CM Post Fight: ಸಿಎಂ ಸ್ಥಾನಕ್ಕೆ ಜಟಾಪಟಿ; ಡಿಕೆ ಶಿವಕುಮಾರ್ ಮುಖ ನೋಡುತ್ತಲೇ ವರಸೆ ಬದಲಿಸಿದ ಸಿದ್ದರಾಮಯ್ಯ!
ಕೂಡ್ಲಿಗಿ,ನವೆಂಬರ್ 10: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಎಂ ಸ್ಥಾನಕ್ಕಾಗಿ ಎರಡು ಬಣಗಳ ನಡುವೆ ಜಟಾಪಟಿ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕಮಾರ್ ಬಣ ತೆರೆಮರೆಯಲ್ಲಿ ತಂತ್ರಗಾರಿಕೆಯಲ್ಲಿ ತೊಡಗಿಸಿಕೊಂಡಿದೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿ ಪ್ರವಾಸವೂ ತೀವ್ರ ಕುತೂಹಲ ಕೆರಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣಾವಧಿ ಸಿಎಂ ಕುರಿತು ನೀಡಿರುವ ಹೇಳಿಕೆ ಕೈ ಪಾಳಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಕುರಿತು ನೀಡಿದ ಹೇಳಿಕೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆಗೆ ಮತ್ತಷ್ಟು ಇಂಬು ನೀಡಿದಂತಾಗಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ ನೋಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ತುಸು ಬದಲಾಯಿಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಇನ್ನೂ ಕೆಲ ದಿನಗಳ ಹಿಂದಷ್ಟೇ ಹೈಕಮಾಂಡ್ ತೀರ್ಮಾನಿಸಿದರೆ ಪೂರ್ಣಾವಧಿ ಸಿಎಂ ಆಗಿ ನಾನೇ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು.

ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ವಿಜಯಪುರ ಜಿಲ್ಲೆಯ ಕೂಡ್ಲಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಸಿದ್ದರಾಮಯ್ಯ ಆಡಿರುವ ಮಾತುಗಳು ಚರ್ಚೆಗೆ ಗ್ರಾಸವಾಗಿದೆ. ಈ ಕಾರ್ಯಕ್ರಮಲ್ಲಿ ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದೇನೆ ಎಂದು ಹೇಳಿದ್ದಾರೆ. ಇದಾದ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ ನೋಡಿ ಮಾತನ್ನು ತುಸು ಬದಲಿಸಿದರು. ನಮ್ಮ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಲಿದೆ ಎಂದು ಹೇಳಿದ್ದಾರೆ.
ಇನ್ನೂ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, 1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರವಾಗಿ ಶ್ಲಾಘಿಸಿದರು.
ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ. ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ. ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ ಕ್ಷೇತ್ರಕ್ಕೆ 1750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ ತಿಂಗಳು ಸರ್ಕಾರದ ಗ್ಯಾರಂಟಿಗಳು ತಲುಪುತ್ತಿವೆ. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ ಎಂದರು.
ಎರಡು ವರ್ಷದಲ್ಲಿ ನಮ್ಮ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ ಎಂದು ಲೆಕ್ಕ ಮುಂದಿಟ್ಟರು.ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ. ಸುಳ್ಳಿನ ಸರದಾರ ಬಿಜೆಪಿಯವರು ಈಗ ಸಾರ್ವಜನಿಕವಾಗಿ ಹರಾಜಾಗಿದ್ದಾರೆ. ಇವರು ಲಜ್ಜೆಗೆಟ್ಟು ಮತಗಳ್ಳತನಕ್ಕೆ ಇಳಿದು ಸಿಕ್ಕಿ ಬಿದ್ದಿದ್ದಾರೆ ಎಂದರು.
FRP ಮತ್ತು MSP ಎರಡನ್ನೂ ನಿಗಧಿ ಮಾಡೋದು ಕೇಂದ್ರದ ಬಿಜೆಪಿ ಸರ್ಕಾರ. ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ. ಆದರೆ, ವಿಜಯೇಂದ್ರ ತಮ್ಮದೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನು ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ಡ್ರಾಮಾ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರ್ಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನು ಕಾಪಾಡೊ ಕೆಲಸ ಮಾಡಿದೆ ಎಂದು ತಿಳಿಸಿದರು.












Click it and Unblock the Notifications