ರಾಜ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ವರ್ಗಾವಣೆ
ಬೆಂಗಳೂರು, ನವೆಂಬರ್ 17 : ಕರ್ನಾಟಕದಲ್ಲಿ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸಂಜೀವ್ ಕುಮಾರ್ ಅವರನ್ನು ನೂತನ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿದ್ದ ಅನಿಲ್ ಕುಮಾರ್ ಝಾ ಅವರನ್ನು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.

ಅನಿಲ್ ಕುಮಾರ್ ಝಾ ಅವರು ಐದು ವರ್ಷಗಳಿಂದ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 2013ರ ವಿಧಾನಸಭೆ, 2014ರ ಲೋಕಸಭೆ ಚುನಾವಣೆ ಮತ್ತು ಹಲವು ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು.
ಭಾರತೀಯ ಚುನಾವಣಾ ಆಯೋಗ ಹೊಸ ಅಧಿಕಾರಿಯ ನೇಮಕದ ಸಂಬಂಧ ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿತ್ತು. ಜನಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 13ಎ ಅನ್ವಯ ಸಂಜೀವ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಸಂಜೀವ್ ಕುಮಾರ್ ಅವರು 1986ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ. ಕೌಶಲ ಅಭಿವೃದ್ಧಿ ಮತ್ತು ಉದ್ಯಮ ಶೀಲತೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು.
ಸಂಜೀವ್ ಕುಮಾರ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ.











Click it and Unblock the Notifications