Government Jobs: ಸರ್ಕಾರಿ ಹುದ್ದೆ ನೇಮಕಾತಿಗೆ ಇದ್ದ ಈ ನಿರ್ಬಂಧ ತೆರವು: ಸಿಎಂ ಗುಡ್‌ನ್ಯೂಸ್
Karnataka government jobs: ಸರ್ಕಾರಿ ಹುದ್ದೆ ಪಡೆಯಬೇಕು ಎನ್ನುವುದು ಎಷ್ಟೋ ಜನರ ಕನಸು. ಹಗಲಿರುಳು ಶ್ರಮ ಪಟ್ಟು ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳುವುದು ಸವಾಲಿನ ಕೆಲಸ. ಆದರೆ ಕೆಲವರಿಗೆ ಪ್ರತಿಭೆ ಇದ್ದರೂ ಅರ್ಹತೆಯ ಮಾನದಂಡಗಳು ಉದ್ಯೋಗವನ್ನು ಕೈತಪ್ಪಿಸುತ್ತವೆ. ಸದ್ಯ ಕರ್ನಾಟಕದಲ್ಲಿ ಸರ್ಕಾರಿ ಹುದ್ದೆ ಪಡೆಯಲು ಇದ್ದ ನಿರ್ಬಂಧವೊಂದನ್ನು ತೆರವು ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಇಂದು ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ಯಾವುದೇ ಜಾತಿಗೆ ರೋಸ್ಟರ್‌ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಈಗಾಗಲೇ ನೇಮಕಾತಿ ಅಧಿಸೂಚನೆ
ಇನ್ನು ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಹುದ್ದೆ ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಕೂಡ ಮಾಡಲಾಗಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ (ಕೆಇಎ) ಈಗಾಗಲೇ ನೇಮಕಾತಿ ಅಧಿಸೂಚನೆ ಸಹ ಹೊರಡಿಸಲಾಗಿದೆ ಎಂದು ಸಿಹಿಸುದ್ದಿ ನೀಡಿದ್ದಾರೆ.
ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ ಅವರು, ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ನಾವು ಸದಾ ಬದ್ಧರಿದ್ದು, ಈ ನಿಟ್ಟಿನಲ್ಲಿ ಒಳಮೀಸಲಾತಿ ಜಾರಿ ಒಂದು ಕ್ರಾಂತಿಕಾರಕ ಹೆಜ್ಜೆ ಎಂದಿದ್ದಾರೆ.
ಬಳಿಕ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವದ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಈ ಸಭೆಯಲ್ಲಿ ಸಚಿವರಾದ ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಬಿ.ಆರ್.ತಿಮ್ಮಾಪುರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್ ಇನ್ನು ಮುಂತಾದವರು ಉಪಸ್ಥಿತರಿದ್ದರು.












Click it and Unblock the Notifications