾರೆ.
ಕೇಂದ್ರದ ಈ ಕೊಡುಗೆಯಿಂದ ಉತ್ತರ ಕರ್ನಾಟಕ ಭಾಗಕ್ಕೆ ಬರುವ ದಿನಗಳಲ್ಲಿ ಹೊಸ ಎಲೆಕ್ಟ್ರಾನಿಕ್ಸ್ ಉದ್ಯಮಗಳು ಕಾಲಿಡುತ್ತಿದ್ದಂತೆ ಈ ವಿಶೇಷ ಆರ್ಥಿಕ ವಲಯವನ್ನು ವಿಸ್ತರಣೆ ಮಾಡಬಹುದಾಗಿದೆ. ಹುಬ್ಬಳ್ಳಿ-ಧಾರವಾಡದ ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ಈ ವಿಶೇಷ ಆರ್ಥಿಕ ವಲಯ ಉತ್ತೇಜನ ದೊರೆಯುತ್ತದೆ ಎಂದು ಅವರು ಹೇಳಿದರು.

ಭವಿಷ್ಯದಲ್ಲಿ ಹುಬ್ಬಳ್ಳಿಯು ಎಲೆಕ್ಟ್ರಾನಿಕ್ಸ್, ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪಾದನೆಯ ಶಕ್ತಿಕೇಂದ್ರವಾಗಿ ಪರಿವರ್ತನೆಯಾಗಲಿದೆ. ಹುಬ್ಬಳ್ಳಿ-ಧಾರವಾಡ ಕೌಶಲ್ಯಪೂರ್ಣ ಕಾರ್ಮಿಕರ ತಂಡದೊಂದಿಗೆ ತ್ವರಿತ ಕೈಗಾರಿಕಾ ಬೆಳವಣಿಗೆ, ಗುಣಮಟ್ಟದ ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಪ್ರಗತಿಗೂ ಕೇಂದ್ರದ ಈ ನಿರ್ಧಾರ ಪೂರಕವಾಗಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.
ಮನವಿಗೆ ಸ್ಪಂದಿಸಿ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿದ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ವನ್ನಾಗಿ ಘೋಷಿಸಿದ್ದಕ್ಕೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಹಾಗೂ ಕರ್ನಾಟಕ ಸರ್ಕಾರದ ವಾಣಿಜ್ಯ, ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಈ ವೇಳೆ ಜೋಶಿಯವರು ಧನ್ಯವಾದ ತಿಳಿಸಿದರು.












Click it and Unblock the Notifications