GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ: ಸಿದ್ದರಾಮಯ್ಯ
ಮೈಸೂರು ಸೆಪ್ಟೆಂಬರ್ 22: ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು.
ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಮಾತನಾಡಿ, ಎಂಟು ವರ್ಷ ವಿಪರೀತ GST ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು.

GST 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು. ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ನುಡಿದರು.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಚಾಟಿ ಬೀಸಿದ್ದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, "ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು" ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ , ಸಂವಿಧಾನದ ಪೀಠಿಕೆ ಓದಲು ಹೇಳಿದೆ ಎಂದರು.
ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನನ್ನ ಹಸರಲ್ಲೇ ಇಬ್ಬರು ದೇವರನ್ನು ಹೊಂದಿರುವ ನಾನು ಅವರಿಗಿಂತ ಉತ್ತಮ ಹಿಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲುಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.
ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ಶ್ರೀಮತಿ ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.












Click it and Unblock the Notifications