ಸಿವಿಲ್ ವ್ಯಾಜ್ಯ ಪ್ರಕರಣ: ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಗುಡ್ ನ್ಯೂಸ್
ಬೆಂಗಳೂರು, ಜೂ. 10: ಸಿವಿಲ್ ಸ್ವರೂಪದ ಭೂ ವ್ಯಾಜ್ಯ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಪೊಲೀಸರು ಅನಗತ್ಯ ನೋಟಿಸ್ ನೀಡುವಂತಿಲ್ಲ. ಮಾತ್ರವಲ್ಲ, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ವಿಚಾರಣೆಗೆ ಒಳಪಡಿಸುವಂತಿಲ್ಲ!
ಹೌದು. ಇಂತಹ ಮಹತ್ವದ ಸುತ್ತೋಲೆಯನ್ನು ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರು ಹೊರಡಿಸಿದ್ದಾರೆ. ಈ ಕುರಿತ ಆದೇಶವನ್ನು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಕಳುಹಿಸಲಾಗಿದೆ. ಒಳಾಡಳಿತ ಇಲಾಖೆಯ ಈ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿಗಳಿಗೆ ಪೊಲೀಸ್ ಇಲಾಖೆ ಸಂದೇಶ ರವಾನಿಸಿದೆ.
ಸಿವಿಲ್ ಭೂ ವ್ಯಾಜ್ಯ ಸಂಬಂಧ ಪೊಲೀಸ್ ಠಾಣೆಗಳಲ್ಲಿ ಅನೇಕ ಪ್ರಕರಣಗಳು ದಾಖಲಾಗುತ್ತಿವೆ. ಅದರಲ್ಲೂ ಬೆಂಗಳೂರಿನಲ್ಲಿ ಶೇ. 50 ರಷ್ಟು ಪ್ರಕರಣಗಳು ಭೂ ವ್ಯಾಜ್ಯಕ್ಕೆ ಸಂಬಂಧಿಸಿದ್ದೇ ಆಗಿರುತ್ತವೆ. ಸಿವಿಲ್ ಸ್ವರೂಪದ ಪ್ರಕರಣಗಳಾಗಿದ್ದರೂ ಪೊಲೀಸರು ಕಂದಾಯ ಇಲಾಖೆಯ ತಹಶೀಲ್ದಾರ್, ಉಪ ತಹಶೀಲ್ದಾರ್, ಕಂದಾಯ ನಿರೀಕ್ಷಕರಿಗೆ ನೋಟಿಸ್ ನೀಡುತ್ತಿದ್ದಾರೆ. ಅನಗತ್ಯವಾಗಿ ನೋಟಿಸ್ ಕೊಟ್ಟು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಸಿವಿಲ್ ವ್ಯಾಜ್ಯ ಪ್ರಕರಣಗಳ ವಿಚಾರಣೆ ಹೆಸರಿನಲ್ಲಿ ಪೊಲೀಸರು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಅನಗತ್ಯ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ಕಂದಾಯ ಇಲಾಖೆಯ ಪ್ರಾದೇಶಿಕ ಆಯುಕ್ತರು ಕಳೆದ ಫೆಬ್ರವರಿಯಲ್ಲಿ ಒಳಾಡಳಿತ ಇಲಾಖೆಗೆ ವರದಿ ನೀಡಿದ್ದರು. ಅನಗತ್ಯವಾಗಿ ನೋಟಿಸ್ ಕೊಟ್ಟು ಕಂದಾಯ ಇಲಾಖೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿರುವ ಬಗ್ಗೆ ವರದಿಯಲ್ಲಿ ಪ್ರಸ್ತಾಪಿಸಿದ್ದರು. ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಒಂದು ಪ್ರಕರಣ ಉಲ್ಲೇಖಿಸಿ, ಇದು ಸಿವಿಲ್ ವ್ಯಾಜ್ಯವಾಗಿದ್ದರೂ, ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಕಂದಾಯ ಇಲಾಖೆಯ ತಹಶೀಲ್ದಾರ್, ವಿಶೇಷ ತಹಶೀಲ್ದಾರ್, ಸಿಬ್ಬಂದಿಗೆ ಅನಗತ್ಯ ನೋಟಿಸ್ ನೀಡಿರುವ ವಿಚಾರ ಬೆಳಕಿಗೆ ಬಂದಿದೆ.
ಸಿವಿಲ್ ವ್ಯಾಜ್ಯ ಪ್ರಕರಣದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸುವ ಮೊದಲು ಕಂದಾಯ ಇಲಾಖೆಯ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆದಿರುವುದಿಲ್ಲ. ಈ ಮೂಲಕ ಕಂದಾಯ ಇಲಾಖೆಯ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಲಾಗುತ್ತಿದೆ. ಈ ಕುರಿತು ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಯ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಲಾಗಿದೆ.

ಅಲ್ಲದೇ ಸಿವಿಲ್ ಸ್ವರೂಪದ ಪ್ರಕರಣಗಳಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸುವ ಮುನ್ನ ಪೊಲೀಸರು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕು. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ. ಈ ಬಗ್ಗೆ ರಾಜ್ಯದ ಎಲ್ಲಾ ಡಿವೈಎಸ್ಪಿ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ ಗಳಿಗೆ ನಿರ್ದೇಶನ ನೀಡುವಂತೆ ರಾಜ್ಯಪೊಲೀಸ್ ಮಹಾ ನಿರ್ದೇಶಕರನ್ನು ಕೋರಲಾಗಿದೆ. ಒಳಾಡಳಿತ ಇಲಾಖೆ ಪತ್ರದ ಬೆನ್ನಲ್ಲೇ ಪೊಲೀಸ್ ಇಲಾಖೆ ಕೂಡ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸುತ್ತೋಲೆ ಹೊರಡಿಸಿದೆ.












Click it and Unblock the Notifications