ಸೆ. 1 ರಿಂದ ದಿನಕ್ಕೆ 5 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ: ಸಿಎಂ ಬೊಮ್ಮಾಯಿ
ಬೆಂಗಳೂರು, ಆ 27: ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರತಿ ದಿನ 5 ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಇದಕ್ಕೆ ಅಗತ್ಯ ಪ್ರಮಾಣದ ಲಸಿಕೆ ಒದಗಿಸುವುದಾಗಿ ಕೇಂದ್ರ ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ.
ತಮ್ಮ ದೆಹಲಿ ಭೇಟಿಯ ಮುಖ್ಯ ಉದ್ದೇಶ ಹೆಚ್ಚುವರಿ ಲಸಿಕೆ ಪಡೆಯುವುದಾಗಿದ್ದು, ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ಅವರ ಭರವಸೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಪ್ರತಿದಿನ 5 ಲಕ್ಷ ಡೋಸ್ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರ್‌ಟಿ ನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಎರಡು ದಿನಗಳ ದೆಹಲಿ ಭೇಟಿಯಲ್ಲಿ ಕೇಂದ್ರ ಸರ್ಕಾರದ ಹಲವು ಪ್ರಮುಖ ಸಚಿವರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಿದ್ದರು. ಜೊತೆಗೆ ಅಫಘಾನಿಸ್ತಾನದಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟದಲ್ಲಿ ಕನ್ನಡಿಗರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.

ದೆಹಲಿ ಭೇಟಿ ಬಗ್ಗೆ ಸಿಎಂ ಬೊಮ್ಮಾಯಿ ಮಾಹಿತಿ!
ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಮೊದಲಾದ ಯೋಜನೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಯಿತು. ಜೊತೆಗೆ ಸುಪ್ರೀಂ ಕೋರ್ಟ್ ಜಲವಿವಾದಗಳ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲು ಕಾನೂನು ತಜ್ಞರು ಹಾಗೂ ತಾಂತ್ರಿಕ ತಂಡದವರೊಂದಿಗೆ ಚರ್ಚೆ ನಡೆಸಲಾಯಿತು ಎಂದು ತಮ್ಮ ದೆಹಲಿ ಭೇಟಿ ಬಗ್ಗೆ ವಿವರಣೆ ನೀಡಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಜಿ.ಎಸ್.ಟಿ. ಪರಿಹಾರ 2022ಕ್ಕೆ ಅಂತ್ಯಗೊಳ್ಳಲಿದ್ದು, ಇದನ್ನು ಮುಂದುವರೆಸುವಂತೆ ಮನವಿ ಮಾಡಲಾಯಿತು. ಜಿ.ಎಸ್.ಟಿ. ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚಿಸುವುದಾಗಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್
ಪಿಯೂಷ್ ಗೋಯಲ್ ಅವರು ಕರ್ನಾಟಕದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಅಂತರರಾಷ್ಟ್ರೀಯ ಮಟ್ಟದ ಕಂಪೆನಿಗಳ ಜೊತೆ ಸಂಪರ್ಕ ಒದಗಿಸುವುದಾಗಿ ತಿಳಿದ್ದಾರೆ. ಇದು ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ದೊರೆಯಲು ಸಾಧ್ಯವಾಗುತ್ತದೆ. ವಿಶೇಷವಾಗಿ ಹೆಣ್ಣುಮಕ್ಕಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ತ್ಯಾಚಾರ ಪ್ರಕರಣ ತನಿಖೆಗೆ ವಿಶೇಷ ತಂಡ
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ ತನಿಖೆಗೆ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ನಡೆಯುತ್ತಿದೆ. ನನಗೇ ನೇರವಾಗಿ ವರದಿ ಮಾಡಿ ಎಂದು ತಿಳಿಸಿದ್ದೇನೆ. ಡಿಜಿಪಿ ಅವರು ಇಂದು ಸ್ವತಃ ಮೈಸೂರಿಗೆ ಭೇಟಿ ನೀಡಿದ್ದಾರೆ. ಡಿಜಿಪಿ ಅವರೇ ಖುದ್ದು ಈ ಪ್ರಕರಣದ ತನಿಖೆಯ ಮೇಲ್ವಿಚಾರಣೆ ವಹಿಸುವಂತೆ ತಿಳಿಸಿದ್ದೇನೆ. ಶೀಘ್ರದಲ್ಲೇ ಪ್ರಕರಣ ಭೇದಿಸುವಂತೆ ಸೂಚಿಸಿದ್ದೇನೆ ಎಂದರು.
ಕೋವಿಡ್ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿಗಳನ್ನು ರೂಪಿಸುವ ಕುರಿತು ಆಗಸ್ಟ್ 30 ರಂದು ನಡೆಯಲಿರುವ ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ವಿವರಿಸಿದ್ದಾರೆ.
Recommended Video

ಕನ್ನಡಿಗರ ಬಗ್ಗೆ ಸದ್ಯಕ್ಕೆ ಯಾವ ಮಾಹಿತಿ ಸಿಕ್ಕಿಲ್ಲ
ಅತ್ಯಾಚಾರ ಪ್ರಕರಣವನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆ ಯಾವ ಹಂತದಲ್ಲಿದೆ ಅಂತ ಇನ್ನೂ ಪೊಲೀಸರು ತಿಳಿಸಿಲ್ಲ. ನನಗೇ ನೇರವಾಗಿ ವರದಿ ಒಪ್ಪಿಸಲು ಸೂಚಿಸಿದ್ದೇನೆ. ಡಿಜಿಪಿ ಪ್ರವೀಣ್ ಸೂದ್‌ಗೆ ಮೈಸೂರಿಗೆ ಹೋಗಲು ಸೂಚಿಸಿದ್ದೇನೆ. ಅವರೇ ಅಲ್ಲಿ ಅಧಿಕಾರಿಗಳ ಸಭೆ ಮಾಡುತ್ತಾರೆ ಎಂದಿದ್ದಾರೆ.
ಕಾಬೂಲ್ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ಕೊಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ, ಬಾಂಬ್ ಬ್ಲಾಸ್ಟ್‌ನಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಸದ್ಯಕ್ಕೆ ಯಾವ ಮಾಹಿತಿಯೂ ಸಿಕ್ಕಿಲ್ಲ. ಈ ಸಂಬಂಧ ನಿರಂತರ ಮಾಹಿತಿ ಪಡೆಯುತ್ತಿದ್ದೇವೆ. ಕೇಂದ್ರ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ವಿವರಿಸಿದ್ದಾರೆ.
ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆ. 27ಕ್ಕೆ ಎರಡು ವರ್ಷ ಪೂರೈಸಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಇದೇ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಶುಭಕೋರಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದೀರಿ. ಅದಕ್ಕಾಗಿ ಹಾರ್ದಿಕ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ನಿಮ್ಮ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳಲಿ. ಪಕ್ಷ ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಷಿ ಆಗಲಿ ಎಂದು ಟ್ವೀಟ್ ಮೂಲಕ ಶುಭ ಸಿಎಂ ಹಾರೈಸಿದ್ದಾರೆ.












Click it and Unblock the Notifications