ಬೈ ಎಲೆಕ್ಷನ್ ದಿನಾಂಕ ಘೋಷಣೆ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ದೆಹಲಿಗೆ?
ಬೆಂಗಳೂರು, ಅಕ್ಟೋಬರ್ 16: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಮೂರು ಕ್ಷೇತ್ರಗಳ ಫೈಕಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸಾಕಷ್ಟು ಮಹತ್ವವನ್ನ ಪಡೆದುಕೊಂಡಿದ್ದು, ದಿಢೀರನೇ ನಿಖಿಲ್ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಹೆಚ್ ಡಿ ಕುಮಾರಸ್ವಾಮಿ ಅವರು ಸಂಸದರಾಗಿ ಕೇಂದ್ರದ ಮಂತ್ರಿಯಾದ ಹಿನ್ನೆಲೆ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಉಪ ಚುನಾವಣಾ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ತಯಾರಿ ನಡೆಯುತ್ತಿದೆ ಎನ್ನಲಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಂಜುನಾಥ್ ಅವರ ಗೆಲುವಿಗೆ ಸಿ ಪಿ ಯೋಗೇಶ್ವರ್ ಅವರು ಸಾಕಷ್ಟು ಶ್ರಮಿಸಿದ್ರು. ಈ ಚುನಾವಣೆ ಸಂದರ್ಭದಲ್ಲಿ ಚನ್ನಪಟ್ಟಣ ಟಿಕೆಟ್ ಕುರಿತು ಚರ್ಚೆಯಾಗಿತ್ತು ಎನ್ನಲಾಗಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ಭದ್ರಕೋಟೆಯಾಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎಂಬುದು ತಿಳಿದುಬಂದಿದೆ. ಇತ್ತ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಸಿ ಪಿ ಯೋಗೇಶ್ವರ್ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಡೌಟ್ ಎನ್ನಲಾಗಿದ್ದು, ಬೈ ಎಲೆಕ್ಷನ್ ದಿನಾಂಕ ಘೋಷಣೆಯಾಗುತ್ತಿದ್ದಂತೆ ನಿಖಿಲ್ ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಇದರಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ. ಪಿ ಯೋಗೇಶ್ವರ್ಗೆ ಹಿನ್ನೆಡೆಯಾಗುವ ಸಾಧ್ಯತೆಯಿದೆ. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮದೇ ಕುಟುಂಬದ ಡಾ. ಸಿ. ಎನ್ ಮಂಜುನಾಥ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿ ಸೇಡು ತೀರಿಸಿಕೊಂಡಿರುವ ಕುಮಾರಸ್ವಾಮಿ, ಇದೀಗ ಚನ್ನಪಟ್ಟಣದಲ್ಲಿ ತಮ್ಮ ಅಸ್ತಿತ್ವವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಪುತ್ರನನ್ನು ಕಣಕ್ಕಿಳಿಸಲು ಹೆಚ್ಡಿಕೆ ಕಾರ್ಯತಂತ್ರ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸಂಚಾರವನ್ನ ಆರಂಭಿಸಿದ್ದು, ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದ್ದರು. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಮಿತ್ರಪಕ್ಷ, ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಕೆಲಸ ಮಾಡಬೇಕು ಎಂದು ಮುಖಂಡರಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಅವರು ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.
ಇತ್ತ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪಣತೊಟ್ಟಿದ್ದು, ದೆಹಲಿಯ ಬಿಜೆಪಿ ನಾಯಕರ ಜೊತೆಗೆ ಹೆಚ್ ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು ಎಂದು ಹೇಳಲಾಗಿದೆ.
ಇನ್ನೂ ನಿಖಿಲ್ ಕುಮಾರಸ್ವಾಮಿ ಅವರು ಉಪ ಚುನಾವಣೆಯ ಅಭ್ಯರ್ಥಿ ಆಗಬೇಕು ಎಂಬ ಒತ್ತಡ, ಒತ್ತಾಯ ಇರುವುದು ನಿಜ. ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಅಂತ 95% ನಾಯಕರು, ಮುಖಂಡರ ಅಭಿಪ್ರಾಯವಿದೆ. ಆದರೆ, ನಾವು ಈಗ ಇರುವ ಸನ್ನಿವೇಶ ನೋಡಿಕೊಂಡು ನಿರ್ಧಾರ ಕೈಗೊಳ್ಳಬೇಕು. ಏನೇನು ಬೆಳವಣಿಗೆಗಳು ಇವೆ ಅಂತ ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.












Click it and Unblock the Notifications