ಅಧಿಕಾರ ಹಸ್ತಾಂತರ: ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪುವುದಿಲ್ಲ: ಡಿ.ಕೆ. ಸುರೇಶ್ ಮಾತಿನ ಮರ್ಮವೇನು?
ಬೆಂಗಳೂರು, ನವೆಂಬರ್ 21: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಸಂಪುಟ ಪುನರ್ರಚನೆ ಮತ್ತು ಅಧಿಕಾರ ಹಂಚಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅಧಿಕಾರ ಹಂಚಿಕೆ ಕುರಿತು ಈ ಹಿಂದೆಯೂ ಚರ್ಚೆಯಾಗಿದ್ದು, ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರಾ ಎನ್ನುವ ಚರ್ಚೆಗಳು ಕೈ ಪಾಳಯದಲ್ಲಿ ಶುರುವಾಗಿದೆ.
ಈ ಕುರಿತು ಮಾಜಿ ಸಂಸದ ಹಾಗೂ ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತನ್ನು ತಪ್ಪುವವರಲ್ಲ. ಅವರು ಯಾರಿಗೆ ಮಾತು ಕೊಟ್ಟರೂ ತಪ್ಪುವುದಿಲ್ಲ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ. ಸಿಎಂ ಅವರ ಬಳಿ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿಲ್ಲ. ಅಷ್ಟು ದೊಡ್ಡವನೂ ನಾನಲ್ಲ. ಅವರು ಹಿರಿಯ ನಾಯಕರು. ಅವರಿಗೆ ತಮ್ಮದೇ ಆದ ಜವಾಬ್ದಾರಿ ಇದೆ. ಕರ್ನಾಟಕದ ಜನರಿಗೆ ಕೊಟ್ಟ ಎಲ್ಲಾ ಭರವಸೆ ಈಡೇರಿಸಿದ್ದಾರೆ. ಈ ಸರ್ಕಾರದಲ್ಲೂ ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದಾರೋ ಅದರಂತೆ ನಡೆಯುತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿರುವ ಕುರಿತು ಮಾತನಾಡಿ, ಕರ್ನಾಟಕದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇಂದಿಗೆ ಎರಡೂವರೆ ವರ್ಷ ತುಂಬಿದೆ. ಕೊಟ್ಟ ಮಾತಿನಂತೆ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ಪವರ್ ಶೇರಿಂಗ್ ವಿಚಾರದಲ್ಲೂ ಕೊಟ್ಟ ಮಾತಿನಂತೆ ನಡೆಯುತ್ತಾರಾ ಎಂಬ ಬಗ್ಗೆ ಮಾತನಾಡಿ, ಅದು ನನಗೆ ಗೊತ್ತಿಲ್ಲದ ವಿಚಾರ. ಅವರು ಈಗ ಮುಖ್ಯಮಂತ್ರಿ ಆಗಿದ್ದಾರೆ. ಈ ವಿಚಾರವನ್ನು ಪಕ್ಷದ ವರಿಷ್ಠರು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತಾರೆ. ಈ ವಿಚಾರದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನೀವು ಮಾಧ್ಯಮಗಳಲ್ಲಿ ತೋರಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ ಎಂದರು.
ಶಿವಕುಮಾರ್ ಅವರು ಎರಡೂವರೆ ವರ್ಷಗಳ ಬಳಿಕ ಸಿಎಂ ಆಗುತ್ತಾರೆ ಎಂಬ ಚರ್ಚೆ ಅಭಿಮಾನಿ, ಕಾರ್ಯಕರ್ತರಲ್ಲಿದೆ ಎಂಬ ಬಗ್ಗೆ ಮಾತನಾಡಿ, ಎಲ್ಲರಿಗೂ ಆ ಆಸೆ ಇದೆ. ಅವರ ಅಭಿಮಾನಿಗಳು ಹೇಳುತ್ತಿರುತ್ತಾರೆ, ಪೂಜೆ ಮಾಡುತ್ತಿರುತ್ತಾರೆ, ಅವರಿಗೆ ಏನು ಬೇಕೋ ಮಾಡುತ್ತಿರುತ್ತಾರೆ. ನಾವುಗಳು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುವವರು. ಪಕ್ಷ ಏನು ಹೇಳುತ್ತದೆಯೋ ಅದನ್ನು ಸಿಎಂ, ಡಿಸಿಎಂ ಸೇರಿದಂತೆ ಎಲ್ಲಾ ನಾಯಕರು ಪಾಲನೆ ಮಾಡುತ್ತಾರೆ. ಇದು ನಮ್ಮ, ನಿಮ್ಮ ಮುಂದೆ ನಡೆಯುವ ಚರ್ಚೆಯಲ್ಲ. ಇದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಏನೇ ತೀರ್ಮಾನ ಮಾಡುವುದಿದ್ದರೂ ಹೈಕಮಾಂಡ್ ತೀರ್ಮಾನ ಮಾಡಬೇಕು. ಇಲ್ಲಿ ವೈಯಕ್ತಿಕ ವಿಚಾರ ಇಲ್ಲ ಎಂದು ತಿಳಿಸಿದರು.
ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿ ಆರು ವರ್ಷ ಪೂರ್ಣಗೊಳ್ಳುತ್ತಿದೆ ಎಂಬ ಕುರಿತು ಮಾತನಾಡಿ, ಅವರು ಪಕ್ಷದ ಕೆಲಸ ಮಾಡುತ್ತಿದ್ದು, ನಾಳೆ ಬೇರೆಯವರು ಅಧ್ಯಕ್ಷರಾದರೆ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ಯಾರೇ ಅಧ್ಯಕ್ಷರಾದರೂ ಅವರಿಗೆ ಅವಕಾಶ ಮಾಡಿಕೊಡಲು ಶಿವಕುಮಾರ್ ಅವರು ಸಿದ್ಧರಿದ್ದಾರೆ ಎಂದು ತಿಳಿಸಿದರು. ಅವರು ರಾಜೀನಾಮೆ ನೀಡುವುದಿಲ್ಲ ಎಂದು ನಿಮ್ಮ ಬಳಿ ಹೇಳಿಲ್ಲವಲ್ಲ. ನೀವು ಆ ರೀತಿ ಹೇಳುತ್ತಿದ್ದೀರಾ. ಅವಕಾಶ ಸಿಕ್ಕಾಗ ಏನೆಲ್ಲಾ ಮಾಡಬೇಕೋ ಅದನ್ನು ಶಿವಕುಮಾರ್ ಅವರು ಮಾಡಿದ್ದಾರೆ ಎಂದರು.
ನಾನು ಅಧ್ಯಕ್ಷ ಸ್ಥಾನದಿಂದ ಇಳಿದರೂ ಮುಂದಾಳತ್ವ ವಹಿಸುವೆ, ಧೈರ್ಯವಾಗಿರಿ ಎಂದು ಕಾರ್ಯಕರ್ತರಿಗೆ ಹೇಳಿರುವ ಬಗ್ಗೆ ಮಾತನಾಡಿ, ಒಬ್ಬೊಬ್ಬರೂ ಒಂದೊಂದು ರೀತಿ ವ್ಯಾಖ್ಯಾನ ಮಾಡಿ ಕಾರ್ಯಕರ್ತರನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿರುತ್ತಾರೆ. ಹೀಗಾಗಿ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬುವುದು ಪಕ್ಷ ಹಾಗೂ ಅಧ್ಯಕ್ಷರ ಜವಾಬ್ದಾರಿ. ಹೀಗಾಗಿ ಈ ಮಾತುಗಳನ್ನು ಆಡಿರುತ್ತಾರೆ ಎಂದು ಡಿ ಕೆ ಸುರೇಶ್ ತಿಳಿಸಿದರು.












Click it and Unblock the Notifications