ಮನೆ ಇಲ್ಲದವರಿಗೆ ಸಿಹಿ ಸುದ್ದಿ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಬೆಂಗಳೂರು, ಆ. 17: ರಾಜ್ಯದಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಗಳಡಿ, 4.09 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಬಾಕಿ ಇರುವ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿವಸದೊಳಗೆ ಜಿಪಿಎಸ್ ಅಪ್‌ಲೋಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಎಎಚ್ ಪಿ- 1.8 ಲಕ್ಷ ಮನೆಗಳು ಕಾಮಗಾರಿ ಪ್ರಾರಂಭವಾಗಿಲ್ಲ. ಈ ಯೋಜನೆಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ, ಹಿಂದುಳಿದ ವರ್ಗಗಳು ಹಾಗೂ ಕಾರ್ಮಿಕ ಫಲಾನುಭವಿಗಳ ವಂತಿಗೆ ಮೊತ್ತವನ್ನು ಆಯಾ ಇಲಾಖೆಗಳ ಯೋಜನೆಗಳಡಿ ಪಡೆದುಕೊಂಡು, ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆಯೂ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಅದರೊಂದಿಗೆ ಬೆಂಗಳೂರು ಮುಖ್ಯಮಂತ್ರಿಗಳ ಬಹುಮಹಡಿ ವಸತಿ ಯೋಜನೆಯಡಿ 42,361 ಮನೆ ನಿರ್ಮಾಣವಾಗುತ್ತಿದ್ದು ಬಾಕಿ ಮನೆಗಳ ಟೆಂಡರ್ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸುವಂತೆ ಆದೇಶ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಮತ್ತೊಂದು ಮಹತ್ವದ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ. ಆ ಮೂಲಕ ಗ್ರಾಮೀಣ ಭಾಗದ ಬಡವರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ.

ಸೂರಿಲ್ಲದ ಗ್ರಾಮೀಣ ಭಾಗದವರಿಗೆ ಸಿಹಿ ಸುದ್ದಿ!
ಗ್ರಾಮೀಣ ಭಾಗದ ಬಡವರಿಗೆ ರಾಜ್ಯ ಬಿಜೆಪಿ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ. ಗ್ರಾಮೀಣ ಪ್ರದೇಶದಲ್ಲಿ ವಿವಿಧ ವಸತಿ ಯೋಜನೆಗಳಡಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಿದ್ಧತೆ ಮಾಡಿ ಕೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ. ಜೊತೆಗೆ ಪ್ರವಾಹ ಸಂದರ್ಭದಲ್ಲಿ ಮನೆ ಹಾನಿಗೆ ನೀಡಬೇಕಾದ ಪರಿಹಾರ ಬಿಡುಗಡೆಗೆ ತಕ್ಷಣ ಕ್ರಮ ವಹಿಸುವಂತೆಯೂ ಸೂಚಿಸಿದ್ದಾರೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ಸೂರಿಲ್ಲದವರಿಗೆ ಹೊಸ ಭರವಸೆ ಸಿಕ್ಕಂತಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ರಸ್ತೆ ದುರಸ್ಥಿಗೆ ಸಿಎಂ ಬೊಮ್ಮಾಯಿ ಸೂಚನೆ
ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ, ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಜೊತೆಗೆ ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ ದುರಸ್ತಿಗೆ ಬಳಕೆ ಮಾಡುವಂತೆ ಸೂಚನೆ ನೀಡಿದ್ದಾರೆ.

ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ
ಜೊತೆಗೆ ರಾಜ್ಯದಲ್ಲಿನ ಹೆದ್ದಾರಿ ಅಭಿವೃದ್ಧಿ ಬಗ್ಗೆಯೂ ಸಿಎಂ ಬಸವರಾಜ್ ಬೊಮ್ಮಾಯಿ ನಿರ್ಣಯ ತೆಗೆದುಕೊಂಡಿದ್ದಾರೆ. "ಹೆದ್ದಾರಿ ಒಂದು ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು" ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
Recommended Video

ಲೋಕೋಪಯೋಗಿ ಇಲಾಖೆ ಸಭೆ
ಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಡಾ. ಕೆ.ಎಸ್. ಕೃಷ್ಣಾರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.












Click it and Unblock the Notifications