ಚನ್ನಗಿರಿ ಬಿಜೆಪಿ ಶಾಸಕ ಜೈಲಿನಿಂದ ಬಿಡುಗಡೆ, ಮುಂದೇನು?
ಬೆಂಗಳೂರು, ಏಪ್ರಿಲ್ 16; ಪುತ್ರನ ಲಂಚ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಹಾಲಿ ಶಾಸಕರಿಗೆ ಬಿಜೆಪಿ ಚನ್ನಗಿರಿಯಲ್ಲಿ ಟಿಕೆಟ್ ನೀಡಿಲ್ಲ. ಅವರ ಮುಂದಿನ ನಡೆ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಮೇ 10ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ನೀಡಿದ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು. ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಅವರು 15 ದಿನಗಳ ಕಾಲ ಜೈಲಿನಲ್ಲಿದ್ದರು.

ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಅವರು, "ನ್ಯಾಯಾಂಗದ ಬಗ್ಗೆ ನನಗೆ ವಿಶ್ವಾಸದೆ. ಈ ಆರೋಪದಿಂದ ನಾನು ಮುಕ್ತನಾಗುತ್ತೇನೆ. 4 ಗೋಡೆಗಳ ನಡುವೆ ನಾನು ಇದ್ದೆ, ಹೊರಗೆ ಏನು ನಡೆದಿದೆ ಎಂಬುದರ ಅರಿವು ನನಗೆ ಇಲ್ಲ. ಈಗ ನಾನು ಏನನ್ನೂ ಹೇಳುವ ಪರಿಸ್ಥಿತಿಯಲ್ಲಿಲ್ಲ. ಮನೆಗೆ ಹೋಗಿ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ" ಎಂದು ಹೇಳಿದರು.
ಚನ್ನಗಿರಿಯಲ್ಲಿ ಸಭೆ; ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಟಿಕೆಟ್ ಕೈತಪ್ಪಿದೆ. ಬಿಜೆಪಿ ಎಚ್. ಎಸ್. ಶಿವಕುಮಾರ್‌ಗೆ ಟಿಕೆಟ್ ನೀಡಿದೆ. ಮಾಡಾಳ್ ವಿರೂಪಾಕ್ಷಪ್ಪಗೆ ಟಿಕೆಟ್ ಕೈತಪ್ಪಿದರೆ ಪುತ್ರ ಮಾಡಾಳ್ ಮಲ್ಲಿಕಾರ್ಜುನ್‌ಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆ ಇತ್ತು.
ಆದರೆ ಬಿಜೆಪಿ ಮಾಡಾಳ್ ಕುಟುಂಬದವರಿಗೆ ಟಿಕೆಟ್ ನೀಡಿಲ್ಲ. ತಂದೆಯ ಆಗಮನದ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಹಿರಿಯ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಚನ್ನಗಿರಿಯ ನಿವಾಸದಲ್ಲಿ ಬೆಂಬಲಿಗರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮುಂದಿನ ರಾಜಕೀಯ ನಡೆಯ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಶಾಸಕರು ಘೋಷಣೆಯೊಂದನ್ನು ಮಾಡುವ ನಿರೀಕ್ಷೆ ಇದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್‌ಗೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ 40 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರನ್ನು ಬಂಧಿಸಿದ್ದರು. ಕೆಎಸ್‌ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪರ ಬೆಂಗಳೂರಿನ ಶಾಸಕರ ಖಾಸಗಿ ಕಚೇರಿಯಲ್ಲಿಯೇ ಈ ಬಂಧನ ನಡೆದಿತ್ತು.
ಬಳಿಕ ಲೋಕಾಯುಕ್ತರು ಪ್ರಶಾಂತ್ ಮಾಡಾಳ್ ನಿವಾಸದ ಮೇಲೆ ದಾಳಿ ನಡೆಸಿದಾಗ 6 ಕೋಟಿ ದಾಖಲೆ ಇಲ್ಲದ ನಗದು ಪತ್ತೆಯಾಗಿತ್ತು. ಚನ್ನಗಿರಿಯಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆಯೂ ದಾಳಿಯಾಗಿತ್ತು. ಈ ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಆರೋಪಿ ಎಂದು ಲೋಕಾಯುಕ್ತರು ಎಫ್‌ಐಆರ್ ದಾಖಲು ಮಾಡಿದ್ದರು. ಆದರೆ ಶಾಸಕರು ಕರ್ನಾಟಕ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು. ಮಾರ್ಚ್ 28ರಂದು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬಳಿಕ ಮಾಡಾಳ್ ವಿರೂಪಾಕ್ಷಪ್ಪ ಬಂಧನವಾಗಿತ್ತು.
ಪ್ರಚಾರ ಆರಂಭಿಸಿದ್ದರು; ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಟಿಕೆಟ್ ನೀಡಲಿದೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಹಿರಿಯ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಚುನಾವಣಾ ಪ್ರಚಾರ ಆರಂಭಿಸಿದ್ದರು. ಚನ್ನಗಿರಿ ಕ್ಷೇತ್ರದಲ್ಲಿ 2004ರಲ್ಲಿ ಬಿಜೆಪಿಯಿಂದ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಮಾಡಾಳ್ ವಿರೂಪಾಕ್ಷಪ್ಪ ಸೋಲು ಕಂಡಿದ್ದರು. 2008 ಚುನಾವಣೆಯಲ್ಲಿ ಗೆಲ್ಲುವ ಮೂಲಕ ಕ್ಷೇತ್ರವನ್ನು ವಶಕ್ಕೆ ಪಡೆದಿದ್ದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಟ್ಟಾ ಬೆಂಬಲಿಗರಾದ ಅವರು 2013ರಲ್ಲಿ ಚನ್ನಗಿರಿಯಲ್ಲಿ ಕೆಜೆಪಿ ಅಭ್ಯರ್ಥಿಯಾದರು. ಆಗ ಬಿಜೆಪಿ, ಕೆಜೆಪಿ ಗೊಂದಲದಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ವಡ್ನಾಳ್ ರಾಜಣ್ಣ ಗೆದ್ದರು. 2018ರ ಚುನಾವಣೆಯಲ್ಲಿ ಮತ್ತೆ ಮಾಡಾಳ್ ವಿರೂಪಾಕ್ಷಪ್ಪ ಗೆಲುವು ಕಂಡರು.
ಲಂಚ ಪ್ರಕರಣ ಬೆಳಕಿಗೆ ಬಂದ ಬಳಿಕ ಮಾಡಾಳ್ ವಿರೂಪಾಕ್ಷಪ್ಪಗೆ ಟಿಕೆಟ್ ಕೈತಪ್ಪಲಿದೆ ಎಂಬ ಸುದ್ದಿ ಇತ್ತು. ಆದರೆ ಮಾಡಾಳ್ ಮಲ್ಲಿಕಾರ್ಜುನ್‌ಗೆ ಟಿಕೆಟ್ ಸಿಗುವ ನಿರೀಕ್ಷೆ ಇತ್ತು. ಅವರು ಅದೇ ಭರವಸೆ ಮೇಲೆ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದರು. ಆದರೆ ಮಾಡಾಳ್ ಕುಟುಂಬಕ್ಕೆ ಪಕ್ಷ ಟಿಕೆಟ್ ನೀಡಿಲ್ಲ. ಇದರಿಂದಾಗಿ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಶಾಸಕರು ಯಾವ ತೀರ್ಮಾನ ಕೈಗೊಳ್ಳಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಹಾಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ತುಮ್ಕೋಸ್ ಮಾಜಿ ಅಧ್ಯಕ್ಷ ಶಿವಕುಮಾರ್‌ಗೆ ಟಿಕೆಟ್ ನೀಡಲಾಗಿದೆ. ಮತ್ತೊಂದು ಕಡೆ ಕಾಂಗ್ರೆಸ್‌ನ ವಡ್ನಾಳ್ ರಾಜಣ್ಣ ಅವರು ಕೂಡಾ ವಯಸ್ಸಿನ ಕಾರಣಕ್ಕೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷ ಕಿಸಾನ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಬಸವರಾಜ್ ಶಿವಗಂಗಾ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.












Click it and Unblock the Notifications