ಶಾಸಕ ಸ್ಥಾನಕ್ಕೆ ಡಾ.ಉಮೇಶ್ ಜಾಧವ್ ರಾಜೀನಾಮೆ?
ಬೆಂಗಳೂರು, ಜನವರಿ 20 : ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ?. ಶುಕ್ರವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಅವರು ಗೈರಾಗಿದ್ದರು.
ಹೌದು, ಡಾ.ಉಮೇಶ್ ಜಾಧವ್ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಅವರು ಮುಂಬೈನಲ್ಲಿದ್ದು, ಕೆಲವು ದಿನಗಳ ಬಳಿಕ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಬಿಜೆಪಿ ಸೇರಿ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಸ್ಪರ್ಧಿಸುವ ಸಾಧ್ಯತೆ ಇದೆ. ಶಾಸಕಾಂಗ ಪಕ್ಷದ ಸಭೆಗೆ ಅವರು ಶುಕ್ರವಾರ ಗೈರಾಗಿದ್ದರು.

ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದ ಡಾ.ಉಮೇಶ್ ಜಾಧವ್ ಅವರು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅನಾರೋಗ್ಯದ ಕಾರಣದಿಂದಾಗಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದರು.
ಗುಲ್ಪರ್ಗಾ (ಕಲಬುರಗಿ) ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿಯ ಕೊರತೆ ಇದೆ. ಆದ್ದರಿಂದ, ಉಮೇಶ್ ಜಾಧವ್ ಅವರನ್ನು ಪಕ್ಷಕ್ಕೆ ಸೆಳೆದು ಕಣಕ್ಕಿಳಿಸಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಈಗ ಈ ಬಗ್ಗೆ ಅಧಿಕೃತ ಮಾಹಿತಿಗಳು ಲಭ್ಯವಾಗುತ್ತಿವೆ.
2 ಬಾರಿ ಲೋಕಸಭೆಗೆ, 9 ಬಾರಿ ವಿಧಾನಸಭೆಗೆ ಆರಿಸಿ ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸೋಲಿಲ್ಲದ ಸರದಾರ ಎಂದು ಖ್ಯಾತಿ ಪಡೆದಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅವರನ್ನು ಸೋಲಿಸಿ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಬೇಕು ಎಂಬುದು ಬಿಜೆಪಿಯ ತಂತ್ರವಾಗಿದೆ.












Click it and Unblock the Notifications