ಟಿಕೆಟ್ ಕೊಡಿಸುವುದಾಗಿ ವಂಚನೆ; ಹಾಲಾಶ್ರೀಗೆ ಜಾಮೀನು ನೀಡಿದ ಕೋರ್ಟ್
ಬೆಂಗಳೂರು, ನವೆಂಬರ್ 09; ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ 3ನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೇಸ್‌ನಲ್ಲಿ ಅಧೀನ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅದೇ ಆಧಾರದಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿದೆ. ಸರ್ಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿದಾರರ ವಿರುದ್ಧದ ತನಿಖಾಧಿಕಾರಿಗಳು ಬುಧವಾರ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಆಗ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು, ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವುದರಿಂದ ತನಿಖೆ ಪೂರ್ಣಗೊಂಡಂತಾಗಿದೆ. ಇದರಿಂದ ಅರ್ಜಿದಾರರು ತನಿಖೆ ಎದುರಿಸುವ ಅಗತ್ಯವಿಲ್ಲವಾಗಿದೆ. ಅರ್ಜಿದಾರರು ಪಡೆದಿದ್ದಾರೆ ಎನ್ನಲಾದ ಹಣವನ್ನು ಈಗಾಗಲೇ ತನಿಖಾಧಿಕಾರಿಗಳು ಜಪ್ತಿ ಮಾಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ವಶಕ್ಕೆ ನೀಡಿದ್ದಾರೆ ಎಂದು ವಾದ ಮಂಡಿಸಿದರು.
ಏಳಕ್ಕಿಂತ ಕಡಿಮೆ ವರ್ಷ ಶಿಕ್ಷೆ ವಿಧಿಸಬಹುದಾದ ಆರೋಪಗಳು ಅರ್ಜಿದಾರರ ಮೇಲಿದೆ. ಇನ್ನೂ ಅವರ ಮೇಲಿನ ಆರೋಪಗಳ ಸತ್ಯಾಸತ್ಯತೆಯು ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆಯಲ್ಲಿ ಬಯಲಾಗಬೇಕಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಲು ಇದು ಅರ್ಹ ಪ್ರಕರಣವಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಈ ವಾದವನ್ನು ಪರಿಗಣಿಸಿದ ನ್ಯಾಯಪೀಠ, ಹಾಲಶ್ರೀ ಸ್ವಾಮೀಜಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ: ಉದ್ಯಮಿ ಗೋವಿಂದಬಾಬು ಪೂಜಾರಿ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ತನ್ನಿಂದ 5 ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ಆರೋಪಿಗಳಾದ ಹಿಂದೂ ಕಾರ್ಯಕರ್ತೆ ಚೈತ್ರಾ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ದೂರುದಾರರಿಂದ 1.5 ಕೋಟಿ ಹಣ ಪಡೆದ ಆರೋಪ ಮೇಲೆ ಹಾಲಶ್ರೀ ಸ್ವಾಮೀಜಿಯನ್ನು 2023ರ ಸೆ.19ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು. ಜಾಮೀನು ನೀಡಲು ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿತ್ತು. ಹಾಗಾಗಿ ಹಾಲಾಶ್ರೀ ಸ್ವಾಮೀಜಿ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.












Click it and Unblock the Notifications