2+1 ಅನುಪಾತದಲ್ಲಿ ಮೈತ್ರಿ ಸೀಟ್ ಹಂಚಿಕೆ: ಸಿ.ಪಿ ಯೋಗೇಶ್ವರ್‌ಗೆ ನಿರಾಸೆ
ಬೆಂಗಳೂರು, ಅಕ್ಟೋಬರ್ 17: ಕರ್ನಾಟಕದ ಮೂರು ಕ್ಷೇತ್ರಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮತ್ತೆ ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಲಿದೆ. ಈ ಮೂರು ಕ್ಷೇತ್ರಗಳಲ್ಲಿ ನವೆಂಬರ್ 13ಕ್ಕೆ ಚುನಾವಣೆ ನಡೆಯಲಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಬಿರುಸು ಪಡೆದುಕೊಂಡಿದೆ. ಅದರಲ್ಲೂ ಟಿಕೆಟ್‌ಗಾಗಿ ಭಾರೀ ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಲಾಬಿಗಳು ನಡೆಯುತ್ತಿದ್ದು.ಕಾಂಗ್ರೆಸ್ ವರ್ಸಸ್ ಬಿಜೆಪಿ ಹಣಾಹಣಿ ಶುರುವಾಗಿದೆ.

ಈ ಮೂರು ಕ್ಷೇತ್ರಗಳಲ್ಲಿ ಮೂರು ಪಕ್ಷಗಳಿಗೂ ಸವಾಲ್ ಆಗಿದ್ದು.. ಗೆಲ್ಲಲೇ ಬೇಕು ಎಂಬ ಹಠಕ್ಕೆ ಬಿದ್ದಿವೆ. ಒಂದು ಕಡೆ ಆಡಳಿತರೂಢ ಕಾಂಗ್ರೆಸ್ ಈ ಮೂರು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಇತ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, 2+1 ಅನುಪಾತದಲ್ಲಿ ಮೈತ್ರಿ ಸೀಟ್ ಹಂಚಿಕೆಯಾಗಲಿದೆ ಎನ್ನುವ ಮಾತುಗಳು ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿದೆ.
2+1 ಅನುಪಾತದಲ್ಲಿ ಮೈತ್ರಿ ಸೀಟ್ ಹಂಚಿಕೆಯ ಲೆಕ್ಕಾಚಾರ ನಡೆದಿದೆ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಬಳಿಕ ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಆಗುವ ಸಾಧ್ಯತೆ ಇದೆ. ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ಭದ್ರಕೋಟೆಯಾಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನ ಜೆಡಿಎಸ್ ಮತ್ತೆ ಪಡೆಯಲು ತಂತ್ರಗಾರಿಕೆಯನ್ನ ರೂಪಿಸಿದೆ. ಈ ನಿಟ್ಟಿನಲ್ಲಿ 2+1 ಅನುಪಾತ ದಾಳವನ್ನ ಜೆಡಿಎಸ್ ಉರುಳಿಸಿದೆ. ಸಂಡೂರು, ಶಿಗ್ಗಾಂವಿ ಕ್ಷೇತ್ರವನ್ನ ಬಿಜೆಪಿಗೆ ಬಿಟ್ಟುಕೊಟ್ಟು, ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿಯನ್ನ ಕಣಕ್ಕಿಳಿಸಲು ದಳಪತಿಗಳು ಮಾಸ್ಟರ್ ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ.
ಬೈ ಎಲೆಕ್ಷನ್ ದಿನಾಂಕ ಘೋಷಣೆಯ ಬಳಿಕ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಈ ವಾರಾಂತ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದೆಹಲಿಗೆ ತೆರಳಲಿದ್ದಾರೆ. 2+1 ಅನುಪಾತದಲ್ಲಿ ಮೈತ್ರಿ ಲೆಕ್ಕಾಚಾರವನ್ನ ಹೆಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್ ನಾಯಕರ ಮುಂದೆ ಪ್ರಸ್ತಾಪ ಮಾಡಲಿದ್ದಾರೆ. ಈಗಾಗಲೇ ರಾಜ್ಯ ನಾಯಕರು ಸಹ ಮೂರು ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಕುರಿತು ಚರ್ಚೆ ನಡೆದಿದ್ದು, ಮುಂದಿನ ವಾರದಲ್ಲಿ ಬಿಜೆಪಿ ಹೈಕಮಾಂಡ್ ಟಿಕೆಟ್ ಫೈನಲ್ ಮಾಡಲಿದೆ.
ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ಆಗಲಿದೆ. ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕೆ ಹಾಗೂ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಚಿಹ್ನೆಯಡಿಯಲ್ಲಿ ಅಭ್ಯರ್ಥಿ ಕಣಕ್ಕೆ ಇಳಿಸೋ ಲೆಕ್ಕಾಚಾರ ಹಾಕಲಾಗಿದೆ. ಹೈಕಮಾಂಡ್ ನಾಯಕರ ಭೇಟಿಗೆ ತೆರಳಲಿರುವ ಬಿ.ವೈ.ವಿಜಯೇಂದ್ರ ಅವರು ಮಹತ್ವದ ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕರಾದ ಹೆಚ್ ಡಿ ಕುಮಾರಸ್ವಾಮಿ ಅವರು ಭಾಗಿಯಾಗಲಿದ್ದು, ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಚನ್ನಪಟ್ಟಣ ಕ್ಷೇತ್ರಕ್ಕೆ ಹೆಚ್ ಡಿ ಕುಮಾರಸ್ವಾಮಿ ಅವರು ಬೇಡಿಕೆ ಇಡಲಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ರಾಜ್ಯದ ಕೋರ್ ಕಮಿಟಿ ಸದಸ್ಯರು ಬಿಜೆಪಿ ಅಭ್ಯರ್ಥಿ ಫೈನಲ್ ಮಾಡಿದ್ದಾರೆ. ಅದೇ ಪಟ್ಟಿಯೊಂದಿಗೆ ಹೈಕಮಾಂಡ್ ಭೇಟಿಗೆ ವಿಜಯೇಂದ್ರ ತೆರಳಲಿದ್ದಾರೆ. ಮೂಲಗಳ ಪ್ರಕಾರ ಚನ್ನಪಟ್ಟಣ ಉಪಚುನಾವಣೆಯಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ನಿರಾಸೆ ಆಗುವ ಸಾಧ್ಯತೆ ಇದೆ. ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಹೆಸರನ್ನು ಘೋಷಿಸಲಿದ್ದು, ಚನ್ನಪಟ್ಟಣದಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರನ್ನ ಕಣಕ್ಕಿಳಿಸಲಿದ್ದಾರೆ ಎನ್ನಲಾಗಿದೆ.












Click it and Unblock the Notifications